ನೀತಿ ಸಂಹಿತೆ ಉಲ್ಲಂಘನೆ: 39 ಪ್ರಕರಣ
ಕ.ಪ್ರ. ವಾರ್ತೆ, ಶಿವಮೊಗ್ಗ, ಏ.3
ನೀತಿಸಂಹಿತೆ ಜಾರಿಯಾಗಿ ಎರಡು ವಾರಗಳಾಗಿಲ್ಲ, ಆಗಲೇ ನೀತಿ ಸಂಹಿತೆ ಉಲ್ಲಂಘನೆಯ 39 ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ ಮದ್ಯ ಹಂಚಿಕೆ, ಸೀರೆ ಹಂಚಿಕೆ, ಆಧಾರ್ ಕಾರ್ಡ್ ಮಾಡಿಸಿಕೊಡುವ ಆಮಿಷ ಸೇರಿದಂತೆ ಹಲವು ಮಾದರಿಯ ಪ್ರಕರಣಗಳಿವೆ.
ನಗರದಲ್ಲಿ ಬುಧವಾರ ಜಿಲ್ಲಾಧಿಕಾರಿ ವಿಪುಲ್ ಬನ್ಸಾಲ್ ಹಾಗೂ ಜಿಲ್ಲಾ ರಕ್ಷಣಾಧಿಕಾರಿ ಕೌಶಲೇಂದ್ರ ಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.
ಚುನಾವಣೆ ಘೋಷಣೆಯಾದಾಗಿನಿಂದ ಈ ವರೆಗೆ ಕಿಡಿಗೇಡಿ ಕೃತ್ಯ ನಡೆಸುವ ಅನುಮಾನವಿರುವ 806 ವ್ಯಕ್ತಿಗಳ ವಿರುದ್ಧ ಜಾಮೀನುರಹಿತ ವಾರೆಂಟ್ ಜಾರಿ ಮಾಡಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಖಾಸಗಿ ವ್ಯಕ್ತಿಗಳ ಬಳಿ ಪರವಾನಗಿ ಇದ್ದ 924 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಕ್ರಮ ಮದ್ಯಕ್ಕೆ ಸಂಬಂಧಿಸಿದಂತೆ 15 ಪ್ರಕರಣ, ಮಾದಕ ವಸ್ತು ನಿಷೇದ ಕಾಯ್ದೆ ಅಡಿ 1 ಪ್ರಕರಣವನ್ನು ದಾಖಲಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ 107 ಜನರ ವಿರುದ್ಧ 169 ಪ್ರಕರಣ ದಾಖಲಿಸಲಾಗಿದೆ. ಅಬಕಾರಿ ಇಲಾಖೆಯು 19 ಪ್ರಕರಣ ದಾಖಲಿಸಿದೆ.
ಜಿಲ್ಲೆಯಾದ್ಯಂತ ಭದ್ರತೆಗೆ ವ್ಯಾಪಕ ಕ್ರಮ ಕೈಗೊಳ್ಳಲಾಗಿದೆ. ಪ್ರಮುಖವಾಗಿ 43 ಕಡೆ ಚೆಕ್ಪೋಸ್ಟ್ ಸ್ಥಾಪಿಸಲಾಗಿದೆ. ಜತೆಗೆ ಹಲವೆಡೆ ಇಂಟಿಗ್ರೇಟೆಡ್ ಚೆಕ್ಪೋಸ್ಟ್ ಸಹ ಸ್ಥಾಪಿಸಲಾಗಿದೆ. ಇಂತಹ ಚೆಕ್ಪೋಸ್ಟ್ಗಳಲ್ಲಿ ಸಿಬ್ಬಂದಿಗೆ ಅನುಕೂಲವಾಗುವಂತೆ ಶಾಮಿಯಾನ ಹಾಕಲು ವ್ಯವಸ್ಥೆ ಮಾಡಲಾಗಿದೆ.
ಎಲ್ಲವೂ ತಪಾಸಣೆ: ಚೆಕ್ಪೋಸ್ಟ್ ಮೂಲಕ ಹಾದುಹೋಗುವ ಎಲ್ಲ ವಾಹನಗಳ ತಪಾಸಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಬನ್ಸಾಲ್ ಹೇಳಿದ್ದಾರೆ. ಅಂಬ್ಯುಲೆನ್ಸ್, ಹಾಲಿನ ವಾಹನವನ್ನೂ ತಪಾಸಣೆ ಮಾಡುತ್ತೇವೆ. ಅನುಮಾನ ಬಂದರೆ ಯಾವ ವಾಹನವನ್ನೂ ಬಿಡುವುದಿಲ್ಲ ಎಂದಿದ್ದಾರೆ.
ಬಾರ್ ಮತ್ತು ರೆಸ್ಟೋರೆಂಟ್ಗಳಲ್ಲೇ ರಾಜಕೀಯ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡು ಉಚಿತ ಮದ್ಯ ಸರಬರಾಜು ಮಾಡುತ್ತಿರುವ ಅಂಶದ ಬಗ್ಗೆ ಪರಿಶೀಲನೆ ಮಾಡಲಾಗುವುದು. 16 ಫ್ಲೈಯಿಂಗ್ ಸ್ಕ್ವಾಡ್ಗಳನ್ನು ರಚಿಸಲಾಗಿದ್ದು, ಯಾವುದೇ ಸ್ಥಳಕ್ಕೆ ಅನಿರೀಕ್ಷಿತ ಭೇಟಿ ನೀಡಬಹುದು. ಒಟ್ಟಿನಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸುವುದು ನಮ್ಮ ಉದ್ದೇಶ ಎಂದರು.
ಎಸ್ಪಿ ಕೌಶಲೇಂದ್ರ ಕುಮಾರ್, ನಕ್ಸಲ್ ಪ್ರದೇಶದಲ್ಲಿ ಯಾವುದೇ ಸಮಸ್ಯೆ ಉಂಟಾಗಿಲ್ಲ. ಯಾರೂ ಮತದಾನ ಬಹಿಷ್ಕಾರಕ್ಕೆ ಕರೆ ನೀಡಿಲ್ಲ. ಆದರೂ ಸಹ ಈ ಪ್ರದೇಶದಲ್ಲಿ ವ್ಯಾಪಕ ಬಂದೋಬಸ್ತ್ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಶ್ರೀರಂಗಯ್ಯ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

