ಶಿವಮೊಗ್ಗ

ನಾಳೆಯಿಂದಲೇ ಭದ್ರಾ ನಾಲೆಗೆ ನೀರು

Published On :

ಕ.ಪ್ರ.ವಾರ್ತೆ, ಶಿವಮೊಗ್ಗ,  ಜು.8
ಭದ್ರಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಜೂನ್ ತಿಂಗಳಲ್ಲಿ ಯಾವತ್ತೂ ಬರದಷ್ಟು ನೀರು ಹರಿದು ಬಂದಿದೆ. ಜೂನ್‌ನಲ್ಲಿ ಇಷ್ಟು ಪ್ರಮಾಣದ ನೀರು ಹರಿದು ಬಂದಿದ್ದು 50 ವರ್ಷಗಳ ಹಿಂದೆ.
ಈ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಜು.10ರಿಂದಲೇ ನಾಲೆಗಳಿಗೆ ನೀರು ಹರಿಸಲು ತೀರ್ಮಾನಿಸಲಾಯಿತು.
ಪ್ರಾಧಿಕಾರದ ಆಡಳಿತಾಧಿಕಾರಿ ಅಣ್ಣಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ, ಮೊದಲ ಹಂತದಲ್ಲಿ ಜು.10ರಿಂದ ಆಗಸ್ಟ್ 31ರ ವರೆಗೆ ಒಟ್ಟು 52 ದಿನ ನೀರು ಹರಿಸಲಾಗುವುದು. ನಂತರ 10 ದಿನ ನೀರು ಬಂದ್ ಮಾಡಿ ನಂತರ ಸೆ.11ರಿಂದ 50 ದಿನ ನೀರು ಹರಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಮೊದಲ ಹಂತದ 52 ದಿನ ನೀರು ಹರಿಸಿದ ನಂತರ ಪರಿಸ್ಥಿತಿಯನ್ನು ಅವಲೋಕಿಸಿ, ಮಳೆ ಬಾರದಿದ್ದರೆ ಮತ್ತೆ ಸಭೆ ಸೇರಲು ಸಲಹಾ ಸಮಿತಿ ಸದಸ್ಯರು ಒಮ್ಮತಕ್ಕೆ ಬಂದರು.
ಸಭೆಯಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದಾ ಪೂರ್ಯಾನಾಯ್ಕ್, ಹೊನ್ನಾಳಿ ಶಾಸಕ ಡಿ.ಜಿ. ಶಾಂತನಗೌಡ, ಹರಿಹರ ಶಾಸಕ ಎಚ್.ಎಸ್. ಶಿವಶಂಕರ್, ಭದ್ರಾ ಎಡನಾಲಾ ಅಚ್ಚುಕಟ್ಟುದಾರರ ಹಿತರಕ್ಷಣಾ ಸಮಿತಿ ಪ್ರಧಾನ ಕಾರ್ಯದರ್ಶಿ ವೈ.ಜಿ. ಮಲ್ಲಿಕಾರ್ಜುನ್, ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಗಳ ಜಂಟಿ ಕೃಷಿ ನಿರ್ದೇಶಕರು, ಎಂಜಿನಿಯರ್ ಫಣಿರಾಜ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.