ಶಿವಮೊಗ್ಗ

ಅಧಿಕ ಬೆಲೆಗೆ ಅಕ್ಕಿ ಮಾರಾಟ: ಆರೋಪ

Published On :

ಕ.ಪ್ರ.ವಾರ್ತೆ, ಶಿವಮೊಗ್ಗ, ಜು.16
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಲ್ಲಿ ವಿತರಿಸುತ್ತಿರುವ ಅಕ್ಕಿಯನ್ನು ನಿಗದಿತ ದರಕ್ಕಿಂತ ಅಧಿಕ ಬೆಲೆಯಲ್ಲಿ ಮಾರಾಟ ಮಾಡುತ್ತಿರುವುದನ್ನು ತಡೆಯಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವಕ್ತಾರ ರಮೇಶ್ ಹೆಗ್ಡೆ ನೇತೃತ್ವದಲ್ಲಿ ಎನ್‌ಎಸ್‌ಯುಐ ಸದಸ್ಯರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರ ಕರ್ನಾಟಕವನ್ನು ಹಸಿವು ಮುಕ್ತ ರಾಜ್ಯವನ್ನಾಗಿ ಮಾಡುವ ಉದ್ದೇಶದಿಂದ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು, ಬಿಪಿಎಲ್ ಕುಟುಂಬಗಳಿಗೆ ಒಂದು ರುಪಾಯಿಗೆ ಒಂದು ಕೆ.ಜಿ. ಅಕ್ಕಿ ವಿತರಿಸುವ ಯೋಜನೆಯನ್ನು ಅನುಷ್ಠಾನಕ್ಕೆ ತಂದಿದೆ. ಆದರೆ, ಜಿಲ್ಲೆಯ ಕೆಲ ನ್ಯಾಯಬೆಲೆ ಅಂಗಡಿಗಳಲ್ಲಿ 1 ರುಪಾಯಿಗಿಂತ ಅಧಿಕ (1.50, 1.75)ದರದಲ್ಲಿ ಅಕ್ರಮವಾಗಿ ಅಕ್ಕಿ ಮಾರಾಟ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.
ಪಾರದರ್ಶಕತೆ ಪ್ರದರ್ಶಿಸಲಿ: ಜಿಲ್ಲೆಯ ಎಲ್ಲ ನ್ಯಾಯಬೆಲೆ ಅಂಗಡಿ ಮುಂಭಾಗದಲ್ಲಿ ಅನ್ನಭಾಗ್ಯ ಯೋಜನೆಯ ಮಾಹಿತಿಯ ನಾಮಫಲಕಗಳನ್ನು (ನಿಗದಿಪಡಿಸಿದ ದರ ಮತ್ತು ಪ್ರಮಾಣ) ಖಡ್ಡಾಯವಾಗಿ ಹಾಕಿಸಬೇಕು. ತಿಂಗಳ ಪ್ರತಿ ದಿನಗಳಲ್ಲಿ ಪಡಿತರ ಪದಾರ್ಥ ವಿತರಣೆಗೆ ಸೂಕ್ತ ಕ್ರಮಕೈಗೊಳ್ಳಬೇಕು, ನಿಷ್ಕ್ರಿಯಗೊಂಡಿರುವ ಜಾಗೃತ ಸಮಿತಿಯನ್ನು ರದ್ದುಪಡಿಸಿ ವಾರ್ಡ್‌ಗೊಂದರಂತೆ ಹೊಸ ಗ್ರಾಹಕ ಸಮಿತಿಗಳನ್ನು ರಚಿಸಿ ಯೋಜನೆಯ ಯಶಸ್ಸಿಗೆ ಹಾಗೂ ಪಾರದರ್ಶಕ ಪಡಿತರ ವಿತರಣೆಗೆ ಆದೇಶ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಅಸಮರ್ಪಕ ಹಾಗೂ ಅಕ್ರಮ ಪಡಿತರ ವಿತರಣೆ ಬಗ್ಗೆ ದೂರು ಸಲ್ಲಿಸುವ ಸಲುವಾಗಿ ದೂರು ಕೇಂದ್ರವನ್ನು ಅನೌಪಚಾರಿಕ ಪಡಿತರ ಪ್ರದೇಶ ಹಾಗೂ ತಾಲೂಕು ಕೇಂದ್ರಗಳಲ್ಲಿ ಪ್ರಾರಂಭಿಸಬೇಕು. ಆಹಾರ ಇಲಾಖೆಯ ಅಧಿಕಾರಿಗಳಿಂದ ನಿರಂತರವಾಗಿ ಈ ಬಗ್ಗೆ ಪರಿಶೀಲನೆ ನಡೆಸಿ ಪ್ರಗತಿಯ ಬಗ್ಗೆ ದೃಢೀಕರಿಸಿದ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ನೀಡಲು ಸೂಕ್ತ ಕ್ರಕೈಗೊಳ್ಳಬೇಕು. ಪ್ರತಿ ನ್ಯಾಯಬೆಲೆ ಅಂಗಡಿಯಲ್ಲಿ ಸಮರ್ಪಕ ಹಾಗೂ ಪಾರದರ್ಶಕ ಪಡಿತರ ವಿತರಣೆ ವ್ಯವಸ್ಥೆಗಾಗಿ ಇ-ಪಡಿತರ ಯಂತ್ರವನ್ನು ಅಳವಡಿಸಲು ತುರ್ತು ವ್ಯವಸ್ಥೆ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಸಭೆ ನಡೆಸಿ ಕ್ರಮ: ಈ ಬಗ್ಗೆ ಕನ್ನಡಪ್ರಭದೊಂದಿಗೆ ಮಾತನಾಡಿದ ಅಪರ ಜಿಲ್ಲಾಧಿಕಾರಿ ಶ್ರೀರಂಗಯ್ಯ, ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ಕಾರ ನಿಗದಿ ಮಾಡಿದ 1 ದರಕ್ಕಿಂತ ಹೆಚ್ಚು ಬೆಲೆಗೆ ಪಡಿತರ ವಿತರಣೆ ಹಾಗೂ ಪಡಿತರ ಕಾರ್ಡ್ ನವೀಕರಣಕ್ಕೆ 50 ಹೆಚ್ಚು ಹಣ ಪಡೆಯುತ್ತಿರುವ ಬಗ್ಗೆ ನಮಗೆ ದೂರುಗಳು ಬಂದಿವೆ. ಈ ಸಂಬಂಧವಾಗಿ ಮಂಗಳವಾರ ಅಥವಾ ಬುಧವಾರ ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ನ್ಯಾಯಬೆಲೆ ಅಂಗಡಿ ಮಾಲೀಕರೊಂದಿಗೆ ಸಭೆ ನಡೆಸಿ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವಕ್ತಾರ ರಮೇಶ್ ಹೆಗ್ಡೆ, ಎನ್‌ಎಸ್‌ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿ ಜೆ. ಮಧುಸೂದನ್, ಜಿಲ್ಲಾಧ್ಯಕ್ಷ ಚೇತನ್, ಮಾಜಿ ಅಧ್ಯಕ್ಷ ಮುರುಗೇಂದ್ರಪ್ಪ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.