ಶಿವಮೊಗ್ಗ

ರು. 1 ಲಕ್ಷದವರೆಗೆ ಸಾಲಮನ್ನಾ

Published On :

ಕ.ಪ್ರ ವಾರ್ತೆ, ಶಿವಮೊಗ್ಗ, ಏ.10
ತಾವು ಅಧಿಕಾರಕ್ಕೆ ಬಂದರೆ ರೈತರು, ನೇಕಾರರು ಹಾಗೂ ಮೀನುಗಾರರಿಗೆ ನೀಡಿದ ರು.  1 ಲಕ್ಷವರೆಗಿನ ಸಾಲ ಮನ್ನಾ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಬುಧವಾರ ಸಂಜೆ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಯನೂರು ಗ್ರಾಮದಲ್ಲಿ  ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿ, ಇದಕ್ಕಾಗಿ ರು.  45,000 ಕೋಟಿ ಬೇಕು. ತಾವು ಅಧಿಕಾರಕ್ಕೆ ಬಂದ ಮೂರು ತಿಂಗಳಲ್ಲಿಯೇ ಈ ಬಗ್ಗೆ ಸರ್ಕಾರಿ ಆದೇಶ ಹೊರಡಿಸುತ್ತೇನೆ ಎಂದರು.
ಪ್ರಣಾಳಿಕೆ ಬಿಡುಗಡೆಗೆ ಮುನ್ನವೇ ಭರವಸೆಗಳ ಮಹಾಪೂರವನ್ನೇ ಹರಿಸಿದ ಅವರು, ರೈತರಿಗೆ 65 ವರ್ಷಗಳ  ನಂತರ ಪಿಂಚಣಿ ನೀಡುವುದಾಗಿ ಪುನರುಚ್ಚರಿಸಿದರು.
ರಾಜ್ಯದ ಎಲ್ಲಾ ನೀರಾವರಿ ಯೋಜನೆಗಳನ್ನು 5 ವರ್ಷದಲ್ಲಿ ಪೂರ್ಣಗೊಳಿಸುತ್ತೇನೆ ಎಂಬ ಭರವಸೆಯನ್ನೂ ನೀಡಿದರು.
ಪಕ್ಷದ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಏ.13ರಂದು ಬಿಡುಗಡೆಯಾಗಲಿದೆ. 200ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತೇವೆ. ಬಹುಮತ ಪಡೆದು ರಾಜ್ಯವನ್ನು ಕಲ್ಯಾಣ ರಾಜ್ಯವನ್ನಾಗಿ ಮಾಡುವ ಹಂಬಲವಿದೆ ಎಂದರು.
ಅಲ್ಪಸಂಖ್ಯಾತರ ಅಭಿವೃದ್ಧಿಗೆ ರು.  2,000 ಕೋಟಿ, ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ರು.  2,000 ಕೋಟಿ, ಕ್ರೈಸ್ತ ಸಮುದಾಯಕ್ಕೆ ರು.  250 ಕೋಟಿ ಅನುದಾನವನ್ನು ಮೀಸಲಿಡುತ್ತೇನೆ. ಈ ಮಕ್ಕಳ ಉನ್ನತ ಶಿಕ್ಷಣದ ವೆಚ್ಚವನ್ನು ಸರ್ಕಾರವೇ ಭರಿಸುವಂತೆ ಮಾಡುತ್ತೇನೆ ಎಂದರು.
ಹುಡುಕಿಕೊಡಿ: ಈ ಕ್ಷೇತ್ರದ ಶಾಸಕರ (ಬಿಜೆಪಿಯ ಕೆ.ಜಿ. ಕುಮಾರಸ್ವಾಮಿ) ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ. ಶಾಸಕರನ್ನು ಹುಡುಕಿಕೊಡಿ ಎಂದು ಬೋರ್ಡ್ ಹಾಕುವ ಪ್ರಸಂಗ ಬಂದಿದೆ ಎಂದು ಯಡಿಯೂರಪ್ಪ ಟೀಕಿಸಿದರು.
ನಿಮ್ಮ ಒತ್ತಾಯದಿಂದಲೇ ಕೆಜೆಪಿ ಅಭ್ಯರ್ಥಿಯಾಗಿ ಜಿ. ಬಸವಣ್ಯಪ್ಪ ಅವರನ್ನು ಕಣಕ್ಕಿಳಿಸಿದ್ದೇವೆ. ಅವರನ್ನು  ಗೆಲ್ಲಿಸಿ, ನಾನು ಮುಖ್ಯಮಂತ್ರಿಯಾಗುವಂತೆ ಮಾಡಿ ಎಂದರು.
ಪಕ್ಷದ ರಾಜ್ಯ ಉಪಾಧ್ಯಕ್ಷ, ತೀರ್ಥಹಳ್ಳಿ ಕ್ಷೇತ್ರದ ಅಭ್ಯರ್ಥಿ ಆರ್.ಎಂ. ಮಂಜುನಾಥ ಗೌಡ, ಯಡಿಯೂರಪ್ಪ ಅವರ ಹೆಸರು ಕೆಡಿಸುವ ಕೆಲಸವನ್ನು ಇದೇ ಊರಿನವರು ಮಾಡಿದ್ದಾರೆ. ಅವರ ಹೆಸರು ಹೇಳಲು ನಾಚಿಕೆಯಾಗುತ್ತದೆ ಎಂದು ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್ ಹೆಸರು ಪ್ರಸ್ತಾಪಿಸದೆ ಟೀಕಿಸಿದರು.
ಸಮಾರಂಭದಲ್ಲಿ ಕೆಜೆಪಿ ಜಿಲ್ಲಾಧ್ಯಕ್ಷ ಜ್ಯೋತಿಪ್ರಕಾಶ್, ಅಭ್ಯರ್ಥಿ ಜಿ. ಬಸವಣ್ಯಪ್ಪ, ಮಹಿಳಾ ಘಟಕದ ಅಧ್ಯಕ್ಷೆ ಗಾಯತ್ರಿ ದೇವಿ ಸೇರಿದಂತೆ ಹಲವರು ಮಾತನಾಡಿದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.