ಅಕ್ರಮ ಮರಳು ದಂಧೆಗೆ ಕಡಿವಾಣ
ರಾಯಚೂರು: ಜಿಲ್ಲೆಯಲ್ಲಿನ ಅಕ್ರಮ ಮರಳು ಸಾಗಣೆ ದಂಧೆಗೆ ಕಡಿವಾಣ ಹಾಕಲು ಜಿಲ್ಲಾಧಿಕಾರಿಗಳಿಗೆ ಸೂಚಿಸುವುದಾಗಿ ತಿಳಿಸಿ ರುವ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್, ರಾಜಕೀಯ ಪ್ರಭಾವಕ್ಕೆ ಒಳಗಾಗದೇ ಅಕ್ರಮಕ್ಕೆ ತಡೆಯೊಡ್ಡಲಾಗುತ್ತದೆ ಎಂದು ಭರವಸೆ ನೀಡಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಕೃಷ್ಣಾ ನದಿಯಿಂದ ಅಕ್ರಮವಾಗಿ ಮರಳು ಸಾಗಿಸುತ್ತಿದ್ದರೂ ಜಿಲ್ಲಾ ಡಳಿತದ ನಿರ್ಲಕ್ಷ್ಯ ವಹಿಸಿರುವ ಬಗ್ಗೆ ಗಮನ ಸೆಳೆದಾಗ ಪ್ರತಿಕ್ರಿಯಿಸಿ, ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಣೆಗೆ ಅವಕಾಶವಿಲ್ಲ. ಯಾವುದೇ ರಾಜಕೀಯ ಪಕ್ಷಗಳವರು ದಂಧೆಯಲ್ಲಿದ್ದರೂ ರಾಜಕೀಯ ಪ್ರಭಾವಕ್ಕೆ ಅವಕಾಶ ನೀಡುವುದಿಲ್ಲ. ಕಾನೂನು ಕ್ರಮ ನಿಶ್ಚಿತ ಎಂದು ಎಚ್ಚರಿಸಿದರು.
ದೇವದುರ್ಗ ತಾಲೂಕಿನ ಕೋಣಚಪಳಿ ಗ್ರಾಮದಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿ ತಾತ್ಕಾಲಿಕ ಸೇತುವೆ ನಿರ್ಮಿಸಿ ಮರಳು ಸಾಗಣೆ ಮಾಡುತ್ತಿರುವ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಕೂಡಲೇ ಸೇತುವೆ ತೆರವಿಗೆ ಸೂಚಿಸಲಾಗುತ್ತದೆ. ಹಾಗೆಯೇ ಮರಳು ಸಾಗಣೆ ಪರವಾನಗಿಯಿಲ್ಲದ ಸ್ಥಳದಲ್ಲಿ ಮರಳು ಸಾಗಣೆ ಮತ್ತು ಸಂಗ್ರಹಕ್ಕೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದರು.
ಸೂಪರ್ ಸ್ಪೆಷಾಲಿಟಿಗೆ ಬದ್ಧ: ನಗರದ ಒಪೆಕ್ ಆಸ್ಪತ್ರೆಯಲ್ಲಿ ಸೂಪರ್ ಸ್ಪೆಷಾಲಿಟಿ ಸೌಲಭ್ಯ ಆರಂಭಿಸಲು ಸರ್ಕಾರ ಬದ್ಧವಾಗಿದೆ. ರಿಮ್ಸ್ನ ನೂತನ ಕಟ್ಟಡಕ್ಕೆ ಸರ್ಕಾರಿ ಆಸ್ಪತ್ರೆ ಸ್ಥಳಾಂತರ ಶೀಘ್ರ ನಡೆಯಲಿದೆ. ಒಪೆಕ್ ಆಸ್ಪತ್ರೆಗಾಗಿ ವೈದ್ಯಕೀಯ ಉಪಕರಣಗಳ ಖರೀದಿಗೆ 10 ಕೋಟಿ ಮೊತ್ತದ ಟೆಂಡರ್ ಕರೆಯಲಾಗಿದೆ ಎಂದು ತಿಳಿಸಿದರು. ಅಪೋಲೋ ಸಂಸ್ಥೆಯು ವೈದ್ಯಕೀಯ ಉಪಕರಣಗಳನ್ನು ಹೈದರಾಬಾದ್ಗೆ ಅಕ್ರಮವಾಗಿ ಸಾಗಿಸಿರುವ ಬಗ್ಗೆ ತಮ್ಮ ಸರ್ಕಾರಕ್ಕೆ ಸೂಕ್ತ ದಾಖಲೆ ಲಭ್ಯವಾಗಿಲ್ಲ. ಹಾಗಾಗಿ ಅನಿವಾರ್ಯವಾಗಿ ಹೊಸ ಉಪಕರಣಗಳ ಖರೀದಿಗೆ ಮುಂದಾಗಿರುವುದಾಗಿ ತಿಳಿಸಿದ ಅವರು, ಜಿಲ್ಲೆಯಲ್ಲಿ ಬತ್ತದ ಬೆಲೆ ಕುಸಿತ ಕಂಡಿರುವುದು ಸರ್ಕಾರದ ಗಮನದಲ್ಲಿದ್ದು, ಬೆಂಬಲ ಬೆಲೆಯಲ್ಲಿ ಖರೀದಿಗೆ ಶೀಘ್ರವೇ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಸದ್ಯ ಕುಡಿವ ನೀರಿನ ಅಭಾವವಿಲ್ಲ: ಜಿಲ್ಲೆಯಲ್ಲಿ ಸದ್ಯಕ್ಕೆ ಕುಡಿಯುವ ನೀರಿನ ಅಭಾವ ತಲೆದೋರಿಲ್ಲ. ಜಿಲ್ಲಾಡಳಿತ ಸಮಸ್ಯೆ ಎದುರಾದಲ್ಲಿ ಎದುರಿಸಲು ಸಜ್ಜಾಗಿದೆ. ಚುನಾವಣೆಯ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಇದುವರೆಗೆ ತಮಗೆ ಜಿಲ್ಲೆಗೆ ಭೇಟಿ ನೀಡಲು ಅವಕಾಶ ದೊರೆಯಲಿಲ್ಲ. ಸದ್ಯ ನೀತಿ ಸಂಹಿತೆಯ ರಿಯಾಯಿತಿಯ ಹಿನ್ನೆಲೆ ಕುಡಿಯುವ ನೀರಿನ ಪರಿಸ್ಥಿತಿ ಅವಲೋಕಿಸಲು ಆಗಮಿಸಿದ್ದಾಗಿ ತಿಳಿಸಿದರು.
ಕುಡಿಯುವ ನೀರಿನ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗುತ್ತದೆ. ನಗರದ 28 ಮತ್ತು 29ನೇ ವಾರ್ಡ್ ಹೊರತುಪಡಿಸಿ ಇನ್ನುಳಿದಂತೆ ಎಲ್ಲಿಯೂ ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಒದಗಿಸುತ್ತಿಲ್ಲ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಹಂಪನಗೌಡ ಬಾದರ್ಲಿ, ಪ್ರತಾಪಗೌಡ ಪಾಟೀಲ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಸಂತ ಕುಮಾರ್, ಕಾಂಗ್ರೆಸ್ ಅಭ್ಯರ್ಥಿ ಬಿ.ವಿ. ನಾಯಕ ಸೇರಿ ಅನೇಕರಿದ್ದರು.
ಡಿಸಿ ಆದೇಶ ಲೆಕ್ಕಕ್ಕಿಲ್ಲ!
ದೇವದುರ್ಗ: ತಾಲೂಕಿನಲ್ಲಿ ಕೃಷ್ಣಾ ನದಿಯಿಂದ ಅಕ್ರಮ ಮರಳು ಸಾಗಣೆ ತಡೆಗೆ ಜಿಲ್ಲಾಡಳಿತ ಹರಸಾಹಸ ಪಡುತ್ತಿದ್ದು, ಜಿಲ್ಲಾಧಿಕಾರಿಗಳ ಮಾತಿಗೆ ಕೆಳಹಂತದ ಅಧಿಕಾರಿಗಳು ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.
ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಗುರುವಾರ ಸಂಜೆ ತಾಲೂಕಿನ ಬುಂಕಲದೊಡ್ಡಿ ಗ್ರಾಮದಲ್ಲಿ ಈಚೆಗೆ ತಾಲೂಕು ಮಟ್ಟದ ಅಧಿಕಾರಿಗಳು ದಾಳಿ ನಡೆಸಿ ಅಕ್ರಮ ಮರಳು ಸಂಗ್ರಹ ಮತ್ತು ವಾಹನಗಳಿದ್ದ ಸ್ಥಳಕ್ಕೆ ಭೇಟಿ ನೀಡಿ ಅಕ್ರಮ ಮರಳು ಸರಬರಾಜು ಮಾಡುವ ವಾಹನ ಜಪ್ತಿ ಮಾಡಿ ಕೇಸು ದಾಖಲಿಸಲು ಆದೇಶಿಸಿದರು.
ಕೇಸ್ ದಾಖಲಿಸಲು ಹಿಂದೇಟೇಕೆ?: ತಾಲೂಕು ಮಟ್ಟದ ಲೋಕೋಪಯೋಗಿ ಹಾಗೂ ಪೊಲೀಸ್ ಅಧಿಕಾರಿಗಳು ದಾಳಿ ಮಾಡಿ 4 ದಿನಗಳಾಗಿವೆ. ಆದರೂ ಕೇಸ್ ದಾಖಲಿಸದಿರುವ ಬಗ್ಗೆ ಜಿಲ್ಲಾಧಿಕಾರಿಗಳು ತರಾಟೆಗೆ ತೆಗೆದುಕೊಂಡು, ಅಕ್ರಮ ದಂಧೆಯಲ್ಲಿ ತೊಡಗಿದ ವಾಹನಗಳ ಮಾಲೀಕರ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ಆದೇಶಿಸಿದ್ದರು. ಆದರೆ ಜಾಲಹಳ್ಳಿ ಠಾಣೆ ಪಿಎಸ್ಐ ಮತ್ತು ಲೋಕೋಪಯೋಗಿ ಇಲಾಖೆಯ ಎಇಇ ಭೀಮರೆಡ್ಡಿ ಪ್ರಕರಣ ದಾಖಲಿಸಲು ಹಿಂದೇಟು ಹಾಕುತ್ತಿರುವುದು ಈಗ ಸ್ಪಷ್ಟವಾಗಿದೆ.
ದಾಳಿ ವೇಳೆ ವಾಹನ ಪತ್ತೆ:' ಇಂಥ ಪರಿಸ್ಥಿತಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಆದೇಶದ ಹಿನ್ನೆಲೆಯಲ್ಲಿ ಈಚೆಗೆ ತಾಲೂಕಿನ ಬಂಕಲದೊಡ್ಡಿ ಗ್ರಾಮದಲ್ಲಿ ಅಕ್ರಮ ಮರಳು ಸಾಗಣೆ ಮತ್ತು ಸಂಗ್ರಹಣೆ ಮಾಡಿದ್ದವರ ಮೇಲೆ ಲೋಕೋಪಯೋಗಿ ಹಾಗೂ ಪೊಲೀಸ್ ಅಧಿಕಾರಿಗಳು ದಾಳಿ ಮಾಡಿ 21 ಲಾರಿ, 6 ಜೆಸಿಬಿ ಸೇರಿದಂತೆ ವಿವಿಧ ವಾಹನಗಳು ಪತ್ತೆಯಾಗಿದ್ದವು. ಕೇಸು ದಾಖಲಿಸಿಕೊಳ್ಳಲು ಜಾಲಹಳ್ಳಿ ಪೊಲೀಸರು ಹಿಂದೇಟು ಹಾಕುತ್ತಿರುವುದು ಅನುಮಾನಕ್ಕೆ ಎಡೆ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

