ಡಿಸಿಎಂ ಸ್ಥಾನಕ್ಕೆ ಈಶ್ವರಪ್ಪ ರಾಜಿನಾಮೆ ನೀಡಲಿ
ಕ.ಪ್ರ.ವಾರ್ತೆ ಶಿವಮೊಗ್ಗ ಏ.27
ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದು, ಅವರಿಗೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆ ಇಲ್ಲ. ಆದ್ದರಿಂದ ಅವರು ಕೂಡಲೇ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಕೆಪಿಸಿಸಿ ವಕ್ತಾರ, ವಕೀಲ ಕೆ. ದಿವಾಕರ್ ಒತ್ತಾಯಿಸಿದ್ದಾರೆ.
ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಚುನಾವಣೆ ವೇಳೆ ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಕೃಷ್ಣಯ್ಯ ಶೆಟ್ಟಿ ಅವರಿಗೆ ಬಿಜೆಪಿಯು ಟಿಕೆಟ್ ನಿರಾಕರಿಸಿದ್ದು. ಆದ್ದರಿಂದಲೇ ಮುಖ್ಯಮಂತ್ರಿ ಶೆಟ್ಟರ್ ಅವರು ಈಶ್ವರಪ್ಪರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಿಲ್ಲ. ರಾಜ್ಯಪಾಲರು ಅನುಮತಿ ನೀಡಿ 11 ದಿನವಾದರೂ ಸುಮ್ಮನಿದ್ದಾರೆ. ಏಕೆಂದರೆ ಈಶ್ವರಪ್ಪರಿಗೂ ಬಿಜೆಪಿಯ ಟಿಕೆಟ್ ಸಿಗುತ್ತಿರಲಿಲ್ಲ ಎಂದರು.
ಭ್ರಷ್ಟಾಚಾರ ಆರೋಪ ಬಂದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಈಶ್ವರಪ್ಪ ಹೇಳಿದ್ದರು. ಅವರು ಆತ್ಮಹತ್ಯೆ ಮಾಡಿಕೊಳ್ಳುವುದೇನೂ ಬೇಡ. ಡಿಸಿಎಂ ಸ್ಥಾನಕ್ಕೆ ರಾಜಿನಾಮೆ ಕೊಟ್ಟರೆ ಸಾಕು ಎಂದರು.
ಒಳಒಪ್ಪಂದ ಇಲ್ಲ: ಯಾವ ಪಕ್ಷದೊಂದಿಗೂ ಸಹ ಕಾಂಗ್ರೆಸ್ ಪಕ್ಷವಾಗಲಿ, ಅಭ್ಯರ್ಥಿಗಳಾಗಲಿ ಒಳಒಪ್ಪಂದ ಮಾಡಿಕೊಂಡಿಲ್ಲ. ನಮಗೆ ಬಿಜೆಪಿ ಹಾಗೂ ಕೆಜೆಪಿ ಸಮಾನ ವೈರಿಗಳು ಎಂದು ಕೆ. ದಿವಾಕರ್ ಹೇಳಿದರು.
ಶಿವಮೊಗ್ಗ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮೊದಲ ಸ್ಥಾನದಲ್ಲಿದೆ. ಉಳಿದ ಪಕ್ಷಗಳ ಅಭ್ಯರ್ಥಿಗಳು ಎರಡನೇ ಸ್ಥಾನಕ್ಕೆ ಪೈಪೋಟಿ ನಡೆಸುತ್ತಿದ್ದಾರೆ ಎಂದು ಅವರು ಟೀಕಿಸಿದರು.
ಬಿಜೆಪಿ ಪರ ಪ್ರಚಾರದಲ್ಲಿ ಕೆಲ ಅಧಿಕಾರಿಗಳು ತೊಡಗಿರುವ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೆ. ಆದರೆ ಈ ಬಗ್ಗೆ ಇನ್ನೂ ಕ್ರಮ ಕೈಗೊಳ್ಳದಿರುವುದು ಅಚ್ಚರಿಯನ್ನುಂಟು ಮಾಡಿದೆ ಎಂದರು.
ಸುಶ್ಮಾ ಟೀಕೆ: ಕೇಂದ್ರ ಸರ್ಕಾರದ ವಿರುದ್ಧ ಲೋಕಸಭೆ ಪ್ರತಿಪಕ್ಷ ನಾಯಕಿ ಸುಶ್ಮಾ ಸ್ವರಾಜ್ ಅವರು ಟೀಕಿಸಿರುವುದಕ್ಕೆ ಪ್ರತಿಕ್ರಿಯಿಸಿದ ಪಕ್ಷದ ಜಿಲ್ಲಾಧ್ಯಕ್ಷ ಆರ್. ಪ್ರಸನ್ನಕುಮಾರ್, ಅವರು ಈ ಹಿಂದೆ ಪ್ರತಿ ವರ್ಷ ಬಳ್ಳಾರಿಗೆ ಬರುತ್ತಿದ್ದರು. ವರಮಹಾಲಕ್ಷ್ಮೀ ಪೂಜೆಗೆ ಮಾತ್ರ ಬರುತ್ತಿದ್ದೆ ಎಂದು ಅವರು ಹೇಳುತ್ತಾರೆ. ಅದಕ್ಕಲ್ಲ, ಇವರು ವರಮಹಾಲಕ್ಷ್ಮಿಯನ್ನೇ ತಮ್ಮೊಂದಿಗೆ ತೆಗೆದುಕೊಂಡು ಹೋಗಲು ಬರುತ್ತಿದ್ದರು ಎಂದು ಆರೋಪಿಸಿದರು.
ಇವರಿಗೆ ಕೇಂದ್ರ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ ಎಂದ ಅವರು, ಕಾಂಗ್ರೆಸ್ ಪಕ್ಷವು ಭ್ರಷ್ಟಾಚಾರದಲ್ಲಿ ಭಾಗವಹಿಸಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಂಡಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಎಸ್.ಪಿ. ದಿನೇಶ್, ಎಚ್.ಸಿ. ಯೋಗೀಶ್, ಕೆ. ರಂಗನಾಥ್ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

