ಶಿವಮೊಗ್ಗ

ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ

Published On :

ಶಿವಮೊಗ್ಗ: 2013-14ನೇ ಸಾಲಿನ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ರಾಜ್ಯಮಟ್ಟದ ಕಾರ್ಯಕ್ರಮವು ಸೆ.5ರಂದು ನಗರದ ನೆಹರೂ ಕ್ರೀಡಾಂಗಣ ಮುಂಭಾಗದ ಹಾಕಿ ಮೈದಾನದಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
 ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರ ನೀಡಿದ ಜಿಲ್ಲಾಧಿಕಾರಿ ವಿಪುಲ್ ಬನ್ಸಲ್, ಇದೇ ಮೊದಲ ಬಾರಿಗೆ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಶಿವಮೊಗ್ಗ ನಗರದಲ್ಲಿ ನಡೆಯುತ್ತಿದ್ದು, ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಡಿ.ಹೆಚ್. ಶಂಕರಮೂರ್ತಿ, ವಿಧಾನ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಸೇರಿದಂತೆ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದರು.
 ಸ್ಥಳೀಯ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕಿಮ್ಮನೆ ರತ್ನಾಕರ ಅವರು ರಾಜ್ಯ ಮಟ್ಟದ ಶಿಕ್ಷಕರ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ತಿಳಿಸಿದರು.
ಸಮಿತಿ ರಚನೆ: ರಾಜ್ಯ ಮಟ್ಟದ ಕಾರ್ಯಕ್ರಮ ವ್ಯವಸ್ಥಿತ ಆಯೋಜನೆ ಸಂಬಂಧ ವಿವಿಧ 10 ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿಗಳ ಎಲ್ಲಾ ಪದಾಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಹೇಳಿದರು.
 ರಾಜ್ಯಮಟ್ಟದಲ್ಲಿ ಒಟ್ಟು 51 ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತಿದ್ದು, ಪ್ರಾಥಮಿಕ ಶಾಲಾ ವಿಭಾಗದಲ್ಲಿ 26, ಪ್ರೌಢಶಾಲಾ ವಿಭಾಗದಲ್ಲಿ 15, ಪಿಯುಸಿ ವಿಭಾಗದಲ್ಲಿ 8 ಹಾಗೂ ಗೋವಿಂದೇಗೌಡರ ಉತ್ತಮ ಶಾಲಾ ಪ್ರಶಸ್ತಿ 2 ಸೇರಿವೆ ಎಂದರು.
ಪ್ರವಾಸ ಭತ್ಯೆ: ಸಮಾರಂಭಕ್ಕೆ ರಾಜ್ಯದ ವಿವಿಧ ಮೂಲೆಗಳಿಂದ ಸುಮಾರು 3,500ಕ್ಕೂ ಹೆಚ್ಚು ಮಂದಿ ಆಗಮಿಸಲಿದ್ದು, ಆಹ್ವಾನಿತರಿಗೆ ವಸತಿ ಸೌಲಭ್ಯ, ಸಾರಿಗೆ ವ್ಯವಸ್ಥೆ, ಪ್ರವಾಸಭತ್ಯೆ ವಿತರಣೆ ಇನ್ನಿತರ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮ ನಡೆಯುವ ಸಂಬಂಧ ಈಗಾಗಲೇ ವ್ಯಾಪಕ ಪ್ರಚಾರ ಮಾಡಲಾಗಿದ್ದು, ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಮಾಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಊಟದ ವ್ಯವಸ್ಥೆಯನ್ನು ಎನ್‌ಇಎಸ್ ಶಾಲಾ ಮೈದಾನದಲ್ಲಿ ಮಾಡಲಾಗಿದ್ದು, ಈ ಕುರಿತು ಸೂಚನಾ ಫಲಕಗಳನ್ನು ಅಳವಡಿಸಲಾಗುವುದು ಎಂದು ತಿಳಿಸಿದರು.
 ಪತ್ರಿಕಾಗೋಷ್ಠಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್.ಎಸ್. ಕುಮಾರ್ ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪಾರದರ್ಶಕತೆಗೆ ಒತ್ತು
ಈ ಬಾರಿ ಜಿಲ್ಲಾ ಪ್ರಶಸ್ತಿ ನೀಡುವ ಪ್ರಕ್ರಿಯೆಯಲ್ಲಿ ಪಾರದರ್ಶಕತೆಗೆ ಹೆಚ್ಚು ಒತ್ತು ನೀಡಲಾಗುವುದು. ಆಯ್ಕೆಯನ್ನು ನಿಷ್ಪಕ್ಷಪಾತದಿಂದ ನಿರ್ವಹಿಸುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಹೇಳಿದರು.
 ಯಾವುದೇ ಕಾರಣಕ್ಕೂ ತಾರತಮ್ಯ ಆಗಲು ಬಿಡುವುದಿಲ್ಲ. ಆಯ್ಕೆ ಸಮಿತಿ ಸಭೆಯ ನಡಾವಳಿ ಎಲ್ಲರಿಗೂ ಲಭ್ಯವಾಗುವಂತೆ ಮಾಡಲಾಗುವುದು ಎಂದರು.
 ಸೆ.5ರಂದು ನಡೆಯುವ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಅಂಗವಾಗಿ ಶಿವಮೊಗ್ಗ ತಾಲೂಕಿನ ಎಲ್ಲ ಶಾಲೆಗಳಿಗೆ ರಜೆ ನೀಡಲಾಗುವುದು. ಹೊರ ತಾಲೂಕಿನಿಂದ ತಲಾ 100 ಶಿಕ್ಷಕರು ಆಗಮಿಸುವರು. ಜಿಲ್ಲಾ ಮಟ್ಟದ ಕಾರ್ಯಕ್ರಮವು ಅದೇ ದಿನ ಅದೇ ವೇದಿಕೆಯಲ್ಲಿ ನಡೆಯುವುದು. ತಾಲೂಕು ಮಟ್ಟದ ಕಾರ್ಯಕ್ರಮವು ಶಿವಮೊಗ್ಗ ಹೊರತುಪಡಿಸಿ ಬೇರೆ ತಾಲೂಕು ಕೇಂದ್ರಗಳಲ್ಲಿ ಸೆ.6ರಂದು ನಡೆಯುವುದು ಎಂದು ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಅವರು ಇದೇ ಸಂದರ್ಭದಲ್ಲಿ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.