ಮೂಲ ಸೌಕರ್ಯಕ್ಕೆ ಕೈಗಾರಿಕೋದ್ಯಮಿಗಳ ಆಗ್ರಹ
ಕ.ಪ್ರ.ವಾರ್ತೆ ಶಿವಮೊಗ್ಗ ಜು.29
ಕಲ್ಲೂರು ಕೈಗಾರಿಕಾ ವಸಾಹತು ಪ್ರದೇಶಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಕಲ್ಲೂರು ಕೈಗಾರಿಕಾ ವಸಾಹತು ಪ್ರದೇಶದ ಕೈಗಾರಿಕೋದ್ಯಮಿಗಳ ತಂಡ ಜಿಲ್ಲಾಡಳಿತವನ್ನು ಆಗ್ರಹಿಸಿದೆ.
ಸೋಮವಾರ ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿದ ಕೈಗಾರಿಕೋದ್ಯಮಿಗಳ ತಂಡ, ಬೇಡಿಕೆಗಳ ಅಗತ್ಯತೆಯನ್ನು ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿತು.
ಕಲ್ಲೂರು ಕೈಗಾರಿಕಾ ವಸಾಹತು ಪ್ರದೇಶದಲ್ಲಿನ ಕೈಗಾರಿಕೆಗಳಿಂದ ಸರ್ಕಾರಕ್ಕೆ ವಾರ್ಷಿಕ 20 ಕೋಟಿಗೂ ಅಧಿಕ ತೆರಿಗೆ ಸಂದಾಯವಾಗುತ್ತಿದೆ. ಇಲ್ಲಿ ಪೇಪರ್ ಪ್ಯಾಕೇಜ್ ಕೈಗಾರಿಕೆ ಸೇರಿದಂತೆ ಹಲವು ಕೈಗಾರಿಕೆಗಳು ಕಾರ್ಯ ನಿರ್ವಹಿಸುತ್ತಿದ್ದು, ಸಾವಿರಾರು ಜನಕ್ಕೆ ಕೆಲಸ ನೀಡಲಾಗಿದೆ. ಆದರೂ ಇಲ್ಲಿ ಯಾವುದೇ ಮೂಲಭೂತ ಸೌಕರ್ಯಗಳು ಇಲ್ಲ ಎಂದು ದೂರಿದರು.
ಜಿಲ್ಲಾಡಳಿತ ಸ್ಪಂದಿಸಿಲ್ಲ: ಕೈಗಾರಿಕೆಗಳು ಅಭಿವೃದ್ಧಿಯಾಗಬೇಕಾದಲ್ಲಿ ಅಲ್ಲಿ ರಸ್ತೆ, ವಿದ್ಯುತ್, ನೀರು ಮುಂತಾದ ಮೂಲಭೂತ ಸೌಕರ್ಯ ಕಲ್ಪಿಸಬೇಕಾಗುತ್ತದೆ. ಆದರೆ, ಈ ಬಗ್ಗೆ ಹಿಂದಿನಿಂದ ಒತ್ತಾಯಿಸುತ್ತಾ ಬಂದಿದ್ದರೂ ಜಿಲ್ಲಾಡಳಿತ ಸ್ಪಂದಿಸಿಲ್ಲ. ಇಲ್ಲಿನ ರಸ್ತೆಗಳು ಸಂಪೂರ್ಣ ಕೆಸರುಮಯವಾಗಿದ್ದು, ಪಾದಚಾರಿಗಳು ಸಂಚರಿಸುವುದೂ ಕಷ್ಟವಾಗಿದೆ. ಲಾರಿ ಮತ್ತಿತರೆ ವಾಹನಗಳು ಬಂದರೆ ಕೆಸರಿನಲ್ಲಿ ಹೂತುಹೋಗುತ್ತವೆ ಎಂದು ಉದ್ಯಮಿಗಳು ಜಿಲ್ಲಾಧಿಕಾರಿಗಳಿಗೆ ವಿವರಿಸಿದರು.
ಈ ಹಿಂದೆ ಇಲ್ಲಿನ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿ ಮತ್ತು ನಗರಸಭೆ 50-50ರ ಅನುಪಾತದಲ್ಲಿ ಹಣ ಹೂಡಿಕೆ ಮಾಡಿ ರಸ್ತೆ ಅಭಿವೃದ್ಧಿ ಪಡಿಸಲು ಯೋಜಿಸಲಾಗಿತ್ತು. ಆದರೆ, ಈ ಯೋಜನೆ ಈವರೆಗೂ ಅನುಷ್ಠಾನಗೊಂಡಿಲ್ಲ ಎಂದು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
ಉದ್ಯಮಿಗಳ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ವಿಪುಲ್ ಬನ್ಸಲ್, ಕೂಡಲೇ ಈ ಬಗ್ಗೆ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದರಲ್ಲದೆ, ನಗರಸಭೆ ಆಯುಕ್ತರಿಗೆ ರಸ್ತೆ ಅಭಿವೃದ್ಧಿಪಡಿಸುವಂತೆ ಸೂಚಿಸಿದರು. ನಗರಸಭೆ ಆಯುಕ್ತ ಎಂ. ಕರಭೀಮಣ್ಣನವರ್ ನಾಳೆ ಕೈಗಾರಿಕಾ ವಸಾಹತು ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸುವ ಭರವಸೆ ನೀಡಿದ್ದಾರೆ. ನಿಯೋಗದಲ್ಲಿ ಕಲ್ಲೂರು ಕೈಗಾರಿಕಾ ವಸಾಹತು ಪ್ರದೇಶದ ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ರಾಜಶೇಖರ್, ಪ್ರಮುಖರಾದ ಶ್ರೀನಿವಾಸ್, ನಾಯಕ್, ಡಿ.ಎಸ್. ಅರುಣ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

