ಮೆಸ್ಕಾಂ ಅಧಿಕಾರಿಗೆ ಗ್ರಾಮಸ್ಥರ ತರಾಟೆ
ಸಾಗರ: ತಾಲೂಕಿನ ಮುತ್ತಲಬೈಲು, ಗುತ್ತನಹಳ್ಳಿ, ಚನ್ನಾಪುರ, ಜಂಬಾನಿ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸುವಲ್ಲಿ ವಿಫಲವಾಗಿರುವ ಮೆಸ್ಕಾಂ ಅಧಿಕಾರಿಗಳನ್ನು ಗುರುವಾರ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.
ತಾಪಂ ಅಧ್ಯಕ್ಷ ಮಹಾಬಲೇಶ್ವರ ಕುಗ್ವೆ, ಸದಸ್ಯ ಪ್ರಕಾಶ್ ಲ್ಯಾವಿಗೆರೆ, ಜಿ.ಪಂ. ಸದಸ್ಯ ರತ್ನಾಕರ ಹೊನಗೋಡು ಇನ್ನಿತರರು ಮೆಸ್ಕಾಂನ ಕಾರ್ಯನಿರ್ವಾಹಕ ಎಂಜಿನಿಯರ್ ದೀಪಕ್ ಕಾಮತ್ ಅವರನ್ನು ಭೇಟಿ ಮಾಡಿ, ಕಾಮಗಾರಿ ವಿಳಂಬವಾಗುತ್ತಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕಿನಲ್ಲಿ ಜನರಿಗೆ ಸಮರ್ಪಕ ವಿದ್ಯುತ್ ಸೌಲಭ್ಯ ತಲುಪಿಸುವಲ್ಲಿ ಇಲಾಖೆ ಸಂಪೂರ್ಣ ವಿಫಲವಾಗಿದೆ. ಸೊರಬ, ಶಿಕಾರಿಪುರ ತಾಲೂಕುಗಳಲ್ಲಿ ಅಕ್ರಮ ಸಕ್ರಮ, ರೈತರ ಪಂಪ್ಸೆಟ್ಗಳನ್ನು ಸಕ್ರಮಗೊಳಿಸುವ ಯೋಜನೆಗಳು ಶೇ.75ರಷ್ಟು ಪ್ರಗತಿಯಲ್ಲಿದ್ದರೆ, ಸಾಗರ ವಿಭಾಗದಲ್ಲಿ ಕೇವಲ ಶೇ.2ರಷ್ಟು ಪ್ರಗತಿಯಾಗಿದೆ. ಇದರಿಂದ ಗ್ರಾಮೀಣ ಪ್ರದೇಶದಲ್ಲಿ ರೈತರು ಆತಂಕದಲ್ಲಿಯೇ ದಿನ ಕಳೆಯುವ ಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ದೂರಿದರು.
ಪ್ರಗತಿ ಕುಂಠಿತ: ಕಾರ್ಯಪಾಲಕ ಅಭಿಯಂತರ ದೀಪಕ್ ಕಾಮತ್ ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರ ಶ್ರೀಕಾಂತ ಅವರ ನಡುವಿನ ಹೊಂದಾಣಿಕೆ ಕೊರತೆಯಿಂದಾಗಿ ಯಾವುದೆ ಕೆಲಸಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಅನೇಕ ಭಾಗಗಳಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲು ಯೋಜನೆ ಸಿದ್ಧವಾಗಿದ್ದರೂ ದೀಪಕ್ ಕಾಮತ್ ಸಾಮಗ್ರಿಗಳನ್ನು ಪೂರೈಸುವಲ್ಲಿ ಹಿಂದೇಟು ಹಾಕುತ್ತಿರುವುದರಿಂದ ಕೆಲಸಗಳ ಪ್ರಗತಿ ಕುಂಠಿತವಾಗಿದೆ ಎಂದು ಆರೋಪಿಸಿದರು.
ವಿದ್ಯುತ್ ಕಡಿತಗೊಳಿಸುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಗ್ರಾಮಸ್ಥರು ಗ್ರಾಮಾಂತರ ಪ್ರದೇಶಗಳಲ್ಲಿ ಯಾವ ಸಮಯಕ್ಕೆ ಲೋಡ್ ಶೆಡ್ಡಿಂಗ್ ಮಾಡುತ್ತಾರೆ ಎಂಬ ಮಾಹಿತಿ ಜನರಿಗೆ ಇಲ್ಲವಾಗಿದೆ. ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯವಾಗಿರುವುದರಿಂದ ರಾತ್ರಿ ಹೊತ್ತು ವಿದ್ಯುತ್ ಕಡಿತಗೊಳಿಸುತ್ತಿರುವುದು ತೀವ್ರ ಸಮಸ್ಯೆ ತಂದಿದೆ. ಜನಸಾಮಾನ್ಯರು ಅಧಿಕಾರಿಗಳಲ್ಲಿ ಸಮಸ್ಯೆ ಬಗ್ಗೆ ಹೇಳಿದರೆ ಅವರು ಕೇಳುವ ಸ್ಥಿತಿಯಲ್ಲಿ ಇಲ್ಲ. ತಕ್ಷಣ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಎಂದು ಆಗ್ರಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

