ವಾಗ್ಮಿ, ಆಡಳಿತಗಾರ ಎಸ್.ವಿ. ತಿಮ್ಮಯ್ಯ ಇನ್ನಿಲ್ಲ
ಶಿವಮೊಗ್ಗ: ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ, ಕರ್ನಾಟಕ ಸಂಘದ ಅಧ್ಯಕ್ಷ, ಪ್ರಖರ ವಾಗ್ಮಿ, ಸಹಕಾರಿ ಧುರೀಣ ಹಾಗೂ ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಎಸ್.ವಿ. ತಿಮ್ಮಯ್ಯ (66) ಮಂಗಳವಾರ ಮಧ್ಯಾಹ್ನ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರಿಗೆ ಒಬ್ಬ ಪುತ್ರ, ಪುತ್ರಿ ಇದ್ದಾರೆ.
ಕಳೆದ ಒಂದುವರೆ ತಿಂಗಳ ಹಿಂದೆ ತಮಿಳುನಾಡಿನ ಕರೂರು ಬಳಿ ರಸ್ತೆ ಅಪಘಾತದಲ್ಲಿ ಅವರು ತೀವ್ರವಾಗಿ ಗಾಯಗೊಂಡಿದ್ದರು.
ಬುಧವಾರ ಮಧ್ಯಾಹ್ನದವರೆಗೆ ಅವರ ಪಾರ್ಥಿವ ಶರೀರವನ್ನು ನಗರದ ಕಲ್ಲಪ್ಪನಕೇರಿಯಲ್ಲಿರುವ ಅವರ ನಿವಾಸದಲ್ಲಿ ಇಡಲಾಗುವುದು. ಬಳಿಕ 1.30ರಿಂದ 2 ಗಂಟೆಯವರೆಗೆ ಎನ್‌ಇಎಸ್ ಕ್ವಾರ್ಡಾಂಡಲ್‌ನಲ್ಲಿ ಅಂತಿಮ ದರ್ಶಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.
ಬಹುಮುಖಿ ವ್ಯಕ್ತಿತ್ವ: ಎಸ್.ವಿ. ತಿಮ್ಮಯ್ಯ ವೃತ್ತಿಯಲ್ಲಿ ವಕೀಲರಾದರೂ ರಾಜಕೀಯ, ಸಾಂಸ್ಕೃತಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಹಾಲಿ ಕರ್ನಾಟಕ ಸಂಘದ ಅಧ್ಯಕ್ಷರಾಗಿದ್ದ ಇವರು ಹತ್ತಾರು ಸಾಂಸ್ಕೃತಿಕ, ಧಾರ್ಮಿಕ ಸಂಘಟನೆಗಳಲ್ಲಿ ಪದಾಧಿಕಾರಿಗಳಿಗಾಗಿ ಕಾರ್ಯನಿರ್ವಹಿಸಿದ್ದಾರೆ. ಉತ್ತಮ ವಾಗ್ಮಿಯಾಗಿದ್ದ ತಿಮ್ಮಯ್ಯ ಅವರು ಡಿ.ವಿ. ಗುಂಡಪ್ಪ ಅವರ ಯಾವುದೇ ವಿಷಯದ ಬಗ್ಗೆ ನಿಖರವಾಗಿ ಮಾತನಾಡಬಲ್ಲವರಾಗಿದ್ದರು. ಬೆಳ್ಳಿಮಂಡಲ, ಗಮಕ ಕಲಾ ಪರಿಷತ್, ಸೌರಭ ಸೇರಿದಂತೆ ಕಳೆದೆರಡು ದಶಕದಿಂದ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯಲ್ಲಿದ್ದ ಇವರು ಸಹಕಾರ್ಯದರ್ಶಿಯಾಗಿ, ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿ ಈ ಸಂಸ್ಥೆಯನ್ನು ಮತ್ತಷ್ಟು ಕಟ್ಟಿಬೆಳೆಸಿದರು. ಎಂಜಿನಿಯರಿಂಗ್ ಕಾಲೇಜಿನಲ್ಲಿ ಹೊಸ-ಹೊಸ ಪ್ರಯೋಗಗಳನ್ನು ಮಾಡಿದವರು. ತಂತ್ರಜ್ಞಾನಕ್ಕೆ ಹೆಚ್ಚಿನ ಆದ್ಯತೆ ನೀಡಿದವರು. ಹೊಸ ಕೋರ್ಸ್‌ಗಳನ್ನು ತೆರೆಯುವುದರ ಮೂಲಕ ಶಿವಮೊಗ್ಗದಂತಹ ನಗರದಲ್ಲಿ ಎಂಜಿನಿಯರಿಂಗ್ ಶಿಕ್ಷಣವನ್ನು ಕಟ್ಟಿ ಬೆಳೆಸಿದ್ದಾರೆ. ಕಾಂಗ್ರೆಸ್ ಮುಖಂಡರಾದ ಇವರು ಎರಡು ಬಾರಿ ನಗರಸಭಾ ಸದಸ್ಯರಾಗಿದ್ದಾರೆ. ಬಂಗಾರಪ್ಪ ಅವರು ಮುಖ್ಯಮಂತ್ರಿಯಾಗಿ ಸ್ಥಾಪನೆಯಾಗಿದ್ದ ಶಿವಮೊಗ್ಗ ನಗರಪಾಲಿಕೆ ಸದಸ್ಯರೂ ಆಗಿದ್ದರು. ಅಲ್ಲದೆ ಕುರುಬರ ಹಾಸ್ಟೆಲ್ ಸಮಿತಿ ಅಧ್ಯಕ್ಷರಾಗಿದ್ದರು. ಸಹಕಾರ ಕ್ಷೇತ್ರದಲ್ಲಿಯೂ ಛಾಪು: ಮೂಡಿಸಿರುವ ಇವರು ಸಿಟಿ ಕೋ ಆಪರೇಟಿವ್ ಸೊಸೈಟಿ, ಶಿವಮೊಗ್ಗ ಗೃಹ ನಿರ್ಮಾಣ ಸಹಕಾರ ಸಂಘ ಸೇರಿದಂತೆ ಹಲವು ಸಂಸ್ಥೆಗಳಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಗಣ್ಯರ ಸಂತಾಪ
ಕ.ಪ್ರ.ವಾರ್ತೆ, ಶಿವಮೊಗ್ಗ, ಡಿ.31
ವಾಗ್ಮಿ, ಆಡಳಿತಗಾರ ಎಸ್.ವಿ. ತಿಮ್ಮಯ್ಯ ಅವರ ನಿಧನಕ್ಕೆ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಪದಾಧಿಕಾರಿಗಳು, ಉಪನ್ಯಾಸಕರು, ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ. ಇವರು ಸಂಸ್ಥೆಗೆ ಸಲ್ಲಿಸಿದ ಸೇವೆ ಸ್ಮರಣೀಯ ಎಂದು ಶೋಕಿಸಿದ್ದಾರೆ.
ನಗರದಲ್ಲಿ ನಡೆಯುವ ಕಲೆ, ಸಾಹಿತ್ಯ, ನಾಡು-ನುಡಿ, ಸಂಸ್ಕೃತಿ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಮುಂಚೂಣಿಯಲ್ಲಿದ್ದು, ವಕೀಲರಾಗಿದ್ದರು. ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿಯಾಗಿದ್ದ ಅವಧಿಯಲ್ಲಿ ಶಿಕ್ಷಣ ಸಂಸ್ಥೆಯ ಶ್ರೇಯೋಭಿವೃದ್ಧಿಗೆ ಶ್ರಮಿಸಿದ್ದರು ಎಂದು ಸ್ಮರಿಸಿದ್ದಾರೆ. ಎಸ್.ವಿ. ತಿಮ್ಮಯ್ಯ ಅವರ ನಿಧನಕ್ಕೆ ಜಿಲ್ಲಾ ಉಸ್ತುವಾರಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್, ಸಂಸದ ಬಿ.ವೈ. ರಾಘವೇಂದ್ರ, ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ, ಜಿಪಂ ಅಧ್ಯಕ್ಷೆ ಗೀತಾ ಮಲ್ಲಿಕಾರ್ಜುನ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಸೇರಿದಂತೆ ಅನೇಕ ಗಣ್ಯರು, ಚುನಾಯಿತ ಪ್ರತಿನಿಧಿಗಳು ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ಜಾತ್ಯತೀತ ಜನತಾದಳ ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಮಹೇಂದ್ರಪ್ಪ, ಜಿಲ್ಲಾ ಕುರುಬರ ಸಂಘದ ಪ್ರಮುಖರಾದ ಎಸ್.ಪಿ. ಶೇಷಾದ್ರಿ, ರಂಗನಾಥ್, ಬಿಜೆಪಿ ಪದಾಧಿಕಾರಿಗಳು ಸೇರಿದಂತೆ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಕನಕಗುರುಪೀಠಧ್ಯಕ್ಷ ಶ್ರೀ ನಿರಂಜನಾನಂದಪುರಿ ಶ್ರೀಗಳ ಸಂತಾಪ
ಶಿಕಾರಿಪುರ: ಶಿವಮೊಗ್ಗದ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ, ಕಾಗಿನೆಲೆ ಕನಕಗುರುಪೀಠದ ನಿರ್ದೇಶಕ ಎಸ್.ವಿ ತಿಮ್ಮಯ್ಯನವರ ಅಕಾಲಿಕ ದುರ್ಮರಣಕ್ಕೆ ಕಾಗಿನೆಲೆ ಕನಕಗುರುಪೀಠಧ್ಯಕ್ಷ ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಲಕ್ಷಾಂತರ ವಿದ್ಯಾರ್ಥಿಗಳ ವಿದ್ಯಾದಾಹವನ್ನು ನೀಗಿಸುವ ಮೂಲಕ ಶೈಕ್ಷಣಿಕ ಕ್ಷೇತ್ರದಲ್ಲಿ ಕ್ರಾಂತಿಯನ್ನು ರೂಪಿಸಿದ ಎಸಸ್ವಿ ತಿಮ್ಮಯ್ಯನವರು ಸಾಮಾಜಿಕವಾಗಿ ಸಾರ್ವಜನಿಕವಾಗಿ ಸೇವೆಯನ್ನು ಸಲ್ಲಿಸುವ ಜತೆಗೆ ಎಲ್ಲಾ ಕ್ಷೇತ್ರದಲ್ಲಿ ಸಕ್ರೀಯವಾಗಿ ತೊಡಗಿಸಿ ಕೊಂಡಿದ್ದು ಅವರ ಸಾಮಾಜಿಕ ಕಾರ್ಯ ಮರೆಯಲಸಾಧ್ಯ ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ತಿಮ್ಮಯ್ಯನವರ ನೆನಪು ಸದಾ ಕಾಲ ಶಾಶ್ವತವಾಗಲಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಶೋಕ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

