ಸ್ವಾತಂತ್ರ್ಯ ದಿನಾಚರಣೆ ಪೆರೇಡ್ ಮೈದಾನದಲ್ಲಿ
ಕ.ಪ್ರ.ವಾರ್ತೆ, ಶಿವಮೊಗ್ಗ, ಜು.24
ನಗರದ ನೆಹರೂ ಕ್ರೀಡಾಂಗಣದಲ್ಲಿ ಸಿಂಥೆಟಿಕ್ ಟ್ರ್ಯಾಕ್ ಅಳವಡಿಸುವ ಕಾರ್ಯ ಪ್ರಗತಿಯಲ್ಲಿರುವುದರಿಂದ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯನ್ನು ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು, ನೆಹರು ಕ್ರೀಡಾಂಗಣದಲ್ಲಿ ಭಾರಿ ವೆಚ್ಚದಲ್ಲಿ ಸಿಂಥೆಟಿಕ್ ಟ್ರ್ಯಾಕ್ ಅಳವಡಿಸುವುದರಿಂದ ಅದು ಹಾಳಾಗದಂತೆ ಉತ್ತಮ ರೀತಿಯಲ್ಲಿ ಬಳಸಿಕೊಳ್ಳಬೇಕಾಗಿದೆ ಎಂದರು.
ಸಾರ್ವಜನಿಕ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಲಾಗುವುದಿಲ್ಲ. ಆದ್ದರಿಂದ ಪ್ರತಿವರ್ಷ ನಡೆಸಲಾಗುತ್ತಿದ್ದ ರಾಷ್ಟ್ರೀಯ ಹಬ್ಬಗಳನ್ನು ಇನ್ನು ಮುಂದಿನ ವರ್ಷಗಳಲ್ಲಿ ಪರ್ಯಾಯ ಮೈದಾನವನ್ನು ಗುರುತಿಸಿಕೊಳ್ಳಬೇಕಾದ ಅಗತ್ಯವಿದೆ ಎಂದ ಅವರು, ಪ್ರಸಕ್ತ ಸಾಲಿನ ನವೆಂಬರ್ ಮಾಹೆಯ ನಂತರ ಎಲ್ಲಾ ಕಾರ್ಯಕ್ರಮಗಳನ್ನು ನಗರದ ಸಹ್ಯಾದ್ರಿ ಕಾಲೇಜಿನ ಮೈದಾನದಲ್ಲಿ ನಡೆಸಲಾಗುವುದು ಎಂದರು.
ಉಪಸಮಿತಿ ರಚನೆ: ಜಿಲ್ಲಾಡಳಿತ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿಯಾಗಿ ನಡೆಸಲು ಉದ್ದೇಶಿಸಿರುವ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿ ವರ್ಗದವರು ತಮ್ಮ ಜವಾಬ್ದಾರಿಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಬೇಕು. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಡೆಸುವ ಎಲ್ಲಾ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವ ಸಂಬಂಧ ವಿವಿಧ ಉಪಸಮಿತಿಗಳನ್ನು ರಚಿಸಿರುವುದಾಗಿ ಅವರು ತಿಳಿಸಿದರು.
ಪಥಸಂಚಲನ: ಪಥಸಂಚಲನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸರ್ಕಾರಿ ಶಾಲೆಗಳ ಶೇ. 50ರಷ್ಟು ವಿದ್ಯಾರ್ಥಿಗಳು ಭಾಗವಹಿಸುವಂತೆ ನೋಡಿಕೊಳ್ಳಬೇಕು. ನಡೆಯುವ ಎಲ್ಲಾ ಕಾರ್ಯಕ್ರಮಗಳು ಗುಣಮಟ್ಟದ್ದಾಗಿರಬೇಕು.
ಆದ್ದರಿಂದ ಹೆಚ್ಚುವರಿ ಪೊಲೀಸ್ ರಕ್ಷಣಾಧಿಕಾರಿಗಳು ಹಾಗೂ ಎನ್ಸಿಸಿ ಅಧಿಕಾರಿಗಳ ಉಪಸ್ಥಿತಿಯಲ್ಲಿ ಪಥಸಂಚಲನದ ಪೂರ್ವ ವೀಕ್ಷಣೆ ನಡೆಸಿ, ಆಕರ್ಷಕ ಪ್ರದರ್ಶನ ನೀಡುವ ಉತ್ತಮವಾದ 15 ತಂಡಗಳನ್ನು ಆಯ್ಕೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕಾರ್ಯಕ್ರಮಕ್ಕೆ ಗಣ್ಯರ ಆಹ್ವಾನ, ನಗರದಲ್ಲಿ ದೀಪಾಲಂಕಾರ, ನಗರದ ಸಿಂಗಾರ, ಶಾಲಾ ಮಕ್ಕಳಿಗೆ ಸಿಹಿ, ಪೊಲೀಸ್ಹಾಗೂ ಶಾಲಾ ಮಕ್ಕಳಿಂದ ಕವಾಯತು, ಸಂಜೆ ಕುವೆಂಪು ರಂಗಮಂದಿರದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೌಶಲೇಂದ್ರ ಕುಮಾರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಸಿಕಾಂತ್ ಸೆಂಥಿಲ್, ಅಪರ ಜಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ, ಹೆಚ್ಚುವರಿ ರಕ್ಷಣಾಧಿಕಾರಿ ದಯಾಳು, ಉಪವಿಭಾಗಾಧಿಕಾರಿ ಕುಸುಮಾಕುಮಾರಿ, ನಗರಸಭಾ ಪೌರಾಯುಕ್ತ ಎಂ. ಕರಭೀಮಣ್ಣನವರ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ಗಣ್ಯರು ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

