ಶಿವಮೊಗ್ಗ

ಕೊಳೆ ರೋಗ: ಪ್ಯಾಕೇಜ್ ಘೋಷಣೆಗೆ ಆಗ್ರಹ

Published On :

ಕ.ಪ್ರ.ವಾರ್ತೆ, ಶಿವಮೊಗ್ಗ, ಆ.25
ರಾಜ್ಯದಲ್ಲಿ ಸುರಿದ ಅಪಾರ ಮಳೆಯಿಂದಾಗಿ ಅಡಕೆ ಬೆಳೆಗೆ ಕೊಳೆ ರೋಗ ತಗುಲಿ ಸಂಪೂರ್ಣ ಹಾಳಾಗಿದ್ದು, ಸರ್ಕಾರ ಕೂಡಲೇ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಭಾರತೀಯ ಜನತಾ ಪಕ್ಷ ಸರ್ಕಾರವನ್ನು ಆಗ್ರಹಿಸಿದೆ.
ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಯಾದ ಅಡಕೆ, ಬತ್ತ, ಜೋಳ, ಶುಂಠಿ- ರೈತರ ಸಮಸ್ಯೆಗಳ ಕುರಿತು ಅಧ್ಯಯನ-ಪರಿಹಾರ-ಹೋರಾಟ ರೂಪಿಸುವ ಸಂಬಂಧ ಭಾನುವಾರ ಆಯೋಜಿಸಿದ್ದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಅಡಕೆ ಬೆಳೆಯು ಮಳೆಗೆ ಸಿಲುಕಿ, ರೈತರು ನಷ್ಟ ಅನುಭವಿಸಿದ್ದಾರೆ. ಆದರೆ, ಸರ್ಕಾರ ಇವರಿಗೆ ಯಾವುದೇ ರೀತಿಯಲ್ಲಿಯೂ ಸ್ಪಂದಿಸುತ್ತಿಲ್ಲ. ಇನ್ನಾದರೂ ರೈತರ ನೆರವಿಗೆ ಸರ್ಕಾರ ಧಾವಿಸಬೇಕು. ಇಲ್ಲವಾದಲ್ಲಿ ಬಿಜೆಪಿ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ಬೇಡಿಕೆ ತಿಳಿಸಿ: ಯಾರು ಪಾಲಿಸಿಗಳನ್ನು ರಚನೆ ಮಾಡುತ್ತಾರೂ ಅವರಿಗೆ ನಿಜವಾದ ಸಮಸ್ಯೆ ಏನೆಂಬುದು ಅರಿವಿರುವುದಿಲ್ಲ. ಯಾರು ಸಮಸ್ಯೆ ಜೊತೆಗೆ ಬದುಕುತ್ತಾರೋ ಅಂತವರು ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಡಕೆ ಬೆಳೆಯ ಸಂತ್ರಸ್ತರು ತಮ್ಮ ಬೇಡಿಕೆ ಏನೆಂಬುದನ್ನು ನಮ್ಮ ಗಮನಕ್ಕೆ ತಂದರೆ ಅದನ್ನು ಸರ್ಕಾರದ ಮುಂದೆ ಇಡಲಾಗುವುದು ಎಂದು ತಿಳಿಸಿದರು.  
ನಾಮಕೇವಾಸ್ತೆ ಸಚಿವರು: ಹಳದಿ, ಕೊಳೆ ರೋಗ ನಿಯಂತ್ರಣಕ್ಕೆ ಮುಂಜಾಗ್ರತ ಕ್ರಮಕೈಗೊಳ್ಳಲು ಸರ್ಕಾರ ಮುಂದಾಗಬೇಕು. ಅನಾಹುತಗಳ ಬಗ್ಗೆ ಸಭೆ ನಡೆಸಬೇಕು ಎಂದು ಒತ್ತಾಯಿಸಿದ ಅವರು, ಕೃಷಿ ಇಲಾಖೆಗೆ ನಾಮಕೇವಾಸ್ತೆಗೆ ಸಚಿವರನ್ನು ನೇಮಕ ಮಾಡಿದ್ದಾರೆ. ಕೂಡಲೇ ಇವರನ್ನು ಕ್ಯಾಬಿನೇಟ್ ದರ್ಜೆಗೇರಿಸಿ, ಸೂಕ್ತ ಪರಿಹಾರ ನೀಡಲು ಕ್ರಮಕೈಗೊಳ್ಳಬೇಕು. ಮುಖ್ಯಮಂತ್ರಿಗಳು ಒಂದೆರಡು ಅಡಕೆ ತೋಟಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಆಗ್ರಹಿಸಿದರು.
ಕಳೆದ 10 ವರ್ಷಗಳಲ್ಲಿ 1 ಲಕ್ಷಕ್ಕೂ ಹೆಚ್ಚು ರೈತರು ಮೃತಪಟ್ಟಿರುವುದೇ ಸಾಕ್ಷಿಯಾಗಿದೆ. 2008ರಲ್ಲಿ ಮಹಾರಾಷ್ಟ್ರದ ವಿದರ್ಭದಲ್ಲಿ ನಡೆದ ಘಟನೆ ಸಾಕ್ಷಿ. ಇದಾದ ನಂತರ ಟಾಟಾ ಇನ್‌ಸ್ಟಿಟ್ಯೂಟ್ ಸಂಸ್ಥೆ ವರದಿಯೊಂದನ್ನು ಮಹಾರಾಷ್ಟ್ರ ಹೈಕೋರ್ಟಿಗೆ ಸಲ್ಲಿಸಿತ್ತು. ಅದರಲ್ಲಿ ಆತಂಕಕಾರಿ ವಿಷಯವೊಂದು ನೀಡಿದ್ದು, ಶೇ.50ರಷ್ಟು ರೈತರು ಕೃಷಿಗೆ ಪರ್ಯಾಯವಾಗಿ ಯಾವುದಾದರೂ ಉದ್ಯೋಗ ದೊರೆತರೆ ಕೃಷಿ ತೊರೆಯಲಿದ್ದಾರೆ ಎಂಬ ಅಂಶವನ್ನು ದಾಖಲಿಸಿ ಆತಂಕ ಮೂಡಿಸಿತ್ತು ಎಂದರು.
ಎಲ್ಲ ವಸ್ತುಗಳ ಬೆಲೆ: ಒಂದು ವೇಳೆ ರೈತರು ಕೃಷಿ ಬಿಟ್ಟರೆ ದೇಶದಲ್ಲಿ ಸ್ವಾವಲಂಬನೆ ತರಲು ಸಾಧ್ಯವಿಲ್ಲ. ಹಾಗಾಗಿ ರೈತರನ್ನು ಉಳಿಸಿಕೊಳ್ಳುವ ಕೆಲಸ ಸರ್ಕಾರದಿಂದ ಆಗಬೇಕಿದೆ ಎಂದ ಅವರು, ಸರ್ಕಾರ ಗೋದಿ ಆಮದಿಗೆ ಮುಂದದಾಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗೋದಿ ಬೆಲೆ ಇದಕ್ಕಿದ್ದಂತೆ 3ಪಟ್ಟು ಹೆಚ್ಚಾಯಿತು. ಇದೇ ರೀತಿಯಲ್ಲಿ ಎಲ್ಲಾ ವಸ್ತುಗಳ ಬೆಲೆಯೂ ಏರಿಕೆಯಾಗಿದೆ ಎಂದರು. ವೇದಿಕೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಶಾಸಕ ಜೀವರಾಜ್, ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್, ವಿಪ ಸದಸ್ಯ ಭಾನುಪ್ರಕಾಶ್, ಸಿದ್ದರಾಮಣ್ಣ, ಮಾಜಿ ಶಾಸಕ ಆರಗ ಜ್ಞಾನೇಂದ್ರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.