ಷರೀಫ್ ಕಾಂಗ್ರೆಸ್ ತೊರೆಯಲ್ಲ, ಹೆಚ್ಚಿನ ಹೊಣೆ ಸಾಧ್ಯತೆ: ಯಾಸೀನ್
ಕ.ಪ್ರ. ವಾರ್ತೆ ರಾಯಚೂರು ಮಾ.30
ಕೇಂದ್ರದ ಮಾಜಿ ಸಚಿವ ಜಾಫರ್ ಷರೀಫ್ ಅವರಿಗೆ ಟಿಕೆಟ್ ನಿರಾಕರಣೆ ಹಿನ್ನೆಲೆಯಲ್ಲಿ ಅವರು ಪಕ್ಷ ತ್ಯಜಿಸುವುದಿಲ್ಲ. ಟಿಕೆಟ್ ನಿರಾಕರಣೆ ಹಿಂದೆ ಪಕ್ಷದ ಹೈಕಮಾಂಡ್ ಷರೀಫ್ ಅವರಿಗೆ ಹೆಚ್ಚಿನ ಹೊಣೆ ನೀಡುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ ಎಂದು ಮಾಜಿ ಶಾಸಕ ಸೈಯದ್ ಯಾಸೀನ್ ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಹೈಕಮಾಂಡ್ ಜಾಫರ್ ಷರೀಫ್ ಅವರಿಗೆ ಟಿಕೆಟ್ ನಿರಾಕರಿಸಿರುವ ಹಿಂದೆ ಅವರ ಸಾಮರ್ಥ್ಯವನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಉದ್ದೇಶವಿರುವ ಸಾಧ್ಯತೆಯಿದೆ ಎಂದರು.
ಕಾಂಗ್ರೆಸ್ನಲ್ಲೇ ಉಳಿಯುವೆ: ಷರೀಫ್ ಅವರು ಯಾವುದೇ ಕಾರಣಕ್ಕೂ ಪಕ್ಷ ತ್ಯಜಿಸುವುದಿಲ್ಲ ಎಂಬ ವಿಶ್ವಾಸ ತಮ್ಮದಾಗಿದ್ದು, ಹಾಗೊಂದು ವೇಳೆ ಅವರು ಪಕ್ಷದಿಂದ ದೂರವುಳಿದರೆ ತಾವು ಕಾಂಗ್ರೆಸ್ನಲ್ಲಿಯೇ ಮುಂದುವರಿಯುವುದಾಗಿ ತಿಳಿಸಿದ ಸೈಯದ್ ಯಾಸೀನ್, ಕಾಂಗ್ರೆಸ್ ರಾಜ್ಯದಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಗೆಲವು ಕಾಣಲಿದೆ ಎಂದರು.
ರಾಯಚೂರು ಲೋಕಸಭೆ ಕ್ಷೇತ್ರದ ಪ್ರಗತಿಯಲ್ಲಿ ನಾಲ್ಕು ಬಾರಿ ಸಂಸದರಾಗಿದ್ದ ಹಾಲಿ ದೇವದುರ್ಗ ಶಾಸಕ ವೆಂಕಟೇಶ ನಾಯಕ ಅವರ ಕೊಡುಗೆಯಿದೆ. ಕ್ಷೇತ್ರದ ವ್ಯಾಪ್ತಿಯ ಪ್ರತಿಯೊಂದು ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿ ಕಾಣಸಿಗುತ್ತದೆ. ಇದು ಕಾಂಗ್ರೆಸ್ ಅಭ್ಯರ್ಥಿಯ ಗೆಲವಿಗೆ ನೆರವಾಗಲಿದೆ ಎಂದರು.
ಕೇಂದ್ರದಿಂದ ಹಲವು ಯೋಜನೆ: ಕಾಂಗ್ರೆಸ್ ಅಭ್ಯರ್ಥಿ ಬಿ.ವಿ. ನಾಯಕ ಅವರು ಮತದಾರರಿಗೆ ಎಲ್ಲ ರೀತಿಯಿಂದ ಹತ್ತಿರದಲ್ಲಿದ್ದು ನಿರಂತರ ಸಂಪರ್ಕವಿಟ್ಟುಕೊಳ್ಳುವುದರಿಂದ ಜನರ ಸಮಸ್ಯೆಗಳಿಗೆ ತುರ್ತು ಸ್ಪಂದನೆ ದೊರೆಯಲಿದೆ ಎಂದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಚುನಾವಣೆಯಲ್ಲಿ ಅಂಥ ಎಲ್ಲ ಯೋಜನೆಗಳು ಮತದಾರರ ಬೆಂಬಲ ಪಡೆಯಲು ದಾರಿ ಮಾಡಲಿವೆ ಎಂದು ಹೇಳಿದರು.
ಕೇಂದ್ರ ಸರ್ಕಾರವು ಹೈದ್ರಾಬಾದ್ ಕರ್ನಾಟಕ ಭಾಗಕ್ಕೆ 371ನೇ ಕಲಂ ಅಡಿ ವಿಶೇಷ ಸ್ಥಾನಮಾನ ನೀಡಿದ್ದು, ಅದರಿಂದ ಲಕ್ಷಾಂತರ ಜನರಿಗೆ ಪ್ರಯೋಜನವಾಗಲಿದೆ. ಈ ನಿಟ್ಟಿನಲ್ಲಿ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಸಾಕಷ್ಟು ಶ್ರಮಿಸಿದ್ದಾರೆ. ಗುಲ್ಬರ್ಗ ವಿಭಾಗದ ಅಭಿವೃದ್ಧಿಯಲ್ಲಿ ಖರ್ಗೆ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು.
ಕಳೆದ ಅನೇಕ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ರಾಯಚೂರು- ಗದ್ವಾಲ್ ರೈಲು ಮಾರ್ಗ, ಪವರ್ಗ್ರಿಡ್ ಸ್ಥಾಪನೆಯಂಥ ಯೋಜನೆಗಳನ್ನು ಖರ್ಗೆ ಅವರು ಜಾರಿಗೆ ತಂದಿದ್ದಾರೆ. ಆದರೆ ಬಿಜೆಪಿಯ ಪ್ರಮುಖರು ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಅನಗತ್ಯ ಆರೋಪ ಹೊರಿಸುತ್ತಿದ್ದಾರೆಂದು ಟೀಕಿಸಿದರು.
ಪ್ರಣಾಳಿಕೆ: ಕಾಂಗ್ರೆಸ್ ಪ್ರಕಟಿಸಿರುವ ಪ್ರಣಾಳಿಕೆಯು ಬಡವರ ಪರವಾಗಿದ್ದು ಮತದಾರರು ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಪಕ್ಷವನ್ನು ಬೆಂಬಲಿಸಲಿದ್ದಾರೆ. ರಾಯಚೂರು ಕ್ಷೇತ್ರದಲ್ಲಿ ಸಹ ಕಾಂಗ್ರೆಸ್ ಅಭ್ಯರ್ಥಿ ಗೆಲವು ನಿಶ್ಚಿತ. ಮತದಾರರು ಉತ್ತಮ ನಡತೆಯುಳ್ಳ ವ್ಯಕ್ತಿಗೆ ಬೆಂಬಲಿಸುವುದು ಸ್ಪಷ್ಟ ಎಂದರು. ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ವಸಂತಕುಮಾರ್, ಶಾಸಕ ವೆಂಕಟೇಶ ನಾಯಕ ಸೇರಿದಂತೆ ಅನೇಕರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

