ಮೇ 20ರೊಳಗೆ ವರದಿ ಸಲ್ಲಿಸಲು ಆದೇಶ
ಶಿವಮೊಗ್ಗ: ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಕುಟುಂಬದ ಅಕ್ರಮ ಸಂಪತ್ತು ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದ ತನಿಖಾ ವರದಿಯನ್ನು ಮೇ 20ರೊಳಗೆ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೋಮವಾರ ಜಿಲ್ಲಾ ವಿಶೇಷ ಲೋಕಾಯುಕ್ತ ನ್ಯಾಯಾಲಯ ಆದೇಶ ನೀಡಿದೆ.
ತನಿಖಾಧಿಕಾರಿ ಲೋಕಾಯುಕ್ತ ಡಿವೈಎಸ್ಪಿ ಶಿವಕುಮಾರ್ ಅವರು ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಸಾಕಷ್ಟು ಮಾಹಿತಿ ಸಂಗ್ರಹಿಸಲಾಗಿದೆ. ಇನ್ನೂ ಹಲವು ದಾಖಲೆ ಸಂಗ್ರಹಿಸಬೇಕಾಗಿರುವುದರಿಂದ ವರದಿ ಸಲ್ಲಿಸಲು ಆರು ತಿಂಗಳ ಕಾಲಾವಕಾಶ ನೀಡುವಂತೆ ಕೋರಿದರು. ಇದನ್ನು ತಿರಸ್ಕರಿಸಿದ ನ್ಯಾಯಾಲಯ ಮೇ.20ರೊಳಗೆ ತನಿಖಾ ವರದಿ ಸಲ್ಲಿಸುವಂತೆ ಆದೇಶಿಸಿತು.
ಖಾಸಗಿ ದೂರು ದಾಖಲು: ಕೆ.ಎಸ್. ಈಶ್ವರಪ್ಪ, ಪುತ್ರ ಕಾಂತೇಶ್ ಹಾಗೂ ಸೊಸೆ ಶಾಲಿನಿ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಡಿಸೆಂಬರ್ 13ರಂದು ನಗರದ ವಕೀಲ ಬಿ. ವಿನೋದ್ ಜಿಲ್ಲಾ ವಿಶೇಷ ಲೋಕಾಯುಕ್ತ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ಡಿ.15ರಂದು ತನಿಖೆಗೆ ಆದೇಶಿಸಿದ ನ್ಯಾಯಾಧೀಶರು ಲೋಕಾಯುಕ್ತ ಡಿವೈಎಸ್ಪಿಗೆ ತನಿಖೆಯ ಜವಾಬ್ದಾರಿ ವಹಿಸಿದ್ದರು. 2013ರ ಫೆ.4ರೊಳಗೆ ದೂರಿನ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಲಾಗಿತ್ತು.
ಅಂತೆಯೇ ಡಿಸೆಂಬರ್ 17ರಂದು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಕಲಂ 13(1)(ಡಿ)(ಇ), 120(ಬಿ) ಹಾಗೂ ಐಪಿಸಿ ಕಲಂ 420ರ ಅಡಿ ಈಶ್ವರಪ್ಪ, ಪುತ್ರ ಹಾಗೂ ಸೊಸೆಯ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದರು.
ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗುವ ಭೀತಿಯಿಂದ ಡಿಸೆಂಬರ್ 18ರಂದು ವಕೀಲ ಅಶೋಕ ಭಟ್ ಹಾಗೂ ಶ್ರೀಧರ್ ಮೂಲಕ ನ್ಯಾಯಾಲಯಕ್ಕೆ ಸಿಆರ್ಪಿಸಿ ಕಲಂ 438ರ ಅಡಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಈಶ್ವರಪ್ಪ, ಪುತ್ರ, ಹಾಗೂ ಸೊಸೆ ಸಲ್ಲಿಸಿದ್ದರು. 19ರಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ತಕರಾರರು ಅರ್ಜಿ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ಸೂಚಿಸಿ ಡಿಸೆಂಬರ್ 21ಕ್ಕೆ ವಿಚಾರಣೆ ಮುಂದೂಡಿದ್ದರು.
ಮನೆ, ಕಚೇರಿ ಮೇಲೆ ದಾಳಿ: ಅಂದು ಲೋಕಾಯುಕ್ತ ಪೊಲೀಸರು ತಕರಾರು ಅರ್ಜಿ ಸಲ್ಲಿಸಲು ಹೆಚ್ಚಿನ ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆಯನ್ನು ಡಿಸೆಂಬರ್ 27ಕ್ಕೆ ನ್ಯಾಯಾಲಯ ಮುಂದೂಡಿತು. ಈ ನಡುವೆ ಲೋಕಾಯುಕ್ತ ಪೊಲೀಸರು ಶಿವಮೊಗ್ಗದ 7 ಹಾಗೂ ಬೆಂಗಳೂರಿನ 1 ಕಡೆ ಸೇರಿದಂತೆ 8 ಕಡೆ ಈಶ್ವರಪ್ಪನವರಿಗೆ ಸಂಬಂಧಿಸಿದ ಮನೆ, ಕಚೇರಿ, ಶಿಕ್ಷಣ ಸಂಸ್ಥೆ, ಆಪ್ತರ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದರು. ಆಸ್ತಿ ಪಾಸ್ತಿಗೆ ಸಂಬಂಧಿಸಿದ ದಾಖಲೆ ವಶಕ್ಕೆ ಪಡೆದುಕೊಂಡಿದ್ದರು. ಡಿಸೆಂಬರ್ 27ರಂದು ಈಶ್ವರಪ್ಪ ನಿರೀಕ್ಷಣಾ ಜಾಮೀನಿಗೆ ಲೋಕಾಯುಕ್ತ ಪೊಲೀಸರು ತಕರಾರು ಅರ್ಜಿ ಸಲ್ಲಿಸಿದ್ದರು. ಡಿಸೆಂಬರ್ 31ರಂದು ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದರು.
ಈಶ್ವರಪ್ಪ ಹೈಕೋರ್ಟ್ಗೆ ಮೊರೆ
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಲೋಕಾಯುಕ್ತ ನ್ಯಾಯಾಲಯದಲ್ಲಿ
ತಮ್ಮ ವಿರುದ್ಧ ದಾಖಲಾಗಿರುವ ಖಾಸಗಿ ದೂರಿನ ರದ್ದತಿ ಕೋರಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಅಧಿಕಾರಕ್ಕೆ ಬಂದ ನಂತರ ಕೆ.ಎಸ್.ಈಶ್ವರಪ್ಪ ಅವರು ಅಲ್ಪಕಾಲದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಕೋಟ್ಯಂತರ ರುಪಾಯಿ ಮೌಲ್ಯದ ಆಸ್ತಿ ಗಳಿಸಿದ್ದಾರೆ. ಈ ಕುರಿತು ತನಿಖೆ ನಡೆಸಬೇಕು ಎಂದು ಕೋರಿ ವಕೀಲ ವಿನೋದ್ಕುಮಾರ್ ಎಂಬುವರು ಸಲ್ಲಿಸಿರುವ ಖಾಸಗಿ ದೂರಿನ ರದ್ದತಿ ಕೋರಿ ಈಶ್ವರಪ್ಪ ಅರ್ಜಿ ಸಲ್ಲಿಸಿದ್ದಾರೆ.
ವಿಚಾರಣೆ ನಡೆಸಿದ ನ್ಯಾ.ಎ.ಎಸ್.ಪಚ್ಚಪುರೆ ಅವರಿದ್ದ ಏಕಸದಸ್ಯ ಪೀಠ, ಲೋಕಾಯುಕ್ತ ಪೊಲೀಸರು ಹಾಗೂ ವಿನೋದ್ಕುಮಾರ್ಗೆ ನೋಟಿಸ್ ಜಾರಿ ಮಾಡಿದೆ.
ಆರೋಪವೇನು?: ಈಶ್ವರಪ್ಪ ಅವರು ಸಚಿವರಾಗಿದ್ದ 2006ರಿಂದ 2011ರ ಅವಧಿಯಲ್ಲಿ ಶಿವಮೊಗ್ಗ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ 4,39,898 ಚದರ ಅಡಿ ನಿವೇಶನ ಪಡೆದಿದ್ದಾರೆ. ತಮ್ಮ ಕುಟುಂಬ ಸದಸ್ಯರ ಹೆಸರಿನಲ್ಲಿ ಕೋಟ್ಯಂತರ ರುಪಾಯಿ ಮೌಲ್ಯದ ಆಸ್ತಿಯನ್ನು ಅಕ್ರಮವಾಗಿ ಖರೀದಿಸಿದ್ದಾರೆ. ಇದರಿಂದ ಈಶ್ವರಪ್ಪ ಅವರು ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಸ್ಪಷ್ಟವಾಗುತ್ತದೆ ಎಂದು ಆರೋಪಿಸಿ ವಿನೋದ್ಕುಮಾರ್ ಖಾಸಗಿ ದೂರು ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

