ಶಿವಮೊಗ್ಗ

ವಿವಿಧ ಪಕ್ಷಗಳ ಅಭ್ಯರ್ಥಿಗಳಿಂದ ನಾಮಪತ್ರ

Published On :

ತೀರ್ಥಹಳ್ಳಿ: ಕೆಜೆಪಿ ಉಪಾಧ್ಯಕ್ಷ, ತೀರ್ಥಹಳ್ಳಿ ಕ್ಷೇತ್ರದ ಅಭ್ಯರ್ಥಿ ಆರ್.ಎಂ. ಮಂಜುನಾಥ ಗೌಡ ಇಂದು ತಮ್ಮ ನಾಮಪತ್ರವನ್ನು ಸಲ್ಲಿಸಿದರು.
 ನಂತರ ಬಿಎಸ್‌ಅರ್ ಕಾಂಗ್ರೆಸ್‌ನ  ಅಶೋಕಮೂರ್ತಿ, ಜೆಡಿಎಸ್ ಅಭ್ಯರ್ಥಿ  ಆರ್. ಮದನ್, ಪಕ್ಷೇತರ ಅಭ್ಯರ್ಥಿಯಾಗಿ ಗಾರ್ಡರಗದ್ದೆಯ ಎಚ್.ಬಿ. ಕಿರಣ ಕುಮಾರ್, ನಾಗೇಶ್ ಹೊರಬೈಲು  ನಾಮಪತ್ರ ಸಲ್ಲಿಸಿದರು.
 ಕೆಜೆಪಿ ಅಭ್ಯರ್ಥಿ ಆರ್.ಎಂ. ಮಂಜುನಾಥ ಗೌಡ ಕಲ್ಲಾರೆ ವಿನಾಯಕ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ, ತಮ್ಮ ಬೆಂಬಲಿಗರೊಡನೆ ತಾಲೂಕು ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಪಕ್ಷದ ಶಚ್ಚೀಂದ್ರ, ಮಣಿಹೆಗ್ಡೆ ಈ ಸಂದರ್ಭದಲ್ಲಿದ್ದರು.
ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
ಸಾಗರ: ವಿಧಾನಸಭಾ ಚುನಾವಣೆಗೆ ಸಾಗರ ವಿಧಾನಸಭಾ ಕ್ಷೇತ್ರದಿಂದ ಸೋಮವಾರ ಕಾಂಗ್ರೆಸ್, ಬಿಜೆಪಿ, ಕೆಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.
 ಕಾಂಗ್ರೆಸ್‌ನಿಂದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಬಿಜೆಪಿಯಿಂದ ಶರಾವತಿ ಸಿ.ರಾವ್, ಜೆಡಿಎಸ್‌ನಿಂದ  ಶಾಸಕ ಗೋಪಾಲಕೃಷ್ಣ ಬೇಳೂರು ಹಾಗೂ ಕೆಜೆಪಿಯಿಂದ ಬಿ.ಆರ್. ಜಯಂತ್ ಪ್ರತ್ಯೇಕವಾಗಿ  ಉಪವಿಭಾಗಾಧಿಕಾರಿಗಳ ಸಮ್ಮುಖದಲ್ಲಿ ತಮ್ಮ ನಾಮಪತ್ರ ಸಲ್ಲಿಸಿದರು.
 ಎಲ್ಲ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ತಮ್ಮ ಬೆಂಬಲಿಗರೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ನಂತರ ನಾಮಪತ್ರ ಸಲ್ಲಿಸಿದರು. ಕಾಗೋಡು ಹಾಗೂ ಬೇಳೂರು ನಾಮಪತ್ರ ಸಲ್ಲಿಕೆಗೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಪಾಲ್ಗೊಂಡಿದ್ದರು. ಕಾಂಗ್ರೆಸ್ ನಾಮಪತ್ರ ಸಲ್ಲಿಕೆ ನಂತರ ಗಾಂಧಿ ಮೈದಾನದಲ್ಲಿ ಬಹಿರಂಗ ಸಭೆ ನಡೆಸಿದರೆ, ಕೆಜೆಪಿ ನಾಮಪತ್ರ ಸಲ್ಲಿಕೆಗೆ ಮುನ್ನವೇ ಬ್ರಾಸಂ ಸಭಾ ಭವನದಲ್ಲಿ ಸಭೆ ನಡೆಸಿತು.
ಅಭಿವೃದ್ಧಿ ಜಪ
ಸಾಗರ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾಡಿರುವ ಅಭಿವೃದ್ಧಿಕೆಲಸಗಳು ಕೆಜೆಪಿ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಕೆಜೆಪಿ ಅಭ್ಯರ್ಥಿ ಬಿ.ಆರ್. ಜಯಂತ್ ಹೇಳಿದರು.
 ಸೋಮವಾರ ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿ, ಬಿಎಸ್‌ವೈ ಯೋಜನೆಗಳಿಂದ ಸಹಸ್ರಾರು ಕುಟುಂಬಗಳು ಪ್ರಯೋಜನ ಪಡೆದಿದ್ದು, ಅವುಗಳು ಮತವಾಗಿ ಪರಿವರ್ತನೆಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕರ್ನಾಟಕಕ್ಕೆ ಹೊಸ ಚೈತನ್ಯ ನೀಡುವ ಏಕೈಕ ವ್ಯಕ್ತಿ ಬಿ.ಎಸ್. ಯಡಿಯೂರಪ್ಪ. ರಾಜ್ಯದಲ್ಲಿ ನಮ್ಮ ಪಕ್ಷ ಹೆಚ್ಚು ಸ್ಥಾನಗಳಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದರು.
 ಕೆಜೆಪಿ ರಾಜ್ಯ ಉಪಾಧ್ಯಕ್ಷ ಕೆ.ಎಚ್.ಶ್ರೀನಿವಾಸ್, ಯಾವುದೇ ರಾಷ್ಟ್ರೀಯ ಪಕ್ಷ ಈ ರಾಜ್ಯದ ನೆಲ, ಜಲ, ಬರ, ನದಿ ನೀರಿನ ಸಮಸ್ಯೆಗೆ ಪರಿಹಾರ ಒದಗಿಸಿಲ್ಲ. ಈ ಹಿನ್ನೆಲೆಯಲ್ಲಿ ನಾವೇ ನ್ಯಾಯ ಪಡೆದುಕೊಳ್ಳುವ ಉದ್ದೇಶದಿಂದ ರಾಜ್ಯಕ್ಕೆ ಪ್ರಾದೇಶಿಕ ಪಕ್ಷಗಳ ಅನಿವಾರ್ಯತೆ ಇದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.