ಸದ್ಯದಲ್ಲೇ ಅಧ್ಯಕ್ಷರ ನೇಮಕ ಸಾಧ್ಯತೆ
ಕ.ಪ್ರ.ವಾರ್ತೆ, ಶಿವಮೊಗ್ಗ, ಜೂ.1
ಕಳೆದ ಡಿಸೆಂಬರ್ 2ರಿಂದ ರಾಜ್ಯ ಮಾನವ ಹಕ್ಕುಗಳ ಆಯೋಗ ರಚನೆಯಾಗಿದ್ದು, ಅಧ್ಯಕ್ಷರ ನೇಮಕ ಆಗಬೇಕಿದೆ. ಈ ಸಂಬಂಧವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸುವುದಾಗಿ ಆಯೋಗದ ಸದಸ್ಯ, ನ್ಯಾಯಮೂರ್ತಿ ಸಿ.ಜೆ. ಹುನಗುಂದ ತಿಳಿಸಿದರು.
ಮಾನವ ಹಕ್ಕುಗಳ ಉಲ್ಲಂಘನೆ ಕುರಿತು ಜಿಲ್ಲಾ ಮೆಗ್ಗಾನ್ ಆಸ್ಪತ್ರೆ, ಕಾರಾಗೃಹ, ಬಾಲಮಂದಿರಗಳಿಗೆ ಭೇಟಿ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧ್ಯಕ್ಷರ ನೇಮಕವಾಗಿದ್ದರೆ ಮತ್ತಷ್ಟು ಕೆಲಸ ಕಾರ್ಯಗಳು ಸುವ್ಯವಸ್ಥಿತವಾಗಿ ನಡೆಯುತ್ತಿದ್ದವು. ಆದರೂ ಆಯೋಗದ ಸದಸ್ಯರೇ ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲಾಗುತ್ತಿದೆ ಎಂದರು.
ಆಯೋಗಕ್ಕೆ ಬಂದ ದೂರುಗಳ ಆಧಾರದ ಮೇಲೆ ಆಸ್ಪತ್ರೆಗೆ ಭೇಟಿ ನೀಡಿದ್ದು, ಎಸ್.ಆರ್. ನಾಯಕ್ ಅವರು ಬಂದ ನಂತರ ಆಯೋಗ ಜಿಲ್ಲೆಗೆ ಭೇಟಿ ನೀಡಿರಲಿಲ್ಲ ಆದರಿಂದ ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಲಾಗಿದೆ ಎಂದರಲ್ಲದೇ, ಆವರಣದಲ್ಲಿ ಆಸ್ಪತ್ರೆಯ ಹೊಸ ಕಟ್ಟದ ನಿರ್ಮಾಣವಾಗುತ್ತಿದೆ. ಇಲ್ಲಿ ಸಾಕಷ್ಟು ನೀರಿನ ವ್ಯವಸ್ಥೆ ಇದ್ದು, ಸಾಮಾನ್ಯವಾಗಿ ನೀರು ಸಮರ್ಪಕವಾಗಿ ಇದ್ದರೆ ಸ್ವಚ್ಛತೆ ಇರುತ್ತದೆ ಎಂದರು.
ಸರ್ಕಾರದೊಂದಿಗೆ ಮಾತಕತೆ: ಆಸ್ಪತ್ರೆಯಲ್ಲಿ ಉತ್ತಮ ವಾತಾವರಣವಿದ್ದು, ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡಲು ರೋಗಿಗಳನ್ನು ನೋಡಿಕೊಳ್ಳಲು ಬರುವ ಕುಟುಂಬ ಸದಸ್ಯರು ಊಟ ಮಾಡಲು ಸೂಕ್ತ ರೀತಿಯ ವ್ಯವಸ್ಥೆ ಕಲ್ಪಿಸಲು ಆಸ್ಪತ್ರೆ ಅಧೀಕ್ಷಕರಿಗೆ ತಿಳಿಸಲಾಗಿದೆ. ಸದ್ಯ ಆಸ್ಪತ್ರೆಯಲ್ಲಿ ನರ್ಸ್ಗಳ ಕೊರತೆ ಇದ್ದು, ಈ ಸಂಬಂಧವಾಗಿ ಸರ್ಕಾರದೊಂದಿಗೆ ಮಾತಕತೆ ನಡೆಸಲಾಗುವುದು ಎಂದರು.
ಈ ವೇಳೆ ಆಯೋಗದ ರಿಜಿಸ್ಟ್ರಾರ್ ಮಲ್ಲೇಶ್, ಆಸ್ಪತ್ರೆಯ ಅಧೀಕ್ಷಕ ಲೇಪಾಕ್ಷಿ, ಜಿಎಚ್ಓ ಶಿವಣ್ಣರೆಡ್ಡಿ ಮತ್ತಿತರರು ಇದ್ದರು.
ಮಾನವೀಯ ದೃಷ್ಟಿ ಇರಲಿ...
ತಮ್ಮ ಕರ್ತವ್ಯದಲ್ಲಿ ಮಾನವೀಯ ದೃಷ್ಟಿಕೋನವಿದ್ದರೆ ಮಾನವ ಹಕ್ಕುಗಳ ಉಲ್ಲಂಘನೆ ಆಗುವುದಿಲ್ಲ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಮಾನವೀಯ ದೃಷ್ಟಿಕೋನದಿಂದ ಕೆಲಸ ನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ನ್ಯಾ. ಸಿ.ಜಿ. ಹುನಗುಂದ ಕಿವಿಮಾತು ಹೇಳಿದರು.
ಜಿಲ್ಲೆಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಗೆ ಸಂಬಂಧಿಸಿದಂತೆ ಶನಿವಾರ ಜಿಲ್ಲಾಡಳಿತದೊಂದಿಗೆ ಸಭೆ ನಡೆಸಿದ ಅವರು,
ಪ್ರಮುಖವಾಗಿ ಪೊಲೀಸ್ ಇಲಾಖೆಯಲ್ಲಿ ಹೆಚ್ಚಿನ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿರುವುದು ಕಂಡು ಬಂದಿದೆ. ಇದು ಆಗಬಾರದು. ಜನಸಾಮಾನ್ಯರೊಂದಿಗೆ ನಡೆಸುವ ಪೊಲೀಸ್ ದೌರ್ಜನ್ಯಗಳು ನಿಲ್ಲಬೇಕು ಎಂದು ಸೂಚಿಸಿದರು.
ನಾಗರಿಕ ಸೌಲಭ್ಯಗಳಾದ ಒಳಚರಂಡಿ ವ್ಯವಸ್ಥೆ, ಪರಿಸರ ಮಾಲಿನ್ಯ ನಿಯಂತ್ರಣ, ಸಾಮಾಜಿಕ ಭದ್ರತೆ ಸೌಲಭ್ಯಗಳ ವಿತರಣೆ, ಸಾಂಕ್ರಾಮಿಕ ರೋಗಗಳನ್ನು ತಡೆಯುವುದು, ಶಿಕ್ಷಣ ವ್ಯವಸ್ಥೆ ಸೇರಿದಂತೆ ವಿವಿಧ ವಿಷಯಗಳು ಮಾನವ ಹಕ್ಕು ವ್ಯಾಪ್ತಿಗೆ ಬರಲಿದ್ದು ಈ ವಿಷಯಗಳಲ್ಲಿ ಅಧಿಕಾರಿ ವರ್ಗ ಹೆಚ್ಚಿನ ಆಸಕ್ತಿ ತೋರಬೇಕು ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ವಿಪುಲ್ ಬನ್ಸಲ್, ಸಿಇಓ ಸಸಿಕಾಂತ್ ಸೆಂಥಿಲ್, ರಾಜ್ಯ ಮಾನವ ಹಕ್ಕುಗಳ ಆಯೋಗದ ರಿಜಿಸ್ಟ್ರಾರ್ ಮಲ್ಲೇಶ್, ಅಪರ ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

