ಮತದಾರರ ಪಟ್ಟಿ ಗೊಂದಲ: ಆಯೋಗಕ್ಕೆ ಕಾಂಗ್ರೆಸ್ ಮನವಿ
ಕ.ಪ್ರ ವಾರ್ತೆ, ಶಿವಮೊಗ್ಗ, ಮಾ.14
ಶಿವಮೊಗ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಮತದಾರರ ಪಟ್ಟಿಯಲ್ಲಿ ಉಂಟಾಗಿರುವ ಗೊಂದಲ ಸರಿಪಡಿಸುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯು ಜಿಲ್ಲಾ ಚುನಾವಣಾ ಶಾಖೆಗೆ ದೂರು ಸಲ್ಲಿಸಿತು.
ಇತ್ತೀಚೆಗಷ್ಟೆ ಮುಗಿದ ನಗರಸಭೆ ಚುನಾವಣೆಯಲ್ಲಿ ಮತದಾರರ ಪಟ್ಟಿಯಲ್ಲಿ ಸಾಕಷ್ಟು ಗೊಂದಲ, ಲೋಪದೋಷ ಕಂಡುಬಂದಿದೆ. ಸಾವಿರಾರು ಮತದಾರರ ಹೆಸರು ಪಟ್ಟಿಯಿಂದ ಕೈಬಿಟ್ಟಿವೆ. ಕೆಲವು ಮತದಾರರನ್ನು ಅಕ್ಕಪಕ್ಕದ ವಾರ್ಡ್ನ ಬೂತ್ಗಳಿಗೆ ಸೇರಿಸಲಾಗಿದೆ. ಯಾವುದೇ ಕಾರಣವಿಲ್ಲದೆ ಹೆಸರು ಕೈ ಬಿಡಲಾಗಿದೆ ಎಂದು ಮನವಿಯಲ್ಲಿ ದೂರಿದ್ದಾರೆ.
2007ರಲ್ಲಿ ನಡೆದ ನಗರಸಭೆ ಚುನಾವಣೆ ವೇಳೆ ಮತದಾರರ ಪಟ್ಟಿಯಲ್ಲಿದ್ದ ಹಲವರ ಹೆಸರುಗಳು ಪ್ರಸ್ತುತ ನಡೆದ ಚುನಾವಣೆಯ ಮತದಾರರ ಪಟ್ಟಿಯಲ್ಲಿ ಇಲ್ಲ. ಸಂಬಂಧಿಸಿದವರ ಬಳಿ ವಿಚಾರಿಸಿದರೆ ಯಾವುದೇ ಸ್ಪಷ್ಟ ಮಾಹಿತಿ ನೀಡುತ್ತಿಲ್ಲ. ಗಂಡನ ಹೆಸರು ಪಟ್ಟಿಯಲ್ಲಿದ್ದರೆ ಪತ್ನಿಯ ಹೆಸರೇ ಕೈಬಿಟ್ಟುಹೋಗಿರುತ್ತದೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.
ಮತದಾನದ ಹಕ್ಕಿಂದ ವಂಚನೆ: ಹೆಸರು ನಾಪತ್ತೆಯಾಗಿರುವುದಕ್ಕೆ ಸಂಬಂಧಿಸಿದಂತೆ ಮತದಾರರಿಗೆ ಯಾವುದೇ ತಿಳಿವಳಿಕೆ, ಮಾಹಿತಿ ನೀಡಿದ ಉದಾಹರಣೆ ಇಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನಬದ್ಧವಾಗಿ ನೀಡಲಾಗಿರುವ ಮತದಾನದ ಹಕ್ಕಿನಿಂದ ವಂಚಿತರನ್ನಾಗಿ ಮಾಡಲಾಗಿದೆ ಎಂದು ಕಾಂಗ್ರೆಸ್ ಮುಖಂಡರು ಆಪಾದಿಸಿದರು.
ಹಲವೆಡೆ ಮತದಾರರ ಪಟ್ಟಿಯಲ್ಲಿರುವ ಮತದಾರರ ಹೆಸರುಗಳು ತಪ್ಪಿನಿಂದ ಕೂಡಿವೆ. ಬೇರೆಯವರ ಭಾವಚಿತ್ರ ಹಾಕಿ ಗೊಂದಲ ಸೃಷ್ಟಿಸಲಾಗಿದೆ. ಇಡೀ ಮತದಾರರ ಪಟ್ಟಿಯೇ ಗೊಂದಲದ ಗೂಡಾಗಿ ಪರಿಣಮಿಸಿದೆ.
ಸಾವಿರಾರು ಮತದಾರರು ತಮ್ಮ ಹಕ್ಕಿನಿಂದ ವಂಚಿತರಾಗಿರುವುದರಿಂದ ಚುನಾವಣಾ ಫಲಿತಾಂಶದ ಮೇಲೂ ಗಂಭೀರ ಪರಿಣಾಮ ಬೀರಿದೆ. ಈ ಹಿನ್ನೆಲೆಯಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಾದರೂ ದೋಷ ಮುಕ್ತವಾದ ಸಮರ್ಪಕ ಮತದಾರರ ಪಟ್ಟಿ ಸಿದ್ಧಪಡಿಸಬೇಕು. ಮನೆಮನೆಗೆ ತೆರಳಿ ಹೊಸಪಟ್ಟಿ ಸಿದ್ಧಪಡಿಸಬೇಕು. ಅರ್ಹ ಮತದಾರರು ಗೊಂದಲವಿಲ್ಲದೆ ಮತದಾನ ಚಲಾಯಿಸುವ ವ್ಯವಸ್ಥೆ ಮಾಡಬೇಕು ಎಂದು ಸಮಿತಿ ಒತ್ತಾಯಿಸಿದೆ.
ಮನವಿ ಅರ್ಪಿಸುವ ಸಂದರ್ಭ ಪಕ್ಷದ ಜಿಲ್ಲಾಧ್ಯಕ್ಷ ಪ್ರಸನ್ನಕುಮಾರ್, ಮಾಜಿ ಶಾಸಕ ಚಂದ್ರಶೇಖರಪ್ಪ, ಇಸ್ಮಾಯಿಲ್ ಖಾನ್, ಯೋಗೇಶ್, ರುದ್ರೇಶ್, ರಾಜಶೇಖರ್ ಇದ್ದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

