ನೀರಾವರಿ ಯೋಜನೆಗಳಿಗೆ ಆದ್ಯತೆ: ಸಂಸದ ಬಿವಿಎನ್
ಮುದಗಲ್: ರಾಯಚೂರು ಲೋಕಸಭೆ ಕ್ಷೇತ್ರದ ವ್ಯಾಪ್ತಿಯ ರೇಲ್ವೆ ಮಾರ್ಗಗಳು, ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡುವುದಾಗಿ ರಾಯಚೂರು ಸಂಸದ ಬಿ.ವಿ. ನಾಯಕ ಹೇಳಿದರು.
ಪಟ್ಟಣದಲ್ಲಿ ಗುರುವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಕೇಂದ್ರದಲ್ಲಿ ಯುಪಿಎ ಸರ್ಕಾರ ಇದ್ದಾಗ ಮತ್ತು ಮಲ್ಲಿಕಾರ್ಜುನ ಖರ್ಗೆಯವರು ರೇಲ್ವೆ ಮಂತ್ರಿಗಳಾಗಿದ್ದಾಗ ಮಂಜೂರಾದ ಗದಗ- ವಾಡಿ, ಮಹೆಬೂಬ್ನಗರ- ಮುನಿರಾಬಾದ್, ಲಿಂಗಸ್ಗೂರು- ಬಳ್ಳಾರಿ ರೈಲು ಮಾರ್ಗಗಳನ್ನು ಪೂರ್ಣಗೊಳಿಸಲು ಶ್ರಮಿಸುವುದಾಗಿ ತಿಳಿಸಿದರು.
ಈಗಾಗಲೇ ಸಚಿವರೊಂದಿಗೆ ಚರ್ಚೆ: ಕೇಂದ್ರದ ರೇಲ್ವೆ ಖಾತೆಯನ್ನು ರಾಜ್ಯದವರೇ ಆದ ಮಾಜಿ ಮುಖ್ಯಮಂತ್ರಿ ಸದಾನಂದಗೌಡರು ವಹಿಸಿಕೊಂಡಿದ್ದು, ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಅವರೊಂದಿಗೆ ಈಗಾಗಲೇ ಚರ್ಚೆ ನಡೆಸಿದ್ದೇನೆ. ಮುಂದೆ ಅವರನ್ನು ಭೇಟಿಯಾಗಿ ಯೋಜನೆಗಳಿಗೆ ಹೆಚ್ಚಿನ ಅನುದಾನವನ್ನು ಪಡೆಯಲು ಹೋರಾಟ ಮಾಡುತ್ತೇನೆ ಎಂದರು.
ಜಿಲ್ಲೆಯ ನೀರಾವರಿ ಯೋಜನೆಗಳಾದ ನಾರಾಯಣಪುರ ಬಲದಂಡೆ ನಾಲೆ 95ರಿಂದ 125 ಕಿಮೀ ವಿಸ್ತರಣೆಗೆ ಮತ್ತು ನಂದವಾಡಗಿ ಏತ ನೀರಾವರಿ ಯೋಜನೆ ಆರಂಭಕ್ಕೆ ರಾಜ್ಯ ಸರ್ಕಾರ ಈಗಾಗಲೇ ಹಸಿರು ನಿಶಾನೆ ತೋರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೆಚ್ಚಿನ ಆಸಕ್ತಿ ತೋರಿದ್ದಾರೆ. ಎಐಬಿಪಿ ಯೋಜನೆಯಲ್ಲಿ ಜಿಲ್ಲೆಯನ್ನು ಸೇರಿಸಲಾಗಿದ್ದು ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿದೆ. ಒಪ್ಪಿಗೆ ಸಿಕ್ಕರೆ ಜಿಲ್ಲೆಯ ನೀರಾವರಿ ಯೋಜನೆಗಳನ್ನು ಇದರಲ್ಲಿ ಮಾಡಬಹುದಾಗಿದೆ ಎಂದರು.
ಪ್ರಸ್ತಾವನೆ ಸಲ್ಲಿಕೆ: ನಾರಾಯಣಪುರ ಎಡದಂಡೆ ನಾಲೆ ಆಧುನೀಕರಣಕ್ಕೆ 4000 ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಅದರಂತೆ ನಾರಾಯಣಪುರ ಬಲದಂಡೆ ನಾಲೆ 0- 95ನೇ ಕಿ.ಮೀ.ವರೆಗೆ ನಾಲೆ ದುರಸ್ತಿಗೆ 750 ಕೋಟಿಯ ಪ್ರಸ್ತಾವನೆಯನ್ನು ಕಳಿಸಲಾಗಿದೆ. ನಾರಾಯಣಪುರ ಬಲದಂಡೆ ನಾಲೆ 95- 125ರ ವರೆಗೆ ವಿಸ್ತರಿಸಲು 'ಬಿ' ಸ್ಕೀಂ ಯೋಜನೆಯಲ್ಲಿ ಟೆಂಡರ್ ಕರೆಯಲಾಗಿದೆ. ಶೀಘ್ರದಲ್ಲೇ ಕೆಲಸ ಆರಂಭವಾಗುತ್ತದೆ ಎಂದು ನೀರಾವರಿ ಮಂತ್ರಿಗಳು ತಿಳಿಸಿದ್ದಾರೆ ಎಂದು ಹೇಳಿದರು.
ಮುದಗಲ್ ಐತಿಹಾಸಿಕ ಕೋಟೆಯನ್ನು ಪ್ರವಾಸಿ ತಾಣ ಮಾಡಲು ಸಂಬಂಧಿಸಿದ ಅಧಿಕಾರಿಗಳ ಜತೆ ಚರ್ಚಿಸುವುದಾಗಿ ತಿಳಿಸಿದರು. ಕಾಂಗ್ರೆಸ್ ಮುಖಂಡ ಡಿ.ಎಸ್. ಹೂಲಗೇರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುನ್ವರ್ಖಾನ್ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

