ಸ್ಥಳಾಂತರಕ್ಕೆ ಬಿಜೆಪಿ ವಿರೋಧ
ಕ.ಪ್ರ.ವಾರ್ತೆ, ಶಿವಮೊಗ್ಗ, ಆ.8
ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ನೆಹರೂ ಕ್ರೀಡಾಂಗಣದಿಂದ ಸ್ಥಳಾಂತರಿಸಿರುವುದು ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡಿದ ಅಪಮಾನ. ಅನಾಗರಿಕ ವರ್ತನೆ. ಜಿಲ್ಲಾಧಿಕಾರಿಯವರು ಈ ರೀತಿ ಬೇಕಾಬಿಟ್ಟಿ ನಿರ್ಧಾರ ಕೈಗೊಂಡಿರುವುದು ತಪ್ಪು ಎಂದು ಬಿಜೆಪಿ ಹೇಳಿದ್ದು, ಕಾರ್ಯಕ್ರಮವನ್ನು ನೆಹರೂ ಕ್ರೀಡಾಂಗಣದಲ್ಲಿಯೇ ಮಾಡದಿದ್ದರೆ ಹೋರಾಟ ರೂಪಿಸುವುದಾಗಿ ಎಚ್ಚರಿಸಿದೆ.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಎನ್. ಚನ್ನಬಸಪ್ಪ ಅವರು ಜಿಲ್ಲಾಧಿಕಾರಿಯವರ ನಿರ್ಧಾರವನ್ನು ಏಕಪಕ್ಷೀಯ ಎಂದು ಟೀಕಿಸಿದ್ದಾರೆ.
ಅಧಿಕಾರ ಕೊಟ್ಟವರಾರು: ಸಂಸದರು, ಶಾಸಕರು, ಸಭಾಪತಿಗಳು ಯಾರನ್ನೂ ಸಂಪರ್ಕಿಸದೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಅಧಿಕಾರವನ್ನು ಜಿಲ್ಲಾಧಿಕಾರಿಯವರಿಗೆ ಕೊಟ್ಟವರು ಯಾರು ಎಂದು ಪ್ರಶ್ನಿಸಿದ್ದಾರೆ.
ಈ ಹಿಂದೆ ಉಪಮುಖ್ಯಮಂತ್ರಿಯಾಗಿದ್ದ ಕೆ.ಎಸ್. ಈಶ್ವರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಿಂಥೆಟಿಕ್ ಟ್ರ್ಯಾಕ್ ಅಳವಡಿಸಿದ್ದರೂ ರಾಷ್ಟ್ರೀಯ ಹಬ್ಬ ಹಾಗೂ ದಸರಾ ಕಾರ್ಯಕ್ರಮವನ್ನು ನೆಹರೂ ಕ್ರೀಡಾಂಗಣದಲ್ಲಿಯೇ ನಡೆಸಲು ತೀರ್ಮಾನಿಸಲಾಗಿತ್ತು. ಅದನ್ನು ಗಾಳಿಗೆ ತೂರಿ ಕಾರ್ಯಕ್ರಮವನ್ನು ಪೊಲೀಸ್ ಪೆರೇಡ್ ಮೈದಾನಕ್ಕೆ ಸ್ಥಳಾಂತರಿಸಲಾಗಿದೆ. ಇದು ದೇಶದ್ರೋಹದ ವರ್ತನೆ ಎಂದು ಟೀಕಿಸಿದ್ದಾರೆ.
ಹಾಳಾಗುವುದಿಲ್ಲವೇ: ಕಾರ್ಯಕ್ರಮವನ್ನು ನೆಹರೂ ಕ್ರೀಡಾಂಗಣದಲ್ಲಿಯೇ ನಡೆಸಿದರೆ ರು. 4.5 ಕೋಟಿ ವೆಚ್ಚ ಮಾಡಿ ನಿರ್ಮಿಸಿರುವ ಹೊಸ ಸಿಂಥೆಟಿಕ್ ಟ್ರ್ಯಾಕ್ ಹಾಳಾಗುವುದಿಲ್ಲವೇ ಎಂದು ಗೋಷ್ಠಿಯಲ್ಲಿ ಎಸ್.ಎನ್. ಚನ್ನಬಸಪ್ಪ ಅವರನ್ನು ಪ್ರಶ್ನಿಸಿದಾಗ, ಹಾಗಾದರೆ ದೇಶಭಕ್ತರ ಪ್ರಾಣಕ್ಕೆ ಬೆಲೆ ಇಲ್ಲವೇ ಎಂದು ಮರು ಪ್ರಶ್ನಿಸಿದರು.
ಹಾಳಾಗಬಹುದು. ಮತ್ತೆ ರಿಪೇರಿ ಮಾಡಬಹುದು. ಎಷ್ಟೋ ಹಣ ವೆಚ್ಚ ಮಾಡಿ ನಿರ್ಮಿಸಿರುವ ರಾಷ್ಟ್ರೀಯ ಹೆದ್ದಾರಿಗಳು ಹಾಳಾಗುವುದಿಲ್ಲವೇ ಮತ್ತೆ ರಿಪೇರಿ ಮಾಡಲು ಆಗುವುದಿಲ್ಲವೇ ಅದೇ ರೀತಿ ಸಿಂಥೆಟಿಕ್ ಟ್ರ್ಯಾಕ್ ಸಹ. ಆದರೆ ಜನರ ಭಾವನೆಗೆ ದಕ್ಕೆಯಾದರೆ ಸಹಿಸಲು ಆಗುವುದಿಲ್ಲ ಎಂದರು.
ಸ್ವಾತಂತ್ರ್ಯೋತ್ಸವನ್ನು ಘನತೆಗೆ ತಕ್ಕಂತೆ ನಡೆಸುವ ನಡೆಸುವ ಹೊಣೆಗಾರಿಕೆ ಜಿಲ್ಲಾಧಿಕಾರಿಯವರಿಗೆ ಬೇಕು. ಈ ವಿಷಯದಲ್ಲಿ ರಾಜಿ ಪ್ರಶ್ನೆಯೇ ಇಲ್ಲ ಎಂದರು.
ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ, ನಗರಾಧ್ಯಕ್ಷ ಜ್ಞಾನೇಶ್ವರ್ ಸೇರಿದಂತೆ ಹಲವು ಮುಖಂಡರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

