ಅಡಕೆ ನಿಷೇಧ ಪ್ರಸ್ತಾಪ ವಿರುದ್ಧ ಪಕ್ಷಾತೀತ ಪ್ರತಿಭಟನೆ
ಶಿವಮೊಗ್ಗ: ಕೇಂದ್ರ ಸರ್ಕಾರದ ಅಡಕೆ ನಿಷೇಧ ಪ್ರಸ್ತಾಪದ ವಿರುದ್ಧ ಶಿವಮೊಗ್ಗ ಸೇರಿದಂತೆ ಹೊರ ಜಿಲ್ಲೆಯ ಅಡಕೆ ಬೆಳೆಗಾರರು, ವಿವಿಧ ರಾಜಕೀಯ ಮುಖಂಡರು ಪಕ್ಷಾತೀತವಾಗಿ ಸೋಮವಾರ ನಗರದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡರು.
ನಗರದ ಎಪಿಎಂಸಿಯ ಮ್ಯಾಮ್ ಕೋಸ್ ಕಚೇರಿ ಆವರಣದಿಂದ ಎನ್ ಡಿವಿ ಹಾಸ್ಟೆಲ್ವರೆಗೆ ಸಾವಿರಾರು ರೈತರು ಪ್ರತಿಭಟನಾ ಮೆರವಣಿಗೆ ನಡೆಸಿದರು.
ಕೇಂದ್ರದ ಕ್ರಮಕ್ಕೆ ಖಂಡನೆ: ನಂತರ ನಗರದ ಎನ್ ಡಿವಿ ಹಾಸ್ಟೆಲ್ ಆವರಣದಲ್ಲಿ ರಾಜ್ಯ ಅಡಕೆ ಬೆಳೆಗಾರರ ಒಕ್ಕೂಟದ ಆಯೋಜಿಸಿದ್ದ ಅಡಕೆ ಬೆಳೆಗಾರರ ಸಮಾವೇಶದಲ್ಲಿ ರಾಜಕೀಯ ಮುಖಂಡರು ಪಕ್ಷಭೇದ ಮರೆತು ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿದರು.
ಅಡಕೆ ಆರೋಗ್ಯಕ್ಕೆ ಹಾನಿಕಾರಕ ಎಂಬ ವರದಿಯನ್ನು ತಕ್ಷಣ ವಾಪಸ್ ಪಡೆಯಬೇಕು. ಅಡಕೆಯಿಂದ ಆರೋಗ್ಯಕ್ಕೆ ಯಾವುದೇ ಹಾನಿ ಇಲ್ಲ ಎಂಬುದನ್ನು ಕೇಂದ್ರ ಸರ್ಕಾರ ಸಾಲಿಸಿಟರ್ ಜನರಲ್ ಮೂಲಕ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಬೇಕು. ಅಡಕೆ ಪರವಾಗಿ ನ್ಯಾಯಾಲಯದಲ್ಲಿ ವಾದ ಮಂಡಿಸಲು ರಾಜ್ಯ ಸರ್ಕಾರ ಕೂಡಲೇ ವಕೀಲರನ್ನು ನೇಮಕ ಮಾಡಬೇಕೆಂದು ಎಲ್ಲಾ ಮುಖಂಡರು ಒಕ್ಕೊರಲಿನಿಂದ ಆಗ್ರಹಿಸಿದರು.
ಈ ವೇಳೆ ಮಾತನಾಡಿದ ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ, ಅಡಕೆ ನಿಷೇಧ ಪ್ರಸ್ತಾಪದ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಅಡಕೆ ಬೆಳೆಗರರನ್ನಾಗಲಿ, ಅಡಕೆ ಮಾರಾಟ ಸಹಕಾರ ಸಂಸ್ಥೆಗಳನ್ನಾಗಲಿ ಸಂಪರ್ಕಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ವರದಿ ವಾಪಸ್ ಪಡೆಯಲಿ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ತಜ್ಞರ ಸಮಿತಿಯನ್ನು ನೇಮಿಸಿ ಅಡಕೆ ಆರೋಗ್ಯಕ್ಕೆ ಹಾನಿಕಾರಕವಲ್ಲ ಎಂಬ ವರದಿ ಪಡೆದು ನ್ಯಾಯಾಲಯಕ್ಕೆ ಸಲ್ಲಿಸಬೇಕು. ಈಗಾಗಲೇ ಸುಪ್ರೀಂ ಕೋರ್ಟ್ಗೆ ಸಲ್ಲಿಸಿರುವ ವರದಿಯನ್ನು ವಾಪಸ್ ಪಡೆಯಬೇಕು ಎಂದರು.
ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಅಡಕೆ ನಿಷೇಧ ಇಲ್ಲ ಎನ್ನುವುದನ್ನು ಕೇಂದ್ರ ಸರ್ಕಾರ ಮಾಧ್ಯಮಗಳ ಮುಂದೆ ಹೇಳುತ್ತಿದೆ. ಅದನ್ನೇ ಸುಪ್ರಿಂಕೋರ್ಟ್ನಲ್ಲಿ ದಾಖಲಿಸಬೇಕು. ಅಡಕೆ ಆರೋಗ್ಯಕ್ಕೆ ಹಾನಿಕಾರಕ ಎಂದು ಸುಪ್ರೀಂ ಕೋರ್ಟ್ಗೆ ಕೇಂದ್ರ ಸರ್ಕಾರ ವರದಿ ಸಲ್ಲಿಸುವ ಮೂಲಕ ಅಡಕೆ ಬೆಳೆಗಾರರ ಮರಣ ಶಾಸನ ಬರೆಯಲು ಮುಂದಾಗಿದೆ ಎಂದು ಆಕ್ರೋಶವ್ಯಕ್ತಪಡಿಸಿದರು.
ವಾಣಿಜ್ಯ ಪಟ್ಟಿಗೆ ಸೇರಿಸಲಿ: ಜೆಡಿಎಸ್ನ ವಿಧಾನಸಭೆ ಉಪನಾಯಕ ವೈ.ಎಸ್.ವಿ. ದತ್ತ, ಕೇಂದ್ರಕ್ಕೆ ಬದ್ಧತೆ ಇದ್ದರೆ ಅಡಕೆ ಆರೋಗ್ಯಕ್ಕೆ ಹಾನಿಕಾರಕ ಎಂಬುದನ್ನು ಪುನರ್ ಪರಿಶೀಲಿಸಲು ಅರ್ಜಿ ಸಲ್ಲಿಸಬೇಕು. ಅಡಕೆಯನ್ನು ಆಹಾರ ಬೆಳೆ ಪಟ್ಟಿಯಿಂದ ತೆಗೆದು ವಾಣಿಜ್ಯ ಬೆಳೆ ಪಟ್ಟಿಯಲ್ಲಿ ಸೇರಿಸಬೇಕೆಂದು ಆಗ್ರಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

