ರಕ್ಷಣೆಗೆ ಆಗ್ರಹಿಸಿ ವೈದ್ಯರ ಪ್ರತಿಭಟನಾ ರ್ಯಾಲಿ
ಕ.ಪ್ರ. ವಾರ್ತೆ ಶಿವಮೊಗ್ಗ ಡಿ.13
ವೈದ್ಯಕೀಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವವರ ಮೇಲೆ ನಡೆಯುವ ದೌರ್ಜನ್ಯ ತಡೆಗಟ್ಟುವಂತೆ ಹಾಗೂ ಸೂಕ್ತ ರಕ್ಷಣೆ ನೀಡಬೇಕೆಂದು ಆಗ್ರಹಿಸಿ ಐಎಂಎ ನೇತೃತ್ವದಲ್ಲಿ ಶುಕ್ರವಾರ ನಗರದಲ್ಲಿ ವೈದ್ಯಕೀಯ ಕ್ಷೇತ್ರದ ಸಿಬ್ಬಂದಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿ ಜಿಲ್ಲಾಧಿಕಾರಿಯವರಿಗೆ ಮನವಿ ಅರ್ಪಿಸಿದರು.
ಆಸ್ಪತ್ರೆಯಲ್ಲಿ ಕಾರ್ಯನಿರ್ವಹಣೆ ಮಾಡುವ ವೈದ್ಯರು ಹಾಗೂ ಇತರೆ ಸಿಬ್ಬಂದಿ ಮೇಲೆ ಹಲ್ಲೆ ಮತ್ತು ಆಸ್ಪತ್ರೆಗಳ ಮೇಲೆ ದಾಳಿ ನಡೆಸುವಂತಹ ಅಹಿತಕರ ಘಟನೆಗಳು ಪದೇ ಪದೇ ನಡೆಯುತ್ತಿವೆ.
ಇದರಿಂದ ವೈದ್ಯಕೀಯ ಕ್ಷೇತ್ರದ ಸಿಬ್ಬಂದಿ ಭಯದಲ್ಲಿ ಕಾರ್ಯನಿರ್ವಹಿಸುವಂತಾಗಿದೆ ಎಂದು ಪ್ರತಿಭಟನಾಕಾರರು ಜಿಲ್ಲಾಡಳಿತದ ಬಳಿ ಆತಂಕ ತೋಡಿಕೊಂಡರು.
ಒಳರೋಗಿಗಳಿಗೆ ತೊಂದರೆ: ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಇತ್ತೀಚೆಗೆ ರೋಗಿಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಕೆಲವರು ಆಸ್ಪತ್ರೆಯಲ್ಲಿ ದಾಂಧಲೆ ನಡೆಸಿದ್ದಾರೆ. ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಲು ಮುಂದಾಗಿರುವುದು ಖಂಡನಾರ್ಹ.
ಕೆಲವು ಪ್ರಚೋದಿತ ದುಷ್ಕರ್ಮಿಗಳಿಂದ ನಡೆಯುವ ಈ ರೀತಿಯ ಅನಾಗರಿಕ ಕೃತ್ಯಗಳಿಂದ ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳಿಗೆ ತೀವ್ರ ತೊಂದರೆಯುಂಟಾಗುತ್ತಿದೆ ಎಂದು ಪ್ರತಿಭಟನಾಕಾರರು ವಿವರಿಸಿದರು.
ಆಸ್ಪತ್ರೆ, ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಮೇಲೆ ನಡೆಯುವ ಹಲ್ಲೆ - ದಾಳಿ ನಡೆಯುವ ಉದ್ದೇಶದಿಂದ 2009ರಲ್ಲಿ ಪ್ರತ್ಯೇಕ ಕಾಯ್ದೆ ಜಾರಿಗೆ ತರಲಾಗಿದೆ. ಈ ಕಾಯ್ದೆ ಉಲ್ಲಂಘಿಸುವವರಿಗೆ 3 ವರ್ಷ ಕಾರಾಗೃಹ ವಾಸ, 50 ಸಾವಿರ ದಂಡ ಹಾಗೂ ನಷ್ಟ ಪಡಿಸಿದ ವಸ್ತುಗಳ ಬೆಲೆ ಕಟ್ಟಿ ಕೊಡಬೇಕಾಗುತ್ತದೆ. ಈ ರೀತಿಯ ಕಠಿಣ ಕಾನೂನು ಜಾರಿಗೊಳಿಸಿದ್ದರೂ ಕೆಲ ವ್ಯಕ್ತಿಗಳು ಅರಿವಿಲ್ಲದೆ ಅಥವಾ ಪ್ರಚಾರದ ಹುಚ್ಚಿನಿಂದ ಆಸ್ಪತ್ರೆಗಳಲ್ಲಿ ದಾಂಧಲೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಯ್ದೆಯ ಕುರಿತಂತೆ ಜಿಲ್ಲಾಡಳಿತ ಜಾಗೃತಿ ಮೂಡಿಸುವ ಕೆಲಸ ಮಾಡಬೇಕಾಗಿದೆ ಎಂದು ಆಗ್ರಹಿಸಿದರು.
ಆಸ್ಪತ್ರೆಗಳಲ್ಲಿ ನಡೆಯುವ ದಾಂಧಲೆಗಳಿಗೆ ಈ ಕೂಡಲೇ ಕಡಿವಾಣ ಹಾಕಬೇಕು. ವೈದ್ಯರು ಹಾಗೂ ಇತರೆ ಸಿಬ್ಬಂದಿ ಭಯ ಮುಕ್ತರಾಗಿ ಕಾರ್ಯನಿರ್ವಹಣೆ ಮಾಡುವಂತಾಗಬೇಕು.
ಜಿಲ್ಲಾಡಳಿತ ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಐಎಂಎ ಅಧ್ಯಕ್ಷೆ ಡಾ. ವಾಣಿ ಕೋರಿ, ಡಾ. ಕೊಟ್ಟೂರೇಶ್ವರ, ಡಾ. ಜಯಪ್ರಕಾಶ್, ಅನುಸೂಯ ರಾಯ್ಕರ್, ಕೆ.ಆರ್.ಶ್ರೀಧರ್, ಪಿ.ಕೆ.ಪೈ ಸೇರಿದಂತೆ ಮೊದಲಾದವರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

