ಶಿವಮೊಗ್ಗ

ಗೋರಕ್‌ಸಿಂಗ್ ವರದಿ ಅನುಷ್ಠಾನಕ್ಕೆ ಒತ್ತಾಯ

Published On :

ಕ.ಪ್ರ. ವಾರ್ತೆ  ಶಿವಮೊಗ್ಗ  ಜೂ.20
ರಾಜ್ಯಾದ್ಯಂತ ಗೋರಕ್‌ಸಿಂಗ್ ವರದಿ ಅನುಷ್ಠಾನ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ರಾಜ್ಯ ಸರ್ಕಾರವನ್ನು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಅಡಕೆ ಬೆಳೆಗಾರರ ಸಂಘ ಗುರುವಾರ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಮನವಿ ಮಾಡಿದೆ.
ಜಿಲ್ಲೆ ಸೇರಿದಂತೆ ರಾಜ್ಯದ ಅಡಕೆ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಅದರಲ್ಲೂ ಮಲೆನಾಡು ಪ್ರದೇಶಗಳಾದ ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಹಳದಿ, ಕೊಳೆರೋಗ ಸೇರಿದಂತೆ ಹಲವು ರೋಗಗಳಿಗೆ ತುತ್ತಾಗಿ ಅಡಕೆ ಬೆಳೆ ನಾಶವಾಗಿದೆ.
ಈ ಹಿನ್ನೆಲೆಯಲ್ಲಿ ಗೋರಕ್‌ಸಿಂಗ್ ಸಮಿತಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಆದರೆ, ಸರ್ಕಾರ ಇದುವರೆಗೆ ಯಾವುದೇ ಕ್ರಮಕೈಗೊಳ್ಳದೆ ಬೆಳೆಗಾರರಿಗೆ ಅನ್ಯಾಯ ಮಾಡಿದೆ ಎಂದು ಮನವಿಯಲ್ಲಿ ದೂರಿದ್ದಾರೆ.
ನೆರವಿಗೆ ಧಾವಿಸಲಿ: ಅಲ್ಲದೇ, ರಾಜ್ಯ ಸರ್ಕಾರ ಗುಟ್ಕಾ ನಿಷೇಧ ಮಾಡಿದೆ. ಇದರಿಂದ ಅಡಕೆ ಧಾರಣೆ ದಿನದಿಂದ ಕುಸಿಯುತ್ತಿದೆ. ಅಡಕೆ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಗೋರಕ್ ಸಿಂಗ್ ವರದಿ ಅನುಷ್ಠಾನಗೊಳ್ಳುವುದರಿಂದ ಅಡಕೆ ಬೆಳೆಗಾರರಿಗೆ ಅನುಕೂಲವಾಗುತ್ತದೆ. ಈ ಸಂಬಂಧ ರಾಜ್ಯ ಸರ್ಕಾರ ಅಡಕೆ ಬೆಳೆಗಾರರ ನೆರವಿಗೆ ಧಾಮಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದೆ.
ಅಡಕೆ ಬೆಳೆಗಾರರು ರಾಷ್ಟ್ರೀಕೃತ ಬ್ಯಾಂಕ್ ಮತ್ತು ಸಹಕಾರ ಸಂಘಗಳಲ್ಲಿ ಮಾಡಿರುವ ಸಾಲದ ಬಗ್ಗೆ ಮಾಹಿತಿ ಪಡೆದು ಬೆಳೆಗಾರರ ಸಾಲ ಮನ್ನಾ ಮಾಡಲು ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿ ತೀರ್ಮಾನ ಮಾಡಬೇಕು ಎಂದು ಸಂಘದ ಸದಸ್ಯರು ಆಗ್ರಹಿಸಿದ್ದಾರೆ.
ಈ ವೇಳೆ ಸಂಘದ ಜಿಲ್ಲಾಧ್ಯಕ್ಷ ಬಿ.ಎ. ರಮೇಶ್ ಹೆಗಡೆ, ಶಾಸಕ ಕೆ.ಬಿ. ಪ್ರಸನ್ನಕುಮಾರ್, ಜಿ. ಪಂ. ಸದಸ್ಯ ಕಲಗೋಡು ರತ್ನಾಕರ್, ಪದ್ಮನಾಭ, ಜಿ.ಪಿ. ಯೋಗೀಶ್, ವಾಸಪ್ಪಗೌಡ, ಡಿ.ವಿ. ರಮೇಶ್, ಎನ್.ಎಸ್. ಮಂಜುನಾಥ್ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.