ಶಿವಮೊಗ್ಗ

ಮರಳು ಲೋಡಿಂಗ್ ಪಾಯಿಂಟ್ ಸಂಖ್ಯೆ ಹೆಚ್ಚಳಕ್ಕೆ ಆಗ್ರಹ

Published On :

ಶಿವಮೊಗ್ಗ: ಮರಳು ಲೋಡಿಂಗ್ ಪಾಯಿಂಟ್‌ಗಳ ಸಂಖ್ಯೆ ಹೆಚ್ಚಿಸುವಂತೆ ಆಗ್ರಹಿಸಿ ಜಿಲ್ಲಾ ಕಟ್ಟಡ ಸಾಮಗ್ರಿ ಸಾಗಾಣಿಕೆ ಲಾರಿ ಮಾಲೀಕರ ಸಂಘ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿತು.
ತೀರ್ಥಹಳ್ಳಿ ತಾಲೂಕಿನ ಮೂರು ಸ್ಥಳಗಳಲ್ಲಿ ಮಾತ್ರ ಸದ್ಯ ಮರಳು ತುಂಬಲು ಅವಕಾಶ ನೀಡಲಾಗಿದೆ. ಪ್ರಸ್ತುತ ಈ ಸ್ಥಳದಲ್ಲಿ ಮರಳು ಖಾಲಿಯಾಗುವ ಹಂತಕ್ಕೆ ಬಂದಿದೆ. ಗುಣಮಟ್ಟದ ಮರಳು ಸಿಗುತ್ತಿಲ್ಲ. ಇದರಿಂದ ಗ್ರಾಹಕರಿಗೆ ತೀರಾ ತೊಂದರೆಯಾಗುತ್ತಿದೆ ಎಂದು ಪ್ರತಿಭಟನಾಕಾರರು ಸಮಸ್ಯೆ ವಿವರಿಸಿದರು.
ತೀರ್ಥಹಳ್ಳಿ ತಾಲೂಕಿನ ಹಲವು ಸ್ಥಳಗಳಲ್ಲಿ ಮರಳು ಲಭ್ಯವಿದೆ. ಈ ಪ್ರದೇಶಗಳಲ್ಲಿ ಮರಳು ತುಂಬಲು  ಅವಕಾಶ ನೀಡುವಂತೆ ಈ ಹಿಂದಿನಿಂದಲೂ ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಂಡು ಬರಲಾಗುತ್ತಿದೆ. ಆದರೆ ಇಲ್ಲಿಯವರೆಗೂ ಹೊಸ ಲೋಡಿಂಗ್ ಪಾಯಿಂಟ್ ಸ್ಥಳ ಗುರುತಿಸಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.
ಸರದಿಗೆ ಸಾಲು: ಸೀಮಿತ ಲೋಡಿಂಗ್ ಪಾಯಿಂಟ್‌ಗಳಿಂದ ಮರಳು ಸಾಗಾಣೆ ಸಾಕಷ್ಟು ವಿಳಂಬವಾಗುತ್ತಿದೆ. ಸೂಕ್ತ ಹಣ  ಪಾವತಿಸಿ ಪರ್ಮಿಟ್ ಪಡೆದು ಲೋಡಿಂಗ್ ಪಾಯಿಂಟ್ ಸ್ಥಳಗಳಲ್ಲಿ ದಿನಗಟ್ಟಲೆ ಲಾರಿಗಳು ತಮ್ಮ ಸರದಿಗೆ ಕಾದು ನಿಲ್ಲುವಂತಾಗಿದೆ. ಇದರಿಂದ ಲಾರಿ ಮಾಲೀಕರ ಮೇಲೆ ಹೆಚ್ಚಿನ ಹೊರೆ ಬೀಳುತ್ತಿದೆ. ಕೂಲಿ ಕಾರ್ಮಿಕರು, ಚಾಲಕರು ಕೂಡ ಬಳಲುವಂತಾಗಿದೆ ಎಂದು ಪ್ರತಿಭಟನಾಕಾರರು ಸಮಸ್ಯೆ ತೋಡಿಕೊಂಡರು.   
ಕೆಲ ಲೋಡಿಂಗ್ ಪಾಯಿಂಟ್‌ಗಳಲ್ಲಿ ಮರಳು ಭರ್ತಿ ಮಾಡಲು ಸ್ಥಳೀಯರು ವಿನಾ ಕಾರಣ ಅಡ್ಡಿಪಡಿಸುತ್ತಿದ್ದಾರೆ. ಲಾರಿ ಚಾಲಕರು, ಕೂಲಿ ಕಾರ್ಮಿಕರ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆ. ಇಂತಹವರ ವಿರುದ್ಧ ಸೂಕ್ತಕ್ರಮ ಕೈಗೊಳ್ಳಬೇಕೆಂದು ಸಂಘಟನೆ ಪ್ರಮುಖರು ಜಿಲ್ಲಾಡಳಿತವನ್ನು ಒತ್ತಾಯಿಸಿದರು.  
ಮರಳಿಗೆ ಸಂಬಂಧಿಸಿದ ಸಮಸ್ಯೆ ಪರಿಹಾರವಾಗುವವರೆಗೂ ಮರಳು ಸಾಗಾಣೆ ಮಾಡುವುದಿಲ್ಲ. ಅನಿರ್ದಿಷ್ಟಾವಧಿಯವರೆಗೆ ಮುಷ್ಕರ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ತಿಳಿಸಿದರು.
ಅಹವಾಲು ಆಲಿಸಿದ ನಂತರ ಜಿಲ್ಲಾಧಿಕಾರಿ ವಿಪುಲ್ ಬನ್ಸಲ್, ಫೆ.1ರು.ರಂದು ತಮ್ಮ ಕಚೇರಿಯಲ್ಲಿ ಈ ಕುರಿತಂತೆ ಪ್ರತ್ಯೇಕ ಸಭೆ ಕರೆಯಲಾಗುವುದು. ಸಮಸ್ಯೆ ಪರಿಹಾರಕ್ಕೆ ಕ್ರಮಕೈಗೊಳ್ಳುವ ಭರವಸೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.