ಶಿವಮೊಗ್ಗ

ಎಂಜಿನಿಯರ್ ಕೊಠಡಿ ಎದುರು ಶಾಸಕ ಕುಮಾರಸ್ವಾಮಿ ಧರಣಿ

Published On :

ಕ.ಪ್ರ.ವಾರ್ತೆ,ಶಿವಮೊಗ್ಗ, ಮಾ.15
ತಮ್ಮ ಕ್ಷೇತ್ರದಲ್ಲಿ ತಲೆದೋರಿರುವ ಕುಡಿವ ನೀರಿನ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸುವಂತೆ ಒತ್ತಾಯಿಸಿ ಶಾಸಕರೊಬ್ಬರು ಜಿಪಂ ಎಂಜಿನಿಯರಿಂಗ್ ಉಪ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಕೊಠಡಿಯಲ್ಲಿ ಧರಣಿ ಕುಳಿತ ಪ್ರಸಂಗ ಶುಕ್ರವಾರ ನಡೆದಿದೆ.
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ತಲೆದೋರಿದೆ ಎಂದು ಸಮಸ್ಯೆ ಹೊತ್ತು ತಂದ ಆ ಕ್ಷೇತ್ರದ ಶಾಸಕ ಕೆ.ಜಿ. ಕುಮಾರಸ್ವಾಮಿ, ಕಾರ್ಯಪಾಲಕ ಎಂಜಿನಿಯರ್ ಕೊಠಡಿಯಲ್ಲಿಯೇ ಧರಣಿ ಕುಳಿತು ಪ್ರತಿಭಟಿಸಿದರು.
ತರಾಟೆ: ಕೊಠಡಿಯಲ್ಲಿದ್ದ ಕಾರ್ಯಪಾಲಕ ಎಂಜಿನಿಯರ್ ಹನುನುಮಂತಪ್ಪರವರನ್ನು ಕುಮಾರಸ್ವಾಮಿ ಹಾಗೂ ಅವರ ಬೆಂಬಲಿಗರು ತರಾಟೆಗೆ ತೆಗೆದುಕೊಂಡರು. ತಮ್ಮ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರವಾಗುವವರೆಗೂ ಧರಣಿ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದರು.
 ಸುಮಾರು 1 ಗಂಟೆಗೂ ಅಧಿಕ ಕಾಲ ಶಾಸಕರು ಹಾಗೂ ಅವರ ಬೆಂಬಲಿಗರು ಧರಣಿ ನಡೆಸಿದ ನಂತರ ಸಮಸ್ಯೆ ಪರಿಹಾರಕ್ಕೆ ತುರ್ತು ಕ್ರಮ ಕೈಗೊಳ್ಳುವ ಭರವಸೆಯನ್ನು ಕಾರ್ಯಪಾಲಕ ಎಂಜಿನಿಯರ್ ನೀಡಿದರು.  ಇದಕ್ಕೆ ಸಹಮತ ವ್ಯಕ್ತಪಡಿಸಿದ ಶಾಸಕರು ಮುಂದಿನ ಶುಕ್ರವಾರದ ಗಡವು ನೀಡಿ ಧರಣಿ ಹಿಂಪಡೆದರು.
ಹಾಹಾಕಾರ: ಈ ಸಂದರ್ಭದಲ್ಲಿ ಮಾತನಾಡಿದ ಅವರು, ತಮ್ಮ ಕ್ಷೇತ್ರ ವ್ಯಾಪ್ತಿಯ ಆಯನೂರು, ದೇವಕಾತಿಕೊಪ್ಪ,  ಚಾಮುಂಡಿಪುರ, ಹಾರ್ನನಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ತಲೆದೋರಿದೆ. ಕೆರೆಕಟ್ಟೆ, ಬಾವಿಗಳು ಬರಿದಾಗಿವೆ. ಬೋರ್‌ವೆಲ್‌ಗಳಲ್ಲಿ ಅಂತರ್ಜಲ ಮಟ್ಟ ಕುಸಿದಿದೆ. ಗ್ರಾಮಸ್ಥರು, ಜನ ಜಾನುವಾರುಗಳು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಆದರೆ ಇಲ್ಲಿಯವರೆಗೂ ಜಿಪಂ ಸಂಬಂಧಿಸಿದ ಅಧಿಕಾರಿಗಳು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿದರು.
 ನಮ್ಮ ಕ್ಷೇತ್ರದ ಬಗ್ಗೆ ಅಧಿಕಾರಿಗಳು ಸಂಪೂರ್ಣ  ನಿರ್ಲಕ್ಷ್ಯ ವಹಿಸಿದ್ದಾರೆ, ಇದು ಖಂಡನಾರ್ಹವಾದುದಾಗಿದೆ ಎಂದು ಹೇಳಿದ ಅವರು, ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಈಗಾಗಲೇ ಹಲವು ಬಾರಿ ಜಿಪಂ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೆ ಇಲ್ಲಿಯವರೆಗೂ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.