'ಸೋಲಿನ ಭೀತಿಯಿಂದ ಈಶ್ವರಪ್ಪ ರಾಜಿನಾಮೆ'
ಶಿವಮೊಗ್ಗ: ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಪಲಾಯನವಾದ ಅನುಸರಿಸಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಸೇವಾದಳ ಸಮನ್ವಯ ಸಮಿತಿ ಸದಸ್ಯ ವೈ.ಎಚ್. ನಾಗರಾಜ್ ಟೀಕಿಸಿದ್ದಾರೆ.
ಪ್ರಸ್ತುತ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅವರ ಸ್ವಕ್ಷೇತ್ರ ಶಿವಮೊಗ್ಗ ಸೇರಿದಂತೆ ರಾಜ್ಯದೆಲ್ಲೆಡೆ ಬಿಜೆಪಿ ತೀವ್ರ ಹಿನ್ನಡೆ ಸಾಧಿಸುವುದು ನಿಶ್ಚಿತವಾಗುತ್ತಿದ್ದಂತೆ ಕೆ.ಎಸ್. ಈಶ್ವರಪ್ಪ ರಾಜಿನಾಮೆ ನೀಡುವ ಮೂಲಕ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಕೆಲಸ ಮಾಡಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ರಾಜ್ಯ ಅಭಿವೃದ್ಧಿಯಲ್ಲಿ ಹಿಂದುಳಿದಿದೆ. ಹಗರಣ, ಭ್ರಷ್ಟಾಚಾರದಿಂದ ಕರ್ನಾಟಕಕ್ಕೆ ರಾಷ್ಟ್ರ ಮಟ್ಟದಲ್ಲಿ ಕೆಟ್ಟ ಹೆಸರು ಬರುವಂತಾಗಿದೆ. ಇದಕ್ಕೆ ಬಿಜೆಪಿ ಸರ್ಕಾರದ ದುರಾಡಳಿತ, ಮುಖಂಡರ ಸ್ವಾರ್ಥ ಸಾಧನೆಯೇ ಕಾರಣವೆಂದರೆ ತಪ್ಪಾಗಲಾರದು ಎಂದು ನಾಗರಾಜ್ ಹೇಳಿದ್ದಾರೆ.
ಬಿಜೆಪಿ ಧೂಳೀಪಟ ಖಂಡಿತ: ಸರ್ಕಾರದ ದುರಾಡಳಿತದಿಂದ ರಾಜ್ಯದ ಜನತೆ ಸಂಪೂರ್ಣ ಬೇಸತ್ತು ಹೋಗಿದ್ದಾರೆ. ತಕ್ಕಪಾಠ ಕಲಿಸಲು ನಿರ್ಧರಿಸಿದ್ದಾರೆ. ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಧೂಳೀಪಟವಾಗುವುದು ನಿಶ್ಚಿತವಾಗಿದೆ. ಹಾಗೆಯೇ ಮುಂದಿನ ವಿಧಾನಸಭೆ ಚುನಾವಣೆಯಲ್ಲಿಯೂ ಹೇಳ ಹೆಸರಿಲ್ಲದಂತಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ತಾವು ಅಧಿಕಾರಕ್ಕೆ ಅಂಟಿಕೊಂಡವರಲ್ಲ ಎಂದು ಬಿಂಬಿಸಲು ಹೊರಟಿದ್ದಾರೆ. ಆದರೆ ಈಶ್ವರಪ್ಪ ಅವರ ನಾಟಕವನ್ನು ಶಿವಮೊಗ್ಗದ ಜನತೆ ಚೆನ್ನಾಗಿ ಅರಿತುಕೊಂಡಿದ್ದಾರೆ. ಶಿವಮೊಗ್ಗ ವಿಧಾನಸಭೆ ಚುನಾವಣೆಯಲ್ಲಿ ಸೋಲಿನ ರುಚಿ ತೋರಿಸುವುದು ನಿಶ್ಚಿತ ಎಂದು ನಾಗರಾಜ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

