ಶಿಕ್ಷಕರ ನೇಮಕಕ್ಕೆ ಆಗ್ರಹಿಸಿ ಪ್ರತಿಭಟನೆ
ಸಾಗರ: ಕೊರತೆ ಇರುವ ಶಿಕ್ಷಕರನ್ನು ತಕ್ಷಣ ಭರ್ತಿಗೊಳಿಸುವಂತೆ ಒತ್ತಾಯಿಸಿ ಗುರುವಾರ ತಾಲೂಕಿನ ಬೆಳಂದೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಹಾಗೂ ಪೋಷಕರು ಶಾಲೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು.
ತ್ಯಾಗರ್ತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೆಳಂದೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 60 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದು ಶಾಲೆಯಲ್ಲಿ ಒಬ್ಬರೆ ಶಿಕ್ಷಕರಿದ್ದಾರೆ. ಕೊರತೆ ಇರುವ ಶಿಕ್ಷಕರನ್ನು ನೇಮಕ ಮಾಡುವಂತೆ ಒತ್ತಾಯಿಸಿ ಶಿಕ್ಷಣ ಇಲಾಖೆಗೆ ಅನೇಕ ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.
ಈ ಶಾಲೆಯಲ್ಲಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ವಿದ್ಯಾಭ್ಯಾಸ ನಡೆಸುತ್ತಿದ್ದಾರೆ. ಬೆಳಂದೂರು ಹಾಗೂ ಮೈಲಾರಿಕೊಪ್ಪ ಭಾಗದ ವಿದ್ಯಾರ್ಥಿಗಳು ಇಲ್ಲಿ ವಿದ್ಯಾಭ್ಯಾಸ ನಡೆಸುತ್ತಿದ್ದಾರೆ. ಬೇರೆಭಾಗದಿಂದ ಶಿಕ್ಷಕರ ನಿಯೋಜನೆ ಮಾಡಿದರೂ ಅವರು ಇಲ್ಲಿಗೆ ಬರಲು ಒಪ್ಪುತ್ತಿಲ್ಲ. ಕಳೆದ ನಾಲ್ಕು ವರ್ಷಗಳಿಂದ ಶಿಕ್ಷಕರ ಸಮಸ್ಯೆ ಇದೆ. ಈ ಬಗ್ಗೆ ವಿಧಾನಸಭಾಧ್ಯಕ್ಷರಿಗೆ, ಸ್ಥಳೀಯ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಲಾಗಿದೆ. ಜಿಲ್ಲೆಯವರೆ ಶಿಕ್ಷಣ ಸಚಿವರಿದ್ದು ಶಿಕ್ಷಕರ ಕೊರತೆ ಬಗ್ಗೆ ಅವರಿಗೂ ಅರಿವಿದೆ ಎಂದು ಹೇಳಿದರು.
ಶಾಲೆಯಲ್ಲಿ ಮೂವರು ಶಿಕ್ಷಕರ ಅಗತ್ಯವಿದ್ದು, ಒಬ್ಬರು ಶಿಕ್ಷಕರು ಮಾತ್ರ ಕಾರ್ಯನಿರ್ವಹಿಸುತ್ತಿರುವುದರಿಂದ ಮಕ್ಕಳಿಗೆ ನಿಗಧಿತ ಸಮಯಕ್ಕೆ ಪಾಠ ಪ್ರವಚನಗಳು ನಡೆಯುತ್ತಿಲ್ಲ. ತಕ್ಷಣ ಶಿಕ್ಷಕರನ್ನು ನೇಮಕ ಮಾಡದೆ ಹೋದರೆ ಶಾಲೆಯನ್ನು ಬಹಿಷ್ಕರಿಸುವುದಾಗಿ ಪ್ರತಿಭಟನಾನಿರತರು ಎಚ್ಚರಿಕೆ ನೀಡಿದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪುಷ್ಪಾಕರ, ಗ್ರಾಮ ಸಮಿತಿ ಅಧ್ಯಕ್ಷ ಗೇಲ್ ರಾಜ್, ಪ್ರಮುಖರಾದ ದೇವರಾಜ್, ಗಣೇಶ್, ಉದಯಕುಮಾರ್, ತೇಜಪ್ಪ ಹಾಜರಿದ್ದರು.
ಶಿಕ್ಷಕರ ನೇಮಕದ ಭರವಸೆ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಸೂಚನೆ ಮೇರೆಗೆ ಶಾಲೆಗೆ ಭೇಟಿ ನೀಡಿದ ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಸ್ವಾಮಿ ಹಾಗೂ ಗ್ರಾಮಾಂತರ ಠಾಣೆಯ ಸಬ್ ಇನ್ಸ್ಪೆಕ್ಟರ್ ದೇವರಾಜ್ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿ ಶೀಘ್ರವಾಗಿ ಕೊರತೆಯಿರುವ ಶಿಕ್ಷಕರನ್ನು ನೇಮಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಶಾಲೆಯ ಬೀಗ ತೆಗೆದು ಪ್ರತಿಭಟನೆಯನ್ನು ಹಿಂದಕ್ಕೆ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

