ಹಣದಿಂದ ಆರೋಗ್ಯ ಕೊಳ್ಳಲು ಅಸಾಧ್ಯ: ಕಾಗೋಡು ತಿಮ್ಮಪ್ಪ
ಸಾಗರ: ಹಣದಿಂದ ಆರೋಗ್ಯವನ್ನು ಕೊಳ್ಳಲು ಸಾಧ್ಯವಿಲ್ಲದಿರುವುದರಿಂದ ರೋಗ ಬಾರದಂತೆ ಕಾಲಕಾಲಕ್ಕೆ ಸೂಕ್ತ ತಪಾಸಣೆಗೆ ಒಳಗೊಳ್ಳುತ್ತಿರಬೇಕು ಎಂದು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಹೇಳಿದರು.
ತಾಲೂಕಿನ ಆನಂದಪುರಂ ಕನಕ್ಕಮ್ಮಾಳ್ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ಶಿವಮೊಗ್ಗ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ಜಂಟಿಯಾಗಿ ಹಮ್ಮಿಕೊಂಡಿದ್ದ ಕ್ಯಾನ್ಸರ್ ರೋಗ ಪತ್ತೆ ಹಚ್ಚುವ ಹಾಗೂ ಸಲಹಾ ಶಿಬಿರವನ್ನು ಶಿಬಿರಾರ್ಥಿಗಳಿಗೆ ಮಾಹಿತಿ ಪತ್ರ ವಿತರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡುತ್ತಿದೆ. ಸರ್ಕಾರಿ ಕಾರ್ಯಕ್ರಮಗಳು ಸಾರ್ವಜನಿಕರಿಗೆ ತಲುಪುವಂತೆ ಆಗಬೇಕು. ಅನೇಕ ಸಂದರ್ಭದಲ್ಲಿ ಮಾಹಿತಿ ಕೊರತೆಯಿಂದ ಫಲಾನುಭವಿಗಳಿಗೆ ಯೋಜನೆಯ ಲಾಭ ದೊರಕುವುದಿಲ್ಲ. ವೈದ್ಯರು ಆಸ್ಪತ್ರೆಯಲ್ಲಿ ಸಿಗುವ ಸೌಲಭ್ಯ ಕುರಿತು ಜನರಿಗೆ ಸಮರ್ಪಕ ಮಾಹಿತಿ ಒದಗಿಸಬೇಕು ಎಂದು ಹೇಳಿದರು.
ಆರೋಗ್ಯ ಮಿತ್ರ ಬಳಸಿಕೊಳ್ಳಿ: ಕ್ಯಾನ್ಸರ್ ಅತ್ಯಂತ ಮಾರಣಾಂತಿಕ ಕಾಯಿಲೆಯಾಗಿದೆ. ಸೂಕ್ತ ಸಂದರ್ಭದಲ್ಲಿ ತಪಾಸಣೆಗೆ ಒಳಪಟ್ಟು, ಚಿಕಿತ್ಸೆ ಪಡೆಯುವುದರಿಂದ ದೊಡ್ಡಮಟ್ಟದ ಅಪಾಯದಿಂದ ಪಾರಾಗಲು ಸಾಧ್ಯವಿದೆ. ಇಂತಹ ಶಿಬಿರಗಳಲ್ಲಿ ಪಾಲ್ಗೊಳ್ಳುವ ಮೂಲಕ ಕ್ಯಾನ್ಸರ್ ಲಕ್ಷಣಗಳ ಕುರಿತು ಜನರು ಮಾಹಿತಿ ಪಡೆಯಬೇಕು. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಆರೋಗ್ಯಮಿತ್ರ ಯೋಜನೆಯ ಸದುಪಯೋಗವನ್ನು ಜನರು ಪಡೆದುಕೊಳ್ಳಬೇಕು. ಆರೋಗ್ಯಮಿತ್ರ ಯೋಜನೆ ಬಿ.ಪಿ.ಎಲ್. ಕಾರ್ಡ್ದಾರರಿಗೆ ಸಿಗುತ್ತಿದ್ದು, ಚಿಕಿತ್ಸೆಗೆ ಒಳಪಡುವ ರೋಗಿಗಳಿಗೆ 1.50 ಲಕ್ಷ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶಿವಣ್ಣ ರೆಡ್ಡಿ ಮಾತನಾಡಿ, ಪ್ರಾಥಮಿಕ ಹಂತದಲ್ಲಿಯೇ ಚಿಕಿತ್ಸೆ ಪಡೆಯುವುದರಿಂದ ಕ್ಯಾನ್ಸರ್ ರೋಗದಿಂದ ಗುಣಮುಖರಾಗಲು ಸಾಧ್ಯವಿದೆ ಎಂದು ತಿಳಿಸಿದರು.
ಆನಂದಪುರಂ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಎ. ಶಾಂತಮ್ಮ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯ ರತ್ನಾಕರ ಹೊನಗೋಡು, ತಾಪಂ ಸದಸ್ಯ ಸೈಯದ್ ಇಬ್ರಾಹಿಂ, ಜಿಲ್ಲಾ ಕಾರ್ಯಕ್ರಮಾಧಿಕಾರಿ ಡಾ.ಬಿ.ಎಸ್. ಶಂಕರಪ್ಪ, ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆಯ ಡಾ. ರಮೇಶ್, ತಾಲೂಕು ವೈದ್ಯಾಧಿಕಾರಿ ಡಾ. ಕೆ.ಪಿ. ಅಚ್ಚುತ್ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

