ಶಿವಮೊಗ್ಗ

ಸೇತುವೆ ನಿಮಾಣ ಗುತ್ತಿಗೆಗೆ ಐದು ಕಂಪನಿಗಳ ಹೆಸರು

Published On :

ವಿಧಾನಸಭೆ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿರುವ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಹೋಗುವ ಮಾರ್ಗದಲ್ಲಿ ಸೇತುವೆ ನಿರ್ಮಾಣ ಕಾರ್ಯಕ್ಕೆ ಐದು ಗುತ್ತಿಗೆ ಕಂಪನಿಗಳ ಹೆಸರನ್ನು ಅಂತಿಮ ಪಟ್ಟಿಗೆ ಸೇರಿಸಲಾಗಿದೆ ಎಂದು ಲೋಕೋಪಯೋಗಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ವಿಧಾನಸಭೆಗೆ ತಿಳಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರ ನೀಡಿದ ಅವರು ಈ ವಿಷಯ ತಿಳಿಸಿದ್ದಾರೆ. ಅಂಬರಗೋಡ್ಲು- ಕಳಸವಳ್ಳಿ ರಸ್ತೆ ಶರಾವತಿ ನದಿ ಹಿನ್ನೀರಿನಲ್ಲಿ ಸೇತುವೆ ನಿರ್ಮಾಣಕ್ಕಾಗಿ 2009ರಲ್ಲಿ 164.59 ಕೋಟಿ ಅಂದಾಜು ವೆಚ್ಚದಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಅನುದಾನದ ಕೊರತೆಯಿಂದ ಟೆಂಡರ್ ಪ್ರಕ್ರಿಯೆಯಲ್ಲಿ ವಿಳಂಬವಾಗಿದೆ. ಪ್ರಸಕ್ತ ಸಾಲಿನಲ್ಲಿ ಗುತ್ತಿಗೆದಾರರನ್ನು ನೇಮಿಸಲು ಪ್ರಕ್ರಿಯೆ ಆರಂಭವಾಗಿದೆ. ಐವರು ಗುತ್ತಿಗೆದಾರರ ಹೆಸರನ್ನು ಪಟ್ಟಿ ಮಾಡಲಾಗಿದೆ. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಮೂಲಕ ಟೆಂಡರ್ ಪ್ರಕ್ರಿಯೆ ನಡೆಸಲಾಗುವುದು ಎಂದರು.
ಸಂಹಿತೆ ಉಲ್ಲಂಘನೆ; ಬೇಳೂರು ದೋಷಮುಕ್ತ
ಸಾಗರ: ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಮತ್ತು ಅವರ ಬೆಂಬಲಿಗರ ಮೇಲೆ ಸಲ್ಲಿಸಲಾಗಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ದೋಷಮುಕ್ತಗೊಳಿಸಿರುವುದಾಗಿ ನ್ಯಾಯಾಲಯ ಆದೇಶಿಸಿದೆ. ಮಂಗಳವಾರ ಸಂಜೆ ಇಲ್ಲಿನ ಪ್ರಧಾನ ಸಿವಿಲ್‌ನ್ಯಾಯಾಲಯ (ಕಿ.ವಿ.) ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶರಾದ ಸತೀಶ್ ಬಾಳಿಯವರು ಈ ಆದೇಶವನ್ನು ಪ್ರಕಟಿಸಿದಾಗ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ನಿರಾಳರಾದರು. ಪ್ರಕರಣದಲ್ಲಿ ಅನೇಕ ಬಾರಿ ನ್ಯಾಯಾಲಯಕ್ಕೆ ಹಾಜರಾಗದಿದ್ದ ಕಾರಣ ಅವರಿಗೆ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿತ್ತು. ಜು. 20ರಂದು ಪ್ರಕರಣ ಅಂತಿಮ ಆದೇಶಕ್ಕೆ ಇದ್ದರೂ ಬೇಳೂರು ನ್ಯಾಯಾಲಯಕ್ಕೆ ಹಾಜರಾಗದಿದ್ದ ಕಾರಣ ಜಾಮೀನು ರಹಿತ ಬಂಧನದ ವಾರಂಟ್ ಹೊರಡಿಸಲಾಗಿತ್ತು.  2008ರ ಚುನಾವಣೆಯಲ್ಲಿ ವಿಜಯಿಯಾದ ಗೋಪಾಲಕೃಷ್ಣ ಬೇಳೂರು ಮತ್ತು ಅವರ ಬೆಂಬಲಿಗರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಸಾಗರ ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಹಿನ್ನೆಲೆಯಲ್ಲಿ ಅವರ ಅವರ ಬೆಂಬಲಿಗರಾದ ಗಣೇಶ್ ಡಿ, ಗೌರೀಶ್ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 171 ಹೆಚ್, 188 ಮತ್ತು ಭಾರತೀಯ ಮೋಟಾರು ವಾಹನಗಳ ಕಾಯ್ದೆ ಸೆಕ್ಷೆನ್ 171 ಪ್ರಕಾರ ಪ್ರಕರಣ ದಾಖಲಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶರು ಸೂಕ್ತ ಸಾಕ್ಷಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ ಪ್ರಕರಣ ರುಜುವಾತಾಗದ ಕಾರಣ ಅರೋಪಿಗಳನ್ನು ದೋಷಮುಕ್ತಗೊಳಿಸಿರುತ್ತಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.