ಶಿವಮೊಗ್ಗ

ಬತ್ತ ಖರೀದಿ ಕೇಂದ್ರ ಸ್ಥಾಪನೆಗೆ ರೈತ ಸಂಘ ಆಗ್ರಹ

Published On :

ಕ.ಪ್ರ. ವಾರ್ತೆ, ಹೊಸನಗರ, ಡಿ.5
ಬತ್ತ ಬೆಂಬಲ ಬೆಲೆಯನ್ನು ಪ್ರತಿ ಕ್ವಿಂಟಲಿಗೆ 2500ಕ್ಕೆ ಹೆಚ್ಚಿಸಬೇಕು ಮತ್ತು ತಾಲೂಕಿನ ಪ್ರತಿ ಹೋಬಳಿಯಲ್ಲೂ ಖರೀದಿ ಕೇಂದ್ರ ಆರಂಭಿಸಬೇಕು ಎಂದು ಒತ್ತಾಯಿಸಿ ತಾಲೂಕು ರೈತಸಂಘ ಪಟ್ಟಣದ ಗಣಪತಿ ದೇವಸ್ಥಾನದಿಂದ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿತು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ರೈತ ಸಂಘ ರಾಜ್ಯ ಕಾರ್ಯದರ್ಶಿ ಮಂಜುನಾಥಗೌಡ, ಸರ್ಕಾರಕ್ಕೆ ರೈತರ ಬಗ್ಗೆ ಸ್ವಲ್ಪವೂ ಕಾಳಜಿಯಿಲ್ಲವಾಗಿದೆ. ರೈತರ ಪರವಾಗಿ ಕೆಲಸ ಮಾಡುವುದಾಗಿ ಹೇಳಿ ಅಧಿಕಾರಕ್ಕೆ ಬಂದ ಸರ್ಕಾರ ರೈತರ ಚಳವಳಿಗಳನ್ನೇ ಹತ್ತಿಕ್ಕುತ್ತಿದೆ. ಇದೇ ಧೋರಣೆ ಮುಂದುವರಿದರೆ ರೈತ ಸಂಘ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಸಿದರು.
ನಂತರ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ನೀಡಿದ ಸಂಘ ಬಗರ್‌ಹುಕುಂ ಭೂಮಿಯಲ್ಲಿ ಬೆಳೆದಿರುವ ಬೆಳೆಯನ್ನೂ ಬೆಂಬಲ ಬೆಲೆಯಲ್ಲಿ ಖರೀದಿ ಮಾಡಬೇಕು. ಖರೀದಿಸಿದ ಹಣವನ್ನು ತಕ್ಷಣವೇ ಪಾವತಿ ಮಾಡಬೇಕು. ರೈತರು ತರುವ ಬತ್ತ, ರಾಗಿ ಮತ್ತು ಇತರೆ ಬೆಳೆಗಳಿಗೆ ತಕ್ಷಣವೇ ತೂಕ ಮಾಡಿ ಖಾಲಿ ಚೀಲ ಕೊಡುವ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿತು.
ಬಗರ್‌ಹುಕುಂ ರೈತರಿಗೆ ಕೂಡಲೇ ಹಕ್ಕು ಪತ್ರ ವಿತರಿಸಬೇಕು. ಅರಣ್ಯ ಭೂಮಿ ನಿವಾಸಿಗಳನ್ನು ಒಕ್ಕಲೆಬ್ಬಿಸಬಾರದು. ಗ್ರಾಮಾಂತರ ಪ್ರದೇಶಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು.
ಸರ್ಕಾರದ ಇಲಾಖೆಗಳಲ್ಲಿ ಸಿಗುವ ಸೌಲಭ್ಯಗಳ ಮಾಹಿತಿಯನ್ನು ರೈತರಿಗೆ ಸರಿಯಾಗಿ ನೀಡಬೇಕು. ಅಡಕೆ ಕೊಳೆ ರೋಗ ಬಾಕಿ ಇರುವ ಪರಿಹಾರ ಮೊತ್ತವನ್ನು ಕೂಡಲೇ ಬಿಡುಗಡೆ ಮಾಡಬೇಕು. ಉದ್ಯೋಗ ಖಾತ್ರಿ ಯೋಜನೆಯಲ್ಲಿ ರೈತರ ಕೃಷಿ ಕೆಲಸಗಳನ್ನೂ ಮಾಡಿದಲೂ ಅವಕಾಶ ನೀಡಬೇಕು ಎಂದು ಆಗ್ರಹಿಸಿತು.
ರೈತ ಸಂಘದ ತಾಲೂಕು ಅಧ್ಯಕ್ಷ ಜಿ.ವಿ. ರವೀಂದ್ರ, ಕಾರ್ಯದರ್ಶಿ ಸುಗಂಧರಾಜ್, ಪದಾಧಿಕಾರಿಗಳಾದ ರಾಜಶೇಖರ್, ಗುರುಪಾದಪ್ಪಗೌಡ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.