ನಕ್ಸಲ್ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ 10 ಕೋಟಿ
ಕ.ಪ್ರ.ವಾರ್ತೆ ಟಿ ಶಿವಮೊಗ್ಗ ಟಿ ಜೂ.27
ಜಿಲ್ಲೆಯ ನಕ್ಸಲ್ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ ಗೃಹ ಇಲಾಖೆ 10 ಕೋಟಿ ರು. ಅನುದಾನ ನೀಡಿದ್ದು, ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ದೂರ ಮತ್ತು ಅತೀ ಹಿಂದುಳಿದ ಪ್ರದೇಶ ಅಭಿವೃದ್ಧಿ ಸಮಿತಿ ಸಭೆಯಲ್ಲಿ 5 ಕೋಟಿ ರು. ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಅನುಮೋದನೆ ನೀಡಲಾಯಿತು.
ಜಿಲ್ಲಾಧಿಕಾರಿ ವಿಪುಲ್ ಬನ್ಸಲ್, ಈ ಎಲ್ಲ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಅಕ್ಟೋಬರ್ ಒಳಗೆ ಮುಗಿಯಲಿದ್ದು, ಡಿಸೆಂಬರ್ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳ್ಳಲಿದೆ. ಈ ಬಗ್ಗೆ ಅನುಷ್ಠಾನ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಈ ಯೋಜನೆಗಳನ್ನು ಆದ್ಯತೆ ಮೇರೆಗೆ ಪರಿಗಣಿಸುವಂತೆ ಹಾಗೂ ಗುಣಮಟ್ಟದ ಕಾಮಗಾರಿಗಳನ್ನು ಶೀಘ್ರಗತಿಯಲ್ಲಿ ಮುಗಿಸುವಂತೆ ತಿಳಿಸಲಾಗಿದೆ ಎಂದರು.
ರಸ್ತೆ, ಸೇತುವೆ, ಶಾಲಾ ಕಟ್ಟಡಗಳು: ಹೊಸನಗರ ಹಾಗೂ ತೀರ್ಥಹಳ್ಳಿಯ 5 ಗ್ರಾಪಂ ಹಾಗೂ ಇತರೆ 40 ಹಳ್ಳಿಗಳಲ್ಲಿ ವ್ಯಾಪಕ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿ ಕಳೆದ ಆರ್ಥಿಕ ವರ್ಷದಲ್ಲಿ 4 ಕೋಟಿ ರು. ಮೌಲ್ಯದ ರಸ್ತೆ, ಸೇತುವೆ, ಶಾಲಾ ಕಟ್ಟಡಗಳು, ಅಂಗನವಾಡಿ ಕಟ್ಟಡಗಳೂ ಸೇರಿದಂತೆ ವಿವಿಧ ನಾಗರಿಕ ಸೌಲಭ್ಯಗಳ ಅಭಿವೃದ್ಧಿಗಾಗಿ ವೆಚ್ಚ ಮಾಡಲಾಗಿದೆ.
ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿವೆ. ಪ್ರಸಕ್ತ ಸಾಲಿನಲ್ಲಿ ಹೋಸ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಸಂಬಂಧ ವಿವಿಧ ಇಲಾಖೆಗಳಿಗೆ ಸೂಚಿಸಲಾಗಿತ್ತು. ಅದರಂತೆ ಗುರುವಾರದ ಸಭೆಯಲ್ಲಿ ರು. 5 ಕೋಟಿ ಮೌಲ್ಯದ ವಿವಿಧ ಹೊಸ ಯೋಜನೆಗಳಿಗೆ ಮಂಜೂರಾತಿ ನೀಡಲಾಗಿದೆ ಎಂದರು.
ದೂರ ಮತ್ತು ಅತಿ ಹಿಂದುಳಿದ ಪ್ರದೇಶಾಭಿವೃದ್ಧಿ ಯೋಜನೆಗಳು ನಿರಂತರವಾಗಿ ನಡೆಯುವ ಕಾರ್ಯಕ್ರಮವಾದ್ದರಿಂದ ಇದೀಗ ಮಳೆಯ ಕಾರಣ ಕೆಲವು ಕಾಮಗಾರಿಗಳು ನಿಂತಿವೆ. ಮಳೆಗಾಲ ಮುಗಿದ ನಂತರ ಎಲ್ಲ ಕಾಮಗಾರಿಗಳು ಟೆಂಡರ್ ಪ್ರಕ್ರಿಯೆ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದರು.
ವ್ಯಾಪಕ ಚರ್ಚೆ: ನಕ್ಸಲ್ ಪೀಡಿತ ಪ್ರದೇಶದ ಅಭಿವೃದ್ಧಿ ಬಗ್ಗೆ ಸುದೀರ್ಘ ಸಭೆಯಲ್ಲಿ ಚರ್ಚಿಸಿದ ಜಿಲ್ಲಾಧಿಕಾರಿ ವಿಪುಲ್ ಬನ್ಸಲ್, ಕಾಮಗಾರಿಗಳನ್ನು ಕೈಗೊಂಡ ಬಗ್ಗೆ ಪ್ರತಿ ತಿಂಗಳು ಈ ಸಭೆಗೆ ಮುನ್ನ ಜಿಲ್ಲಾದಿಕಾರಿ ಕಚೇರಿಗೆ ವರದಿ ಸಲ್ಲಿಸಬೇಕು ಹಾಗೂ ಎಲ್ಲಾ ಕಾಮಗಾರಿಗಳನ್ನು ಮೂರನೇ ವ್ಯಕ್ತಿಯಿಂದ ಪರಿವೀಕ್ಷಣೆ ನಡೆಸಿದ ನಂತರವೇ ಹಣ ಬಿಡುಗಡೆ ಮಾಡಬೇಕು ಎಂದು ಅನುಷ್ಠಾನಾಧಿಕಾರಿಗಳಿಗೆ ಸೂಚಿಸಿದರು.
ಅಲ್ಲದೆ, ಇದೊಂದು ಬಹುಮುಖ್ಯ ಕಾರ್ಯಕ್ರಮವಾದ್ದರಿಂದ ಕಾಮಗಾರಿಗಳು ಮುಗಿದ ನಂತರ ಸ್ಥಳೀಯ ತಹಸೀಲ್ದಾರ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸಂಬಂಧಿಸಿ ಎಂಜಿನಿಯರ್ ಸ್ಥಳಕ್ಕೆ ಭೇಟಿನೀಡಿ ಗುಣಮಟ್ಟ ಪರಿಶೀಲಿಸಬೇಕು ಎಂದು ತಿಳಿಸಿದರು.
ಈಗಾಗಲೇ ಕೈಗೊಂಡ ವಿವಿಧ ಕಾಮಗಾರಿಗಳು ಹಾಗೂ ಯೋಜನೆಗಳ ಪರಾಮರ್ಶೆ ನಡೆಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೌಶಲೇಂದ್ರಕುಮಾರ್, ಜಿಪಂ ಸಿಇಒ ಅಧಿಕಾರಿ ಸಸಿಕಾಂತ್ ಸೆಂಥಿಲ್, ಅಪರ ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

