ರಾಜ್ಯ ಸರ್ಕಾರ ವಜಾಕ್ಕೆ ಆಗ್ರಹ
ಶಿವಮೊಗ್ಗ: ಜನ ವಿರೋಧಿ ನೀತಿ ಅನುಸರಿಸುತ್ತಿರುವ ಬಿಜೆಪಿ ಸರ್ಕಾರವನ್ನು ಈ ಕೂಡಲೇ ವಜಾಗೊಳಿಸುವಂತೆ ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ರಾಜ್ಯದ ಆಡಳಿತ ವ್ಯವಸ್ಥೆ ಅಧೋಗತಿಗೆ ತಲುಪಿದೆ. ಭ್ರಷ್ಟಾಚಾರ, ಅಕ್ರಮ, ಹಗರಣಗಳು ತಾಂಡವವಾಡುತ್ತಿವೆ. ಪ್ರಸ್ತುತ ಸರ್ಕಾರ ಕೋಮಾ ಸ್ಥಿತಿಯಲ್ಲಿದೆ ಎಂದು ಜೆಡಿಎಸ್ ಮುಖಂಡರು ಲೇವಡಿ ಮಾಡಿದರು.
ಬೆಲೆ ಏರಿಕೆ: ರೈತರಿಗೆ ನೆರವಾಗುವ ನೆಪದಲ್ಲಿ ಹಾಲಿನ ಬೆಲೆಯನ್ನು ಏರಿಸಲಾಗಿದೆ. ಕೆಎಂಎಫ್ ಭ್ರಷ್ಟಾಚಾರದಲ್ಲಿ ಮುಳುಗಿದೆ. ಬೇಕಾಬಿಟ್ಟಿಯಾಗಿ ವಿದ್ಯುತ್ ಕಡಿತ ಮಾಡುವ ಮೂಲಕ ನಾಗರಿಕರಿಗೆ ತೊಂದರೆಯನ್ನುಂಟು ಮಾಡಲಾಗುತ್ತಿದೆ ಎಂದು ಪ್ರತಿಭಟನಕಾರರು ದೂರಿದರು.
ಅಕ್ಕಿ ಸೇರಿದಂತೆ ನಿತ್ಯ ಬಳಕೆ ವಸ್ತುಗಳ ಬೆಲೆ ಗಗನಕ್ಕೇರುತ್ತಿದ್ದು, ಬಡ, ಮಧ್ಯಮ ವರ್ಗದವರು ಪರದಾಡುವಂತಾಗಿದೆ. ಅಕ್ಕಿ ಹಾಗೂ ಬತ್ತವನ್ನು ರಾಜ್ಯದಿಂದ ಹೊರ ರಾಜ್ಯಗಳಿಗೆ ಕಾಳಸಂತೆಯಲ್ಲಿ ಅಕ್ರಮವಾಗಿ ಕಳ್ಳಸಾಗಾಣೆ ಮಾಡಲಾಗುತ್ತಿದ್ದು, ಇದನ್ನು ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಪ್ರತಿಭಟನಕಾರರು ಆಪಾದಿಸಿದರು.
ಬಜೆಟ್ನಲ್ಲಿ ಶಿವಮೊಗ್ಗ ನಗರ ಹಾಗೂ ಜಿಲ್ಲೆಯನ್ನು ಕಡೆಗಣಿಸಲಾಗಿದೆ. ಯಾವುದೇ ಯೋಜನೆ ಜಾರಿಗೊಳಿಸದೆ ನಿರ್ಲಕ್ಷಿಸಲಾಗಿದೆ. ಆದರೆ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಒಡೆತನದ ಶ್ರೀಗಂಧ ಸಂಸ್ಥೆಗೆ ಒಂದು ಕೋಟಿ ಮೀಸಲಿಟ್ಟಿರುವುದು ನಿಜಕ್ಕೂ ಖಂಡನಾರ್ಹ ಎಂದು ಜೆಡಿಎಸ್ ಮುಖಂಡರು ಆರೋಪಿಸಿದರು.
ಮೆಗ್ಗಾನ್ ಆಸ್ಪತ್ರೆಗೆ ನೀಡಲಿ: ಕೆ.ಎಸ್. ಈಶ್ವರಪ್ಪನವರಿಗೆ ಸಾರ್ವಜನಿಕ ಜೀವನದ ಬಗ್ಗೆ ನೈಜ ಕಳಕಳಿಯಿದ್ದರೆ ಶ್ರೀಗಂಧ ಸಂಸ್ಥೆಗೆ ಸರ್ಕಾರ ನೀಡಿರುವ ರು. 1 ಕೋಟಿ ಅನುದಾನವನ್ನು ಕೂಡಲೇ ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆಗೆ ನೀಡಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.
ನಗರಸಭೆ ಅಕ್ರಮಗಳಿಗೆ ಕಡಿವಾಣ ಹಾಕಿ ಜನಪರ ಆಡಳಿತ ನೀಡುತ್ತಿದ್ದ ಜಿಲ್ಲಾಧಿಕಾರಿ ಎಂ.ವಿ. ವೇದಮೂರ್ತಿಯವರನ್ನು ರಾತ್ರೋರಾತ್ರಿ ವರ್ಗಾವಣೆ ಮಾಡಿದ್ದು ಅಕ್ಷಮ್ಯ ಅಪರಾಧ. ಇದಕ್ಕೆ ಈಶ್ವರಪ್ಪನವರೇ ನೇರ ಕಾರಣ ಎಂದು ಟೀಕಿಸಿದರು.
ದುರಾಳಿಡತ, ಸ್ವಜನ ಪಕ್ಷಪಾತ, ಜನ ವಿರೋಧಿ, ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ ಸರ್ಕಾರವನ್ನು ಕೂಡಲೇ ವಜಗೊಳಿಸಬೇಕು ಎಂದು ರಾಜ್ಯಪಾಲರಿಗೆ ಪ್ರತಿಭಟನೆಯಲ್ಲಿ ಪಕ್ಷದ ಪ್ರಮುಖರಾದ ನಾಗರಾಜ ಕಂಕಾರಿ, ಶ್ಯಾಮಸುಂದರ್, ಎಚ್.ವಿ. ಮಹೇಶ್ವರಪ್ಪ, ಮಂಜುನಾಥ್, ಮಾದಪ್ಪ, ಅಬ್ದುಲ್ ವಾಜೀದ್, ರಾಜಯ್ಯ, ಶ್ರೀನಿವಾಸ, ಸುನೀಲ್ ಮೊದಲದವರು ಮನವಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

