ವರ್ಗಾವಣೆ ನೀತಿ ಜಾರಿಗೆ ಬರಲಿ
ಕ.ಪ್ರ.ವಾರ್ತೆ ಶಿವಮೊಗ್ಗ ಜೂ.20
ರಾಜ್ಯದಲ್ಲಿ ಸಂಪೂರ್ಣವಾಗಿ ಭ್ರಷ್ಟಚಾರ ಕಡಿಮೆಯಾಗಬೇಕಾದರೆ ವರ್ಗಾವಣೆ ನೀತಿ ಜಾರಿಗೆ ತರಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಲ್. ಭೈರಪ್ಪ ಸರ್ಕಾರವನ್ನು ಒತ್ತಾಯಿಸಿದರು.
ರಾಜ್ಯ ಸರ್ಕಾರಿ ನೌಕರರ ಸಂಘ ನಗರದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಸರ್ಕಾರಿ ನೌಕರರ ಭವನ ಉದ್ಘಾಟನೆ ಸಮಾರಂಭ ಮತ್ತು ಜಿಲ್ಲಾ ಸಮ್ಮೇಳನದಲ್ಲಿ ಪಾಲ್ಗೊಂಡು ಅವರು, ಕೌನ್ಸೆಲಿಂಗ್ ಪದ್ಧತಿಯಿಂದ ರಾಜ್ಯದಲ್ಲಿ ಈಗಾಗಲೇ ಶೇ.50ರಷ್ಟು ಭ್ರಷ್ಟಾಚಾರ ಕಡಿಮೆಯಾಗಿದೆ. ಇದು ಸಂಪೂರ್ಣವಾಗಿ ಆಳಿಸಿ ಹೋಗಬೇಕಾದರೆ ಮಾರ್ಗಸೂಚಿಗಳು ಕಾಯ್ದೆಯಾಗಿ ಜಾರಿಗೆ ತರಬೇಕು ಎಂದರು.
260 ಸೇವೆ: ರಾಜ್ಯಾದ್ಯಂತ ವಿವಿಧ ಇಲಾಖೆಗಳಲ್ಲಿ 5.66 ಲಕ್ಷ ಸರ್ಕಾರಿ ನೌಕರರ ಕೆಲಸ ಮಾಡುತ್ತಿದ್ದಾರೆ. ಇವರಿಗೆ ಸಕಾಲದಲ್ಲಿ ಬರುವ 260 ಸೇವೆಗಳನ್ನು ನಿಗದಿತ ಸಮಯದಲ್ಲಿ ಕೆಲಸ ಮಾಡಿಕೊಡಲು ಕಷ್ಟವಾಗುತ್ತಿದೆ.
ಆದರಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಜನಸಂಖ್ಯೆಗೆ ಅನುಗುಣವಾಗಿ ನೌಕರರನ್ನು ನೇಮಕ ಮಾಡಿಕೊಂಡು, ಖಾಲಿ ಇರುವ ಹುದ್ದೆಗಳನ್ನು ಹಂತ- ಹಂತವಾಗಿ ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು.
ಪರಿಷ್ಕರಣೆ: ನಮ್ಮ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುವುದು ಆದ್ಯ ಕರ್ತವ್ಯ. ಕಳೆದ ಸರ್ಕಾರ 5-6ನೇ ವೇತನ ಆಯೋಗವನ್ನು ಪರಿಷ್ಕರಣೆ ಮಾಡಿ ಇದೀಗ ವೇತನ ನೀಡುತ್ತಿದ್ದಾರೆ. ಆದರೆ, ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ರಾಜ್ಯದ ನೌಕರರು ಕಡಿಮೆ ಸಂಬಳ ಪಡೆಯುತ್ತಿದ್ದಾರೆ. ಕೇಂದ್ರ ಸರ್ಕಾರದ ನೌಕರರಿಗೆ ನೀಡುತ್ತಿರುವ ವೇತನ ಭತ್ಯೆಗಳನ್ನು ರಾಜ್ಯ ಸರ್ಕಾರದವರಿಗೂ ನೀಡಬೇಕು ಎಂದರು.
ನಗದು ರಹಿತ ಸೇವೆ: ರಾಜ್ಯದ ನೌಕರರು ಕೌಟುಂಬಿಕ ಮತ್ತು ಕೆಲಸದ ಒತ್ತಡಗಳಿಂದ ಬಹಳಷ್ಟು ರೋಗಗಳಿಗೆ ತುತ್ತಾಗುತ್ತಿದ್ದಾರೆ. ಆದರಿಂದ ಒಳ ರೋಗಿಗಳಾಗಿ ವೆಚ್ಚ ಮಾಡುವ ಹಣವನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸಬೇಕು.
ನಗದು ರಹಿತ ಸೇವೆಯನ್ನು ಸರ್ಕಾರಿ, ಖಾಸಗಿ ಆಸ್ಪತ್ರೆಯಲ್ಲಿಯೂ ದೊರೆಯುವಂತೆ ನೋಡಿಕೊಳ್ಳಬೇಕು ಎಂದ ಅವರು, ಕೇಂದ್ರ ಸರ್ಕಾರದ ಸಿಜಿಎಚ್‌ಎಸ್ ಯೋಜನೆಯನ್ನು ರಾಜ್ಯದ ನೌಕರರಿಗೂಜಾರಿಗೆ ತರಬೇಕು ಎಂದು ಆಗ್ರಹಿಸಿದರು.
ಸಮಸ್ಯೆ ಬಗೆಹರಿಸಬೇಕು: ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ನೌಕರರಲ್ಲಿ ವಸತಿ ಭತ್ಯೆಗೆ ಸಂಬಂದಿಸಿದಂತೆ ತಾರತಮ್ಯ ಮಾಡಲಾಗುತ್ತಿದೆ ಎಂದರಲ್ಲದೇ, ಇದೀಗ ಕೇಂದ್ರ ಮತ್ತು ರಾಜ್ಯ ಸರ್ಕಾರದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿ ಇರುವುದರಿಂದ ನಮ್ಮ ಸಮಸ್ಯೆ ಬಗೆಹರಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಶಿವಮೊಗ್ಗ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಮಾತನಾಡಿ, ನಗರವನ್ನು ಮಾದರಿ ನಗರವನ್ನಾಗಿ ಮಾಡಲು ನಾನು ಸಿದ್ದನಿದ್ದೇನೆ. ಅದಕ್ಕೆ ಸರ್ಕಾರಿ ನೌಕರರು ಸಹಕರಿಸಬೇಕು. ನೌಕರರು ಶುದ್ಧ ಹಸ್ತರಾಗಿ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವುದರೊಂದಿಗೆ ಸರ್ಕಾರದ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಸಹಕರಿಸಬೇಕು ಎಂದರು.
ಭದ್ರಾವತಿ ಶಾಸಕ ಎಂ.ಜೆ. ಅಪ್ಪಾಜಿ ಮಾತನಾಡಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರೆಂದರೆ ಹಣ ಪಡೆಯದೆ ಯಾಮೊಬ್ಬ ರೋಗಿಯನ್ನು ನೋಡುವುದಿಲ್ಲ ಎಂಬು ಮಾತುಗಳು ಕೇಳಿ ಬರುತ್ತಿವೆ. ಇದನ್ನು ಸುಳ್ಳಾಗಿಸಬೇಕು. ಅಲ್ಲದೇ ಸರ್ಕಾರಿ ನೌಕರರೆಂದರೆ ಲಂಚ ಪಡೆಯುವವರು ಎಂಬ ಹಣೆ ಪಟ್ಟೆ ಇದೆ. ಇದನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಕಡಿಮೆ ಸಂಬಳ ಪಡೆಯುತ್ತಿರುವದು ಎಲ್ಲರಿಗೂ ತಿಳಿದ ವಿಚಾರ. ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ನೀಡುತ್ತಿರುವ ಸಂಬಳನ್ನು ಕೂಡ ಕೆಲ ಶಿಕ್ಷಕರು ಪಡೆಯುತ್ತಿಲ್ಲ.ನಿಜವಾಗಿಯೂ ಉತ್ತಮ ಶಿಕ್ಷಣ ದೊರೆಯುತ್ತಿರುವುದು ಸರ್ಕಾರಿ ಶಾಲೆಗಳಲ್ಲೇ ಎಂದು ವಿಷಾದಿಸಿದ ಅವರು, ಈ ಕಟ್ಟಡಕ್ಕೆ ಶಾಸಕರ ಅನುದಾನದಡಿ 10ಲಕ್ಷ ರುಪಾಯಿ ನೀಡುತ್ತೆನೆ ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಸಂಘದ ಜಿಲ್ಲಾಧ್ಯಕ್ಷ ಎನ್. ರಘುರಾಮ್ ದೇವಾಡಿಗ, ರಾಜ್ಯ ಗೌರವಾಧ್ಯಕ್ಷ ಜಿ.ಎಂ. ಸಣ್ಣಮುದ್ದಯ್ಯ, ಪ್ರಧಾನ ಕಾರ್ಯದರ್ಶಿ ಬಿ.ಎಂ. ಪಟೇಲ್ ಪಾಂಡು, ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದ ಪೂರ್ಯನಾಯ್ಕ್, ಜಿಪಂ ಅಧ್ಯಕ್ಷೆ ಗೀತಾ ಮಲ್ಲಿಕಾರ್ಜುನ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

