ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹ
ಶಿವಮೊಗ್ಗ: ಪ್ರಯೋಗ ಶಾಲಾ ತಂತ್ರಜ್ಞ ರಾಮಮೂರ್ತಿಯವರ ಮೇಲಿನ ಹಲ್ಲೆ ಪ್ರಕರಣವನ್ನು ಹಲ್ಲೆ ನಡೆಸಿದ್ದನ್ನು ಖಂಡಿಸಿರುವ ರಾಜ್ಯ ಸರ್ಕಾರಿ ನೌಕರರ ಸಂಘವು ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.
ಸಾಗರ ತಾಲೂಕಿನ ಆವಿನಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಯೋಗ ಶಾಲಾ ತಂತ್ರಜ್ಞರಾಗಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆಯಲ್ಲಿ ಅ.28ರಂದು 12 ಗಂಟೆಗೆ ಕುಮಾರ್ ಎಂಬವರು ತಮ್ಮ ಸಂಬಂಧಿಕರಿಗೆ ರಕ್ತಪರೀಕ್ಷೆ ಮಾಡುವಂತೆ ಕೇಳಿದ್ದು, ವೈದ್ಯರ ಚೀಟಿ ಕೊಡುವಂತೆ ಕೇಳಿದಾಗ ಆ ವ್ಯಕ್ತಿಯು ಹೇಳಿದ ಪರೀಕ್ಷೆ ಆ ಪ್ರಯೋಗ ಶಾಲೆಯಲ್ಲಿ ಇಲ್ಲವೆಂದು ತಿಳಿಸಿದ್ದಾಗಿಯೂ ವೈದ್ಯರ ಚೀಟಿ ಇಲ್ಲದೆ, ನೇರವಾಗಿ ಪರೀಕ್ಷೆ ಮಾಡುವಂತೆ ದಬ್ಬಾಳಿಕೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ.
ಈಗಾಗಲೇ ಸಾಗರ ಉಪವಿಭಾಗಾಧಿಕಾರಿಗೆ ಹಾಗೂ ಸಾಗರ ಗ್ರಾಮಾಂತರ ಠಾಣೆಯಲ್ಲಿ ದೂರು ಸಲ್ಲಿಸಿದ್ದು, ಹಲ್ಲೆ ನಡೆಸಿದ ವ್ಯಕ್ತಿ ತಲೆಮರೆಸಿಕೊಂಡಿದ್ದು, ಹಲ್ಲೆ ನಡೆಸಿದ ವ್ಯಕ್ತಿಯನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಕಳೆದ ವಾರ ಶಿಕಾರಿಪುರ ಗ್ರಾಮಲೆಕ್ಕಾಧಿಕಾರಿಗಳ ಮೇಲೆ ಹಲ್ಲೆ ಮಾಡಿರುವುದನ್ನು ಸಂಘ ಖಂಡಿಸಿದ್ದು, ಈ ರೀತಿಯ ಪ್ರಕರಣಗಳು ಪದೇ ಪದೇ ಮರುಕಳಿಸುತ್ತಿರುವುದರಿಂದ ಸರ್ಕಾರಿ ನೌಕರರು ಆತಂಕ ಹಾಗೂ ಭಯದ ವಾತಾವರಣದಲ್ಲಿ ಕೆಲಸ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಮತ್ತು ನಿರ್ಭೀತಿಯಿಂದ ಕೆಲಸ ನಿರ್ವಹಿಸಲು ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ಎಲ್ಲಾ ಅಗತ್ಯ ಕ್ರಮ ಹಾಗೂ ಸೂಕ್ತ ರಕ್ಷಣೆಯನ್ನು ನೀಡುವಂತೆ ಸರ್ಕಾರಿ ನೌಕರರ ಸಂಘ ಜಿಲ್ಲಾಧಿಕಾರಿಯವರನ್ನು ಒತ್ತಾಯಿಸಿದೆ.
ಮನವಿ ನೀಡುವ ಸಂದರ್ಭದಲ್ಲಿ ಜಿಲ್ಲಾ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ನಿರ್ದೇಶಕರು, ಸಂಘದ ಸದಸ್ಯರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

