ಅತಿವೃಷ್ಟಿ; ಬಿಜೆಪಿ ಸಮಾಲೋಚನಾ ಸಭೆ
ಶಿವಮೊಗ್ಗ: ಮಲೆನಾಡು ಹಾಗೂ ಕರಾವಳಿಯಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿಯ ಬಗ್ಗೆ ಸಮಾಲೋಚನೆ ನಡೆಸಲು 6 ಜಿಲ್ಲೆಗಳ ಪಕ್ಷದ ಜನಪ್ರತಿನಿಧಿಗಳು ಹಾಗೂ ಪದಾಧಿಕಾರಿಗಳ ಸಭೆಯನ್ನು ಬಿಜೆಪಿ 25ರಂದು ನಗರದಲ್ಲಿ ಆಯೋಜಿಸಿದ್ದು, ಪಕ್ಷದ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಭಾಗವಹಿಲಿದ್ದಾರೆ.
ನಗರದಲ್ಲಿ ಸೋಮವಾರ ಕಾರ್ಯಕ್ರಮ ಸಂಚಾಲಕ ಹಾಗೂ ಮಾಜಿ ಶಾಸಕ ಆರಗ ಜ್ಞಾನೇಂದ್ರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿ, ವಾಡಿಕೆಗಿಂತ ಮಳೆ ಹೆಚ್ಚಾಗಿರುವುದರಿಂದ ಮಲೆನಾಡು ಹಾಗೂ ಕರಾವಳಿ ಪ್ರದೇಶದ ರೈತರು ಕೆಂಗೆಟ್ಟು ಹೋಗಿದ್ದಾರೆ. ಈ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಟೀಕಿಸಿದರು.
ಸಮಾಲೋಚನಾ ಸಭೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಯ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು, ಸ್ಥಳೀಯ ಸಂಸ್ಥೆ ಸದಸ್ಯರು, ತಾಲೂಕು ಹಾಗೂ ಜಿಲ್ಲಾ ಘಟಕದ ಆಯ್ದ ಪ್ರಮುಖರು ಭಾಗವಹಿಸುವರು. ಅಲ್ಲದೇ ಅಡಕೆ ಬೆಳೆ ಪ್ರಾತಿನಿಧಿಕ ಸಂಸ್ಥೆಗಳಾದ ಕ್ಯಾಂಪ್ಕೋ, ಮ್ಯಾಮ್ಕೋಸ್, ಆಫ್ಸ್ಕೋಸ್, ತುಮ್ಕೋಸ್, ತೋಟಗಾರ್ಸ್ ಸೇರಿದಂತೆ ವಿವಿಧ ಸಂಸ್ಥೆಗಳ ಪ್ರತಿನಿಧಿಗಳಿಗೂ ಆಹ್ವಾನಿಸಲಾಗಿದೆ ಎಂದರು. ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಲಿದ್ದಾರೆ ಎಂದರು.
ಸಾಲ ಸಿಗಲಿಲ್ಲ: ಸರ್ಕಾರ ಘೋಷಿಸಿದ ಸಾಲ ಮನ್ನಾ ಯೋಜನೆಯ ಫಲಾನುಭವಿ ರೈತರಿಗೆ ಹೊಸದಾಗಿ ಸಾಲ ಸಿಗದೆ ಸಂಕಷ್ಟಕ್ಕೀಡಾಗಿದ್ದಾರೆ. ರಾಜ್ಯ ಅಪೆಕ್ಸ್ ಬ್ಯಾಂಕ್, ಡಿಸಿಸಿ ಬ್ಯಾಂಕ್ಗಳು ಈ ರೈತರಿಗೆ ಇನ್ನೂ ಸಾಲ ನೀಡಿಲ್ಲ. ಈ ಕಾರಣದಿಂದ ರೋಗಪೀಡಿತ ಗದ್ದೆ-ತೋಟಕ್ಕೆ ಸಿಂಪಡಿಸಲು ಔಷಧಿ ಖರೀದಿಸಲಾಗುತ್ತಿಲ್ಲ ಎಂದು ಆರಗ ಜ್ಞಾನೇಂದ್ರ ಟೀಕಿಸಿದರು.
ಜಿಲ್ಲೆಯಲ್ಲಿ ಆಗಿರುವ ಬೆಳೆ ಹಾನಿಯ ಬಗ್ಗೆ ಒಬ್ಬೊಬ್ಬರು ಒಂದೊಂದು ರೀತಿಯ ಮಾಹಿತಿ ನೀಡುತ್ತಿದ್ದಾರೆ. ನಷ್ಟದ ಪ್ರಮಾಣದ ಬಗ್ಗೆ ಜಿಲ್ಲಾಧಿಕಾರಿಯವರು 38 ಕೋಟಿ ಎಂದರೆ, ತೀರ್ಥಹಳ್ಳಿ ತಾಲೂಕೊಂದರಲ್ಲಿಯೇ 73.44 ಕೋಟಿ ನಷ್ಟವಾಗಿದೆ ಎಂದು ಅಲ್ಲಿನ ತಹಸೀಲ್ದಾರರು ಹೇಳುತ್ತಾರೆ. ಜಿಲ್ಲೆಗೆ ಭೇಟಿ ನೀಡಿದ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಪರಶಿವಮೂರ್ತಿ ಅವರು ಅಡಕೆ ಕೊಳೆ ರೋಗದಿಂದ ನಷ್ಟ 160 ಕೋಟಿ ಎನ್ನುತ್ತಿದ್ದಾರೆ. ಯಾವುದು ಸರಿ ಎಂದು ಅವರು ಪ್ರಶ್ನಿಸಿದರು.
ಸಮಾಲೋಚನ ಸಭೆಯಲ್ಲಿ ಈ ಎಲ್ಲಾ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಸರ್ಕಾರಕ್ಕೆ ಸಲಹಾರೂಪದಲ್ಲಿ ಅಭಿಪ್ರಾಯ ತಿಳಿಸಲಾಗುವುದು. ಕ್ರಮ ಕೈಗೊಳ್ಳದಿದ್ದರೆ ಹೋರಾಟ ರೂಪಿಸುವ ಬಗ್ಗೆಯೂ ತೀರ್ಮಾನಿಸಲಾಗುವುದು ಎಂದರು. ಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ಎಂ.ಬಿ. ಭಾನುಪ್ರಕಾಶ್, ಮಾಜಿ ಶಾಸಕ ಕೆ.ಜಿ. ಕುಮಾರಸ್ವಾಮಿ, ನಗರಸಭೆ ಮಾಜಿ ಅಧ್ಯಕ್ಷ ಎನ್.ಜೆ. ರಾಜಶೇಖರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ, ಕಾರ್ಯದರ್ಶಿಗಳಾದ ಮಹೇಂದ್ರನಾಥ್, ಪದ್ಮಿನಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

