ಮಾತು ಮರೆತಿರುವ ಕಾಗೋಡು: ಬೇಳೂರು
ಕ.ಪ್ರ.ವಾರ್ತೆ ಸಾಗರ ಜು.26
ಚುನಾವಣೆಗಿಂತ ಮೊದಲು ಸಭೆ ಸಮಾರಂಭಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರಿಗೆ ಬಗರ್‌ಹುಕುಂ ಹಕ್ಕುಪತ್ರ ಕೊಡುತ್ತೇವೆ ಎಂದು ಹೇಳಿದ್ದ ಕಾಗೋಡು ತಿಮ್ಮಪ್ಪನವರಿಗೆ ಬಹುಶ- ತಮ್ಮ ಮಾತು ಮರೆತು ಹೋಗಿರಬೇಕು ಎಂದು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪಿಸಿದರು.
ಇಲ್ಲಿನ ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಬಗರ್‌ಹುಕುಂ ಸಾಗುವಳಿ ಹಕ್ಕುಪತ್ರ ವಿತರಣೆ ವಿಳಂಬ ಕುರಿತು ಉಪವಿಭಾಗಾಧಿಕಾರಿಗಳನ್ನು ಭೇಟಿ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿ, ಹಕ್ಕುಪತ್ರ ನೀಡುವುದಾಗಿ ಭರವಸೆ ಕೊಟ್ಟು ಅಧಿಕಾರಕ್ಕೆ ಬಂದಿರುವ ಕಾಗೋಡು ತಿಮ್ಮಪ್ಪನವರು ಮುಂದಿನ 15ದಿನಗಳೊಳಗೆ ಹಕ್ಕುಪತ್ರ ನೀಡದಿದ್ದಲ್ಲಿ ತಾಲೂಕು ಕಚೇರಿ ಎದುರು ನೊಂದ ಸಾಗುವಳಿದಾರರ ಜೊತೆಗೆ ಅಮರಣಾಂತ ಉಪವಾಸ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ನಾನು ಈ ಹಿಂದೆ ಶಾಸಕನಾಗಿದ್ದಾಗ ಹಕ್ಕುಪತ್ರ ವಿತರಿಸಲು ಸಿದ್ಧಗೊಳಿಸಿದ್ದ ಪಟ್ಟಿಯನ್ನು ಹಾಗೆಯೇ ಇಡಲು ಕಾರಣವೇನು ಎಂದು ಪ್ರಶ್ನಿಸಿದ ಅವರು, ಕಳೆದ ಐದು ವರ್ಷಗಳಲ್ಲಿ ಕಾಂಗ್ರೆಸ್ ಮುಖಂಡರು ಇಂಡೀಕರಣ ಮತ್ತು ಬಗರ್‌ಹುಕುಂ, ಅರಣ್ಯಭೂಮಿ ಹಕ್ಕು ಕಾಯ್ದೆ ಸಮಸ್ಯೆಯನ್ನೇ ಪ್ರಮುಖವಾಗಿ ಬಿಂಬಿಸಿ ರಾಜಕೀಯ ಲಾಭ ಪಡೆದುಕೊಂಡಿದ್ದಾರೆ ಎಂದರು.
ಸರ್ಕಾರ ಕ್ರಮ ಕೈಗೊಳ್ಳಲಿ: ಬಗರ್‌ಹುಕುಂ ಹಾಗೂ ಇಂಡೀಕರಣ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಜೆಡಿಎಸ್ ವತಿಯಿಂದ ತಾಲೂಕಿನ ಆನಂದಪುರಂನಿಂದ ಸಾಗರ ನಗರದವರೆಗೆ ಶೀಘ್ರದಲ್ಲೇ ಪಾದಯಾತ್ರೆ ನಡೆಸಲಾಗುವುದು ಎಂದು ತಿಳಿಸಿದ ಬೇಳೂರು, ಇಂಡೀಕರಣ ಸಮಸ್ಯೆ ಅತ್ಯಂತ ಗಂಭೀರವಾಗಿದ್ದು ರಾಜ್ಯ ಸರ್ಕಾರ ಈ ಕಾಯ್ದೆಯನ್ನು ರದ್ದುಪಡಿಸುವ ನಿಟ್ಟಿನಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ತುಮರಿ ಸೇತುವೆಗೆ ಹಣ ಬಿಡುಗಡೆ ಮಾಡಿ: ಬಜೆಟ್ಟಿನಲ್ಲಿ ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗೆ ಯಾವುದೆ ಹಣ ಮೀಸಲಿಟ್ಟಿಲ್ಲ. ಇದು ಜಿಲ್ಲೆಯ ಜನತೆಗೆ ಕಾಂಗ್ರೆಸ್ ಮಾಡಿರುವ ಅನ್ಯಾಯವಾಗಿದೆ. ಬಿ.ಎಸ್. ಯಡಿಯೂರಪ್ಪ, ಕೆ.ಎಸ್. ಈಶ್ವರಪ್ಪ ತುಮರಿ ಸೇತುವೆಯ ಘೋಷಣೆ ಮಾಡಿ ಹಣ ಬಿಡುಗಡೆ ಮಾಡದೆ ಕಾಲಕಳೆದರು. ಕಾಗೋಡು ತಿಮ್ಮಪ್ಪನವರು ಪ್ರಭಾವಿ ಸ್ಥಾನದಲ್ಲಿದ್ದು ಸರ್ಕಾರದ ಮೇಲೆ ಒತ್ತಡ ಹೇರಿ ಕೂಡಲೆ ಹಣ ಬಿಡುಗಡೆ ಆಗುವಂತೆ ಮಾಡಬೇಕು ಎಂದು ಒತ್ತಾಯಿಸಿದರು. ಸಾಗರ ನಗರಕ್ಕೆ ನೂತನ ಪದವಿ ಕಾಲೇಜು ಮಂಜೂರು ಆಗಿರುವುದು ಸ್ವಾಗತಾರ್ಹ. ಈ ಬಗ್ಗೆ ನಾನು ಕಾಗೋಡು ತಿಮ್ಮಪ್ಪ ಅವರನ್ನು ಅಭಿನಂದಿಸುತ್ತೇನೆ. ನಾನು ಶಾಸಕನಾಗಿದ್ದ ಅವಧಿಯಲ್ಲಿ ಈ ಪ್ರಸ್ತಾಪವಾಗಿದ್ದು ಕೆ.ಎಚ್. ಶ್ರೀನಿವಾಸ್ ಹಾಗೂ ಬಿ.ಎಸ್. ಯಡಿಯೂರಪ್ಪ ಅವರು ಅಡ್ಡಗಾಲು ಹಾಕಿದ ಕಾರಣ ಕಳೆದ ಸಾಲಿನಲ್ಲೆ ಆಗುವುದು ತಪ್ಪಿತು ಎಂದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ಇಚ್ಚೆ ಹೊಂದಿದ್ದೇನೆ. ಪಕ್ಷ ಅವಕಾಶ ನೀಡಿದರೆ ಕಣಕ್ಕೆ ಇಳಿಯಲು ಸಿದ್ಧ ಎಂದು ತಿಳಿಸಿದರು.
ತಾಪಂ ಮಾಜಿ ಸದಸ್ಯ ಚಂದ್ರಶೇಖರ ಅದರಂತೆ, ಕಲಸೆ ಚಂದ್ರಪ್ಪ, ಆರ್.ಸಿ. ಮಂಜಪ್ಪ, ಮಂಡಗಳಲೆ ಗಣಪತಿ, ಸ್ವಾಮಿರಾವ್ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

