ಬೆಳೆಗಾರರ ಹಿತರಕ್ಷಣೆಗೆ ಬದ್ಧ
ಕ.ಪ್ರ.ವಾರ್ತೆ, ಶಿವಮೊಗ್ಗ, ಡಿ.14
ಅಡಕೆ ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬದ್ಧವಾಗಿದ್ದು, ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಭರವಸೆ ನೀಡಿದ್ದಾರೆ.
ಸರ್ಕಾರಗಳು ಯಾವತ್ತೂ ರೈತರಿಗೆ ಪೂರಕವಾಗಿ ಕೆಲಸ ಮಾಡುತ್ತವೆ. ರೈತರಿಗೆ ವಿರುದ್ಧವಿದ್ದರೆ ಆಡಳಿತ ನಡೆಸುವುದು ಅಸಾಧ್ಯ. ಆದ್ದರಿಂದ ಅಡಕೆ ಬೆಳೆಗಾರರು ಆತಂಕ ಪಡುವುದು ಬೇಡ ಎಂದರು.
ನಗರದ ಅಂಬೇಡ್ಕರ್ ಭವನದಲ್ಲಿ ಶನಿವಾರ ಅವರು ಜಿಲ್ಲಾ ಪಂಚಾಯ್ತಿ, ತೋಟಗಾರಿಕೆ ಇಲಾಖೆ, ಜಿಲ್ಲಾ ಉದ್ಯಾನ ಕಲಾ ಸಂಘ, ಆತ್ಮ-ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಮೂರು ದಿನಗಳ ಫಲಪುಷ್ಪ ಪ್ರದರ್ಶನ ಹಾಗೂ ಆರೋಗ್ಯಕ್ಕಾಗಿ ತೋಟಗಾರಿಕೆ ಕುರಿತ ಒಂದು ದಿನದ ಕೈತೋಟ ಮತ್ತು ತಾರಸಿ ತೋಟಗಳ ಅಭಿವೃದ್ಧಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ನ್ಯಾಯಾಲಯವು ತನ್ನ ಮುಂದಿನ ಸಾಕ್ಷ್ಯಾಧಾರಗಳ ಮೇಲೆ ತೀರ್ಪು ನೀಡುತ್ತದೆ. ನ್ಯಾಯಾಲಯಕ್ಕೆ ಸೂಕ್ತ ದಾಖಲೆ, ಪೂರಕ ಮಾಹಿತಿಗಳನ್ನು ಒದಗಿಸುವ ಅವಶ್ಯಕತೆ ಇರುತ್ತದೆ. ಇದನ್ನು ಕೇಂದ್ರ ಸರ್ಕಾರವು ಮಾಡಲಿದೆ ಎಂದರು.
ಅಡಕೆ ಬೆಳೆಯನ್ನು ನಿಷೇಧಿಸಬೇಕೆಂಬ ಅಭಿಪ್ರಾಯ ಕಳೆದ 15 ವರ್ಷಗಳಿಂದಲೂ ಇದೆ ಎಂದ ಅವರು, 700 ಇದ್ದ ಅಡಕೆ ಧಾರಣೆ ಈಗ 30000 ದಾಟಿದೆ. ಯಾವ ವರ್ಷವೂ ಸಹ ಧಾರಣೆ ಕಡಿಮೆ ಆಗಿಲ್ಲ. ಹೆಚ್ಚುತ್ತಲೇ ಇದೆ. ರೈತರು ಆತಂಕ ಪಡುವುದು ಬೇಡ. ಅಡಕೆ ಬೆಳೆಗಾರರನ್ನು ಬಿಟ್ಟುಕೊಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ.ಬಿ. ಪ್ರಸನ್ನಕುಮಾರ್, ತೋಟಗಾರಿಕೆ ಬೆಳೆಗಾರರಲ್ಲಿ ಆತ್ಮ ವಿಶ್ವಾಸ ಮೂಡಿಸಲು ಇಂತಹ ಫಲ-ಪುಷ್ಪ ಪ್ರದರ್ಶನಗಳು ಪ್ರೇರಣದಾಯಕವಾಗಿವೆ ಎಂದರು.
ಸಂಸದರಾದ ಬಿ.ವೈ. ರಾಘವೇಂದ್ರ, ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್, ನಗರಸಭೆ ಅಧ್ಯಕ್ಷೆ ಖುರ್ಷಿದಾ ಬಾನು, ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ಹೇಮ ಪಾವನಿ, ಜಿ.ಪಂ. ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಗಾಯತ್ರಿ ಷಣ್ಮುಖಪ್ಪ, ಜಿಲ್ಲಾಧಿಕಾರಿ ವಿಪುಲ್ ಬನ್ಸಾಲ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಸಿಕಾಂತ್ ಸೆಂಥಿಲ್, ಜಿಲ್ಲಾ ಉದ್ಯಾನ ಕಲಾ ಸಂಘದ ನಿರ್ದೇಶಕ ಕಡಿದಾಳ್ ಗೋಪಾಲ್ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

