ಕಾಮಗಾರಿ ಪ್ರಾರಂಭಿಸಿ
ಕ.ಪ್ರ. ವಾರ್ತೆ, ಶಿವಮೊಗ್ಗ, ಡಿ.2
ತುಂಗಾಭದ್ರಾ ಏತ ನೀರಾವರಿ ಯೋಜನೆ ಕಾಮಗಾರಿಯನ್ನು ಕೂಡಲೇ ಪ್ರಾರಂಭ ಮಾಡುವಂತೆ ಒತ್ತಾಯಿಸಿ ಪಕ್ಷಾತೀತ ಹೋರಾಟ ಸಮಿತಿಯ ನೇತೃತ್ವದಲ್ಲಿ ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ತಾಲೂಕಿನ ವಿವಿಧ ಗ್ರಾಮಗಳ ಗ್ರಾಮಸ್ಥರು ಧರಣಿ ನಡೆಸಿದರು.
ತಾಲೂಕಿನ ಹೊಳಲೂರು ಹೋಬಳಿ ಕೊಮ್ಮನಾಳು ಸಮೀಪದ ಬೂದಿಗೆರೆ ಕೆರೆಯ ಏತ ನೀರಾವರಿ ಕಾಮಗಾರಿ ಸ್ಥಗಿತಗೊಂಡಿದ್ದು, ಕುಂಚೇನಹಳ್ಳಿ, ಕೊಮ್ಮನಾಳು, ಹರಮಘಟ್ಟ ಗ್ರಾಪಂ ವ್ಯಾಪ್ತಿಯ ಸುಮಾರು 10 ಗ್ರಾಮಗಳ ಕೃಷಿ, ಕುಡಿಯುವ ನೀರು, ತೋಟಗಾರಿಕಾ ಬೆಳೆಗಳಿಗೆ ನೀರು ಹಾಗೂ ಅಂತರ್ಜಲ ಮಟ್ಟ ಹೆಚ್ಚಳದ ಉದ್ದೇಶದಿಂದ ಈ ಯೋಜನೆ ಅನುಷ್ಠಾನ ಮಾಡಲಾಗಿತ್ತು. ಅದರಂತೆ ಸರ್ಕಾರ 2007ರಲ್ಲಿ ಕಾಮಗಾರಿಗೆ ಅನುಮೋದನೆ ಕೂಡ ನೀಡಿತ್ತು. ನಂತರ 2010ರಲ್ಲಿ 7.06 ಕೋಟಿ ಬಿಡುಗಡೆಯಾಗಿದೆ. 25 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲು ಗಡುವು ನೀಡಲಾಗಿತ್ತು. ಅದರಂತೆ 2010ರ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಬೇಕಾಗಿತ್ತು. ಆದರೆ, ಇದುವರೆಗೂ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ಧರಣಿನಿರತರು ಆರೋಪಿಸಿದರು.
ಪ್ರಯೋಜನವಾಗಿಲ್ಲ: ಕಾಮಗಾರಿ ಪ್ರಾರಂಭವಾಗಿ ಮೂರ್ನಾಲ್ಕು ವರ್ಷಗಳೇ ಕಳೆದರೂ ಯೋಜನೆ ಪೂರ್ಣಗೊಂಡಿಲ್ಲ. ಈ ಸಂಬಂಧವಾಗಿ ಜನವರಿಯಲ್ಲಿ ಜಿಲ್ಲಾಧಿಕಾರಿಗಳಿಗೆ ಸ್ಥಳೀಯ ಗ್ರಾಮಸ್ಥರು ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ.
ಕಾಮಗಾರಿಗೆ ಅಗತ್ಯವಾದ ಅನುದಾನ ಬಿಡುಗಡೆಯಾಗಿದ್ದರೂ ನಿಗದಿತ ಅವಧಿಯೊಳಗೆ ಕಾಮಗಾರಿ ಮುಕ್ತಾಯವಾಗದಿರುವುದು, ಪ್ರಸ್ತುತ ಕಾಮಗಾರಿ ಸ್ಥಗಿತಗೊಳ್ಳುವುದಕ್ಕೆ ಸಂಬಂಧಿಸಿದ ಅಧಿಕಾರಿಗಳ ನಿರ್ಲಕ್ಷ್ಯ, ಬೇಜವಾಬ್ದಾರಿ ಧೋರಣೆಯೇ ಕಾರಣ ಎಂದು ಧರಣಿನಿರತರು ದೂರಿದರು.
ಕಪ್ಪು ಪಟ್ಟಿಗೆ ಸೇರಿಸಿ: ಕೂಡಲೇ ರಾಜ್ಯ ಸರ್ಕಾರ ಕಾಮಗಾರಿ ಕೈಗೆತ್ತಿಕೊಳ್ಳಲು ಕ್ರಮ ಕೈಗೊಳ್ಳಬೇಕು. ನಿಗದಿತ ಸಮಯದೊಳಗೆ ಕಾಮಗಾರಿ ಪೂರ್ಣಗೊಳಿಸದ ಗುತ್ತಿದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ, ಕಾನೂನು ಕ್ರಮ ತೆಗೆದುಕೊಳ್ಳಬೇಕು. ಅಲ್ಲದೆ, ಕಾಮಗಾರಿ ಸಂಬಂಧಿಸಿದಂತೆ ವಿಶೇಷ ಅಧಿಕಾರಿಗಳನ್ನು ನೇಮಕ ಮಾಡಬೇಕು ಎಂದು ಆಗ್ರಹಿಸಿದರು.
ಜಿಲ್ಲಾಡಳಿತ ಮುಂದಿನ ತಿಂಗಳೊಳಗೆ ಕಾಮಗಾರಿ ಪ್ರಾರಂಭ ಮಾಡದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಆಹೋರಾತ್ರಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದರು.
ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ವಿಪುಲ್ ಬನ್ಸಲ್, ಈ ಯೋಜನೆ ಪೂರ್ಣಗೊಳಿಸುವುದಕ್ಕೆ ಸಂಬಂಧಿಸಿದಂತೆ ಈಗಾಗಲೇ ತಾವು ಸಂಬಂಧಿಸಿದ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಸಮಿತಿಯ ಗೌರವಾಧ್ಯಕ್ಷ ಎಸ್. ತೀರ್ಥಪ್ಪ, ಅಧ್ಯಕ್ಷ ಕೆ.ಎಂ. ಮಂಜಪ್ಪ, ಪ್ರಧಾನ ಕಾರ್ಯದರ್ಶಿ ಎಸ್. ಷಣ್ಮುಖಪ್ಪ, ಚಂದ್ರಶೇಖರಪ್ಪ, ಪರಮೇಶ್ವರಪ್ಪ, ಈಶ್ವರಪ್ಪ, ಕೆ.ಜಿ. ಈರಪ್ಪಯ್ಯ, ಬಿ.ಎಚ್. ರಂಗಪ್ಪ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

