ಶಿವಮೊಗ್ಗ

ಸವಲತ್ತು ಸದ್ಬಳಕೆ ಮಾಡಿಕೊಳ್ಳಿ

Published On :

ಕ.ಪ್ರ.ವಾರ್ತೆ ಟಿ ಸಾಗರ ಟಿ  ಡಿ.26
ಭಾಷಾ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಸರ್ಕಾರದ ಸವಲತ್ತು ಸದ್ಬಳಕೆ ಮಾಡಿಕೊಂಡು  ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಸಲಹೆ ನೀಡಿದರು.
ಇಲ್ಲಿನ ಚಾಮರಾಜಪೇಟೆ ಸರ್ಕಾರಿ ಉರ್ದು ಶಾಲೆಯನ್ನು ಗುರುವಾರ ಉದ್ಘಾಟಿಸಿ, ಪ್ರತಿ ಮನುಷ್ಯನಿಗೆ ಶೈಕ್ಷಣಿಕ ಹಂತ ಅತ್ಯಂತ ಮಹತ್ವದಾಗಿದ್ದು, ಅದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು.
ಅಲ್ಪಸಂಖ್ಯಾತ ಮಕ್ಕಳ ಪೋಷಕರು ಯಾವುದೇ ಕಾರಣಕ್ಕೂ ಮಕ್ಕಳನ್ನು ಶಿಕ್ಷಣದಿಂದ ವಂಚಿಸಬಾರದು. ಚಾಮರಾಜಪೇಟೆ ಉರ್ದು ಶಾಲೆ ಬಹಳ ವರ್ಷಗಳಿಂದ ನಿರಾಸಕ್ತಿಗೆ ಒಳಗಾಗಿತ್ತು. ಈಗ ಪುನರ್ ಪ್ರಾರಂಭಿಸುವ ಜೊತೆಗೆ ಶಿಕ್ಷಕರ ಕೊರತೆ ನೀಗಿಸಲಾಗಿದೆ. ಶಾಲೆಗೆ ನೂತನ ಕಟ್ಟಡ ನಿರ್ಮಾಣಕ್ಕೆ ಸರ್ಕಾರ ರು. 40 ಲಕ್ಷ  ಬಿಡುಗಡೆ ಮಾಡಿದ್ದು, ಶೀಘ್ರದಲ್ಲಿ ಜಾಗ ಗುರುತಿಸಿ ಹೊಸ ಕಟ್ಟಡ ನಿರ್ಮಿಸಲಾಗುವುದು ಎಂದು ಹೇಳಿದರು.
ಶಿಕ್ಷಣಕ್ಕೆ ಒತ್ತು: ಕೇಂದ್ರ ಹಾಗೂ ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿದೆ. ಸರ್ವಶಿಕ್ಷಣ ಅಭಿಯಾನ ಬಂದ ನಂತರ ಶಾಲೆಗಳ ಕಟ್ಟಡ ನಿರ್ಮಾಣ, ದುರಸ್ತಿಗೆ ಹೆಚ್ಚಿನ ಸೌಲಭ್ಯ ಕಲ್ಪಿಸಲಾಗುತ್ತಿದೆ. ಜೊತೆಗೆ ಪ್ರತಿ ಶಾಲೆಗೆ ಶೌಚಾಲಯ ಕಡ್ಡಾಯವಾಗಿದ್ದು, ಶೌಚಾಲಯವಿಲ್ಲದ ಶಾಲೆಗಳನ್ನು ಪಟ್ಟಿ ಮಾಡಿ, ತಕ್ಷಣ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ನಗರಸಭೆ ಸದಸ್ಯ ತೀ.ನ. ಶ್ರೀನಿವಾಸ್ ಮಾತನಾಡಿ, ಮುಚ್ಚುವ ಹಂತಕ್ಕೆ ಬಂದಿದ್ದ ಉರ್ದು ಶಾಲೆಯನ್ನು ಪುನರ್ ನಿರ್ಮಾಣ ಮಾಡುವಲ್ಲಿ ಕಾಗೋಡು ತಿಮ್ಮಪ್ಪ ವಿಶೇಷ ಶ್ರಮ ವಹಿಸಿದ್ದಾರೆ. ಶಿಕ್ಷಕರು ಹಾಗೂ ಪೋಷಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕು. ಅಲ್ಪಸಂಖ್ಯಾತ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಶಾಲೆಗೆ ಸೇರುವ ಮೂಲಕ ಶಾಲೆಯ ಅಭಿವೃದ್ಧಿಗೆ ಮುಂದಾಗಬೇಕು ಎಂದರು.
ಎಸ್‌ಡಿಎಂಸಿ ಅಧ್ಯಕ್ಷ ಖಯ್ಯೂಮ್ಖಾನ್ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಸದಸ್ಯ ಜಿ.ಕೆ. ಭೈರಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಿ.ಸಿ. ಬಸವರಾಜಪ್ಪ, ಜಿಲ್ಲಾ ಉಪ ಸಮನ್ವಯಾಧಿಕಾರಿ ಅಂತೋನಿರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ಲಿಂಗಪ್ಪ, ಮುಖ್ಯ ಶಿಕ್ಷಕಿ ಹಿನಾ ಕೌಸರ್ ಮೊದಲಾದವರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.