ಜ.30ರೊಳಗೆ ರಸ್ತೆ ದುರಸ್ತಿಗೆ ಕ್ರಮ
ಕ.ಪ್ರ. ವಾರ್ತೆ ಶಿವಮೊಗ್ಗ ಡಿ.13
ಗುಂಡಿ ಬಿದ್ದಿರುವ ರಸ್ತೆಗಳನ್ನು ಮುಚ್ಚಲು ಅಗತ್ಯ ಕ್ರಮಕೈಗೊಳ್ಳಲಾಗಿದೆ, ಜನವರಿ 30ರೊಳಗಾಗಿ ರಸ್ತೆ ದುರಸ್ತಿ ಕಾರ್ಯ ನಡೆಯಲಿದೆ ಎಂದು ಲೋಕೋಪಯೋಗಿ ಇಲಾಖೆ ಶಿವಮೊಗ್ಗ ವೃತ್ತ ಸೂಪರಿಂಟೆಂಡಿಂಗ್ ಎಂಜಿನಿಯರ್ ಬಿ.ಎಸ್. ಬಾಲಕೃಷ್ಣ ತಿಳಿಸಿದ್ದಾರೆ.
ಕಳೆದ ಮಳೆಗಾಲದಲ್ಲಿ ಸತತವಾಗಿ ಸುರಿದ ಮಳೆಯಿಂದಾಗಿ ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳ ಸುಮಾರು 8 ಸಾವಿರ ಕಿಲೋಮೀಟರ್ ರಸ್ತೆಗಳ ಪೈಕಿ 6 ಸಾವಿರ ಕಿ.ಮೀ. ರಸ್ತೆಗಳಲ್ಲಿ ಸಣ್ಣ ಮತ್ತು ದೊಡ್ಡ ಪ್ರಮಾಣದ ಗುಂಡಿಗಳಾಗಿವೆ. ಇದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಈ ಗುಂಡಿಗಳನ್ನು ಜನವರಿ 30ರೊಳಗಾಗಿ ಬಿಟುಮಿನ್ ಮಿಕ್ಸ್ನಿಂದ ಮುಚ್ಚಿ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳ ಗುಂಡಿಗಳನ್ನು ಸಂಚಾರಕ್ಕೆ ಯೋಗ್ಯವಾಗಿರುವಂತೆ ಮಾಡಲಾಗುವುದು ಎಂದು ಅವರು ವಿವರಿಸಿದ್ದಾರೆ.
ಗುತ್ತಿಗೆದಾರರಿಗೆ ಆದೇಶ: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿಯಲ್ಲಿ ಸುಮಾರು 500 ಕಿ.ಮೀ. ರಸ್ತೆ ಅಭಿವೃದ್ಧಿ ಪಡಿಸಲು ಸರ್ಕಾರದಿಂದ ಅನುಮೋದನೆ ದೊರೆತಿದ್ದು, ಈ ರಸ್ತೆಗಳ ಅಭಿವೃದ್ಧಿಯ ಮುಖ್ಯ ಕಾಮಗಾರಿ ಪ್ರಾರಂಭಿಸಲು ನಮಗಿರುವ ಅಧಿಕಾರದ ಮಿತಿಯಲ್ಲಿ ವಿಳಂಬಕ್ಕೆ ಅವಕಾಶವಿಲ್ಲದಂತೆ ಗುಂಡಿಗಳನ್ನು ಮುಚ್ಚಲು ಗುತ್ತಿಗೆದಾರರಿಗೆ ಆದೇಶಿಸಲಾಗಿದೆ ಎಂದವರು ತಿಳಿಸಿದ್ದಾರೆ.
ಈಗಾಗಲೇ ಟೆಂಡರ್ ಕಾಮಗಾರಿ ಮುಗಿದು ಡಿಫೆಕ್ಟ್ ಲಿಯಾಬಿಲಿಟಿ ಅವಧಿಯಲ್ಲಿರುವ ರಸ್ತೆಗಳು ಹಾಗೂ ಪ್ರಸ್ತುತ ಟೆಂಡರ್ ಆಗಿದ್ದು, ಗುತ್ತಿಗೆದಾರರು ಸದ್ಯ ಕಾಮಗಾರಿ ಪ್ರಾರಂಭಿಸಬೇಕಾಗಿರುವ ರಸ್ತೆಗಳಲ್ಲಿನ ಗುಂಡಿಗಳನ್ನು ಅದೇ ಗುತ್ತಿಗೆದಾರರಿಂದ ಮುಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದವರು ಹೇಳಿದರು.
ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳ ನಿರ್ವಹಣೆಗಾಗಿ ಈಗಾಗಲೇ ದೊರೆತಿರುವ ಅನುದಾನದಲ್ಲಿ ಗುಂಡಿಗಳನ್ನು ಮುಚ್ಚುವ ಪ್ರಕ್ರಿಯೆಯಲ್ಲಿ ಕೂಡಲೆ ಅಂದಾಜು ಪಟ್ಟಿಗಳನ್ನು ತಯಾರಿಸಿ, ಅಲ್ಪಾವಧಿ ಟೆಂಡರ್ ಪ್ರಕ್ರಿಯೆ ನಡೆಸಿ, ಈ ತಿಂಗಳ ಅಂತ್ಯದೊಳಗಾಗಿ ಗುತ್ತಿಗೆ ನಿಗದಿಪಡಿಸಿ, ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ರಾಜ್ಯ ಹೆದ್ದಾರಿಯ ಕೆಲವು ಭಾಗಗಳನ್ನು ಕೆಷಿಪ್ ಯೋಜನೆಯ ಮೂಲಕ ಅಭಿವೃದ್ಧಿಪಡಿಸುವ ಪ್ರಸ್ತಾವನೆ ಇದ್ದು, ಕಾಮಗಾರಿಗಳು ಅನುಷ್ಠಾನಗೊಳ್ಳಲು ದೀರ್ಘ ಸಮಯ ಬೇಕಾಗುವುದು. ಆದ್ದರಿಂದ ಆ ರಸ್ತೆಗಳನ್ನು ದುರಸ್ತಿಗೊಳಿಸಲು ಯೋಜನೆಯೊಂದನ್ನು ರೂಪಿಸಿದ್ದು, ಶೀಘ್ರವಾಗಿ ಕಾರ್ಯಗತಗೊಳಿಸಲು ಪ್ರಯತ್ನಿಸಲಾಗುವುದು ಎಂದವರು ವಿವರಿಸಿದ್ದಾರೆ.
ಈ ಎಲ್ಲಾ ಕಾಮಗಾರಿಗಳ ಪ್ರಗತಿಯನ್ನು ಕಾಲಕಾಲಕ್ಕೆ ಪರಿಶೀಲಿಸಿ ವರದಿ ನೀಡಲು ನಾಲ್ಕು ತಾಂತ್ರಿಕ ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳ ನಾಲ್ಕು ವಿಭಾಗಗಳ ಕೆಲವು ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯರಸ್ತೆಗಳನ್ನು ಡಿಸೆಂಬರ್ 20 ಮತ್ತು 21ರಂದು ಪರಿವೀಕ್ಷಣೆ ನಡೆಸಲಿವೆ. ಅಲ್ಲದೆ ಗುಂಡಿ ಮುಚ್ಚುವ ಕಾಮಗಾರಿಗಳಲ್ಲಿ ಕೂಡ ಪ್ರೀಮಕ್ಸ್ ಉಪಯೋಗಿಸಲು ಮತ್ತು ಉತ್ತಮ ಗುಣಮಟ್ಟದ ಕಾಮಗಾರಿ ನಿರ್ವಹಿಸಲು ಗುತ್ತಿಗೆದಾರರಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ.
ಕಾಮಗಾರಿಯಲ್ಲಿ ಅಲಕ್ಷ್ಯಧೋರಣೆ ಮತ್ತು ವಿಳಂಬಗತಿಯನ್ನು ಸಹಿಸಲಾಗುವುದಿಲ್ಲ ಎಂದವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

