ಶಿವಮೊಗ್ಗ

ಶೈಕ್ಷಣಿಕ ವಾತಾವರಣಕ್ಕೆ ಧಕ್ಕೆ: ಪ್ರತಿಭಟನೆ

Published On :

ಶಿವಮೊಗ್ಗ: ಡಿವಿಎಸ್ ಆವರಣದಲ್ಲಿ ಶೈಕ್ಷಣಿಕ ವಾತಾವರಣಕ್ಕೆ ಧಕ್ಕೆಯುಂಟು ಮಾಡುತ್ತಿರುವವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಡಿವಿಎಸ್ ಶಾಲಾ ಸಮಿತಿ ಸದಸ್ಯರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
 ಶೈಕ್ಷಣಿಕ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಡಿವಿಎಸ್ ಸಂಸ್ಥೆ ರಾಜ್ಯದಲ್ಲಿಯೇ ಉತ್ತಮ ಹೆಸರು ಮಾಡಿದೆ. ಶಿಕ್ಷಣ ಇಲಾಖೆಯ ನಿಯಮಾನುಸಾರ ಕಳೆದ 6 ವರ್ಷಗಳಿಂದ ಅತ್ಯಂತ ಪಾರದರ್ಶಕ ವ್ಯವಸ್ಥೆಯಿಂದ ಪ್ರಥಮ ಪಿಯುಸಿ ಪ್ರವೇಶಾತಿಯನ್ನು ನಡೆಸಿಕೊಂಡು ಬರುತ್ತಿದೆ. ಅಲ್ಲದೇ ಸಂಸ್ಥೆಯ ನೌಕರರನ್ನು ಸಂಪನ್ಮೂಲ ವ್ಯಕ್ತಿಗಳನ್ನಾಗಿ ಬಳಸಿಕೊಂಡು ಕೋಚಿಂಗ್ ಕ್ಲಾಸ್‌ಗಳನ್ನು ನಡೆಸುತ್ತಿರುವದನ್ನು ಗಮನಿಸಿ ತಡೆಹಿಡಿಯಲಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.
 2012-13ನೇ ಸಾಲಿನಲ್ಲಿ ನಡೆದ ಚುನಾವಣೆಯಲ್ಲಿ ಚುನಾಯಿತರಾದ ಆಡಳಿತ ಮಂಡಳಿ ಅಧಿಕಾರ ಪಡೆದ ಮೇಲೆ ಕೆಲವು ಕ್ರಮಗಳನ್ನು ತೆಗೆದುಕೊಂಡು ವಿದ್ಯಾರ್ಥಿಗಳು ಮತ್ತು ಪೋಷಕರ ನಿರೀಕ್ಷೆ ಹಾಗೂ ಬೇಡಿಕೆಯನುಸಾರ ಶೈಕ್ಷಣಿಕ ಕ್ರಮಗಳನ್ನು ಹಮ್ಮಿಕೊಂಡಿದೆ. ಆದರೆ, ನಗರದ ಕೆಲವು ವ್ಯಕ್ತಿಗಳು ವಿವಿಧ ಸಂಘಟನೆಗಳ ಹೆಸರಿನಲ್ಲಿ ಪದೇ-ಪದೇ ಡಿವಿಎಸ್ ಆವರಣಕ್ಕೆ ಬಂದು ಪ್ರತಿಭಟನೆಯ ಹೆಸರಿನಲ್ಲಿ ಶಾಂತಿ ಭಂಗ ಉಂಟು ಮಾಡುವುದು ಮತ್ತು ಶೈಕ್ಷಣಿಕ ಕಾರ್ಯಕ್ರಮಗಳಿಗೆ ಆಡಚಣೆ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
 ಕೆಲವು ವ್ಯಕ್ತಿಗಳು ಕಳೆದ ಶನಿವಾರ ಸಂಸ್ಥೆಯ ಕಾರ್ಯದರ್ಶಿ, ರಿಜಿಸ್ಟ್ರಾರ್ ಮತ್ತು ಅಧ್ಯಾಪಕ ಸಂಘದ ಪ್ರತಿನಿಧಿ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರ ವಿರುದ್ಧ ಗಲಾಟೆ ಮಾಡಿದ್ದು, ಕಾರ್ಯದರ್ಶಿಗಳನ್ನು ಏಕಾಏಕಿ ಬೈಯಿದ್ದು, ಸಂಸ್ಥೆಯನ್ನು ಹೇಗೆ ನಡೆಸುತ್ತಿರೀ ಎಂದು ಬೆದರಿಕೆ ಹಾಕಿದ್ದಾರೆ. ಇದು ಸಂಸ್ಥೆಯ ಪದಾಧಿಕಾರಿಗಳು ಮತ್ತು ಬೋಧಕೇತರ, ಬೋಧಕ ವರ್ಗದವರಿಗೆ ಭಯವನ್ನುಂಟು ಮಾಡಿದೆ ಎಂದು ವಿವರಿಸಿದರು.
 ಈ ಸಂಬಂಧವಾಗಿ ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ಮೂವರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಕ್ರಮಕೈಗೊಳ್ಳಬೇಕು. ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ರಕ್ಷಣೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
 ಪ್ರತಿಭಟನೆಯಲ್ಲಿ ಶಾಲಾ ಸಮಿತಿ ಅಧ್ಯಕ್ಷ ಕೆ.ಜಿ. ಸುಬ್ರಹ್ಮಣ್ಯ, ಕಾರ್ಯದರ್ಶಿ ವಿ.ಕೆ. ಸುಬ್ರಹ್ಮಣ್ಯ ಮತ್ತಿತರರು ಇದ್ದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.