ಮುಂಬೈ ಅತ್ಯಾಚಾರ ಖಂಡಿಸಿ ಪ್ರತಿಭಟನೆ
ಕ.ಪ್ರ.ವಾರ್ತೆ ಶಿವಮೊಗ್ಗ ಆ.24
ಮುಂಬೈನಲ್ಲಿ ಪತ್ರಿಕಾ ಛಾಯಾಗ್ರಾಹಕಿ ಮೇಲೆ ನಡೆದ ಗ್ಯಾಂಗ್ರೇಪ್ ಪ್ರಕರಣವನ್ನು ಖಂಡಿಸಿ ನಗರದ ವಿವಿಧ ಸಂಘಟನೆಗಳು ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದವು.
ಬಿಜೆಪಿ ಮಹಿಳಾ ಮೋರ್ಚಾ ಹಾಗೂ ರೋಟರಿ ಇನ್ನರ್ ವ್ಹೀಲ್ ಕ್ಲಬ್ನ ಮಹಿಳಾ ಕಾರ್ಯಕರ್ತರು ಪ್ರತಿಭಚಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ ಅವರಿಗೆ ಮನವಿ ಸಲ್ಲಿಸಿದರು.
ತಲೆ ತಗ್ಗಿಸುವಂತಾಗಿದೆ: ಇತ್ತೀಚೆಗೆ ದೆಹಲಿಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರದ ಕಹಿ ನೆನಪು ಮಾಸುವ ಮುನ್ನವೇ, ಮುಂಬೈನಲ್ಲಿ ಪತ್ರಿಕಾ ಛಾಯಾಗ್ರಾಹಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಇಡೀ ದೇಶವೇ ತಲೆ ತಗ್ಗಿಸುವಂತಾಗಿದೆ. ದೆಹಲಿ, ಮುಂಬೈ, ಕರ್ನಾಟಕ ಹಾಗೂ ದೇಶದ ವಿವಿಧ ರಾಜ್ಯಗಳಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಗಳು ಹೆಣ್ಣುಮಕ್ಕಳ ಆತ್ಮಶಕ್ತಿಯನ್ನೇ ಕುಗ್ಗಿಸಿದೆ. ಮಹಿಳೆಯರು ಸಕ್ರಿಯವಾಗಿ ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸದಂತಾಗಿದೆ ಎಂದು ಪ್ರತಿಭಟನಾಕಾರರು ಬೇಸರ ವ್ಯಕ್ತಪಡಿಸಿದರು.
ನಮ್ಮ ದೇಶದ ಸಂಸ್ಕೃತಿ ಮಹಿಳೆಯರನ್ನು ಪೂಜ್ಯ ಭಾವನೆಯಿಂದ ಕಾಣುವ ವಿಶಾಲ ದೃಷ್ಟಿ ಹೊಂದಿದೆ. ಅದರೆ ಇತ್ತೀಚೆಗೆ ನಮ್ಮ ದೇಶದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಮಹಿಳೆಯರನ್ನು ಭಯದಿಂದ ಬದುಕುವಂತೆ ಮಾಡಿದ್ದು, ಮಹಿಳಾ ಪತ್ರಿಕಾ ಛಾಯಾಚಿತ್ರಗ್ರಾಹಕರಿಗೂ ಸಮಾಜದಲ್ಲಿ ರಕ್ಷಣೆ ಇಲ್ಲದಿರುವುದು ಕಳವಳಕಾರಿ ಸಂಗತಿ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಸೂಕ್ತ ಯೋಜನೆ ರೂಪಿಸಿ: ಕೂಡಲೇ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಎಚ್ಚೆತ್ತುಕೊಂಡು ಇಂತಹ ಘಟನೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಮರ್ಪಕ ಯೋಜನೆ ರೂಪಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೆಣ್ಣು ಮಕ್ಕಳು ಹಗಲಿನಲ್ಲೇ ಒಂಟಿಯಾಗಿ ಓಡಾಡುವುದೂ ಕಷ್ಟವಾಗಲಿದೆ ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು.
ಅತ್ಯಾಚಾರ ಎಸಗುವವರಿಗೆ ಗಲ್ಲಿಗೇರಿಸಬೇಕು. ಮಹಿಳೆಯರು ನಿರ್ಭೀತಿಯಿಂದ ಬದುಕುವ ವಾತಾವರಣ ನಿರ್ಮಿಸಬೇಕು. ಮುಂದೆಂದೂ ಇಂತಹ ಕೃತ್ಯಗಳು ಪುನರಾವರ್ತಿತವಾಗದಂತೆ ನೋಡಿಕೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ. ಮಹಿಳಾ ಮೋರ್ಚಾದ ರಾಜ್ಯ ಕಾರ್ಯದರ್ಶಿ ಸುವರ್ಣ ಶಂಕರ್, ಅಧ್ಯಕ್ಷೆ ಮಂಜುಳಾ ಪಾಂಡೆ, ನಗರಸಭೆ ಸದಸ್ಯೆ ಸುರೇಖಾ ಮುರುಳೀಧರ್, ಮಹಾಲಕ್ಷ್ಮೀ, ಆಶಾ ಚನ್ನಬಸಪ್ಪ, ಸುನೀತಾ ಅಣ್ಣಪ್ಪ, ಗಿರಿಜಮ್ಮ ಹಾಗೂ ಶಿವಮೊಗ್ಗ ರೋಟರಿ ಪೂರ್ವ ಕ್ಲಬ್ನ ಜಿ. ವಿಜಯಕುಮಾರ್, ಇನ್ನರ್ ವ್ಹೀಲ್ ಕ್ಲಬ್ನ ಟಿ.ಎಸ್.ಸೌಜನ್ಯ, ಆಶಾ ಶ್ರೀಕಾಂತ್, ಅನಿತಾ ರವಿಶಂಕರ್, ಗೀತಾ ರವೀಂದ್ರ, ಜ್ಯೋತಿ, ಸೀತಾ ರತ್ನಾ, ಶಶಿಕಲಾ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

