ನೀತಿ ಸಂಹಿತೆಯಿಂದ ಹೊರಗೆ
ಶಿವಮೊಗ್ಗ: ದೂರ ಮತ್ತು ಹಿಂದುಳಿದ ನಕ್ಸಲ್ ಪ್ರದೇಶಾಭಿವೃದ್ಧಿ ಕಾಮಗಾರಿಗಳನ್ನು ಚುನಾವಣೆ ನೀತಿ ಸಂಹಿತೆ ವ್ಯಾಪ್ತಿಯಿಂದ ಹೊರಗಿಡಲು ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆಯುವುದಾಗಿ ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ತಿಳಿಸಿದ್ದಾರೆ.
ತಮ್ಮ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ದೂರ ಮತ್ತು ಹಿಂದುಳಿದ ನಕ್ಸಲ್ ಪ್ರದೇಶಾಭಿವೃದ್ಧಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿದ ಅವರು, ನಕ್ಸಲ್ ಪೀಡಿತ ಹಾಗೂ ಶಂಕಿತ ಪ್ರದೇಶಗಳಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ನೀತಿ ಸಂಹಿತೆಯ ಆತಂಕವಿಲ್ಲದೆ ಪೂರ್ಣಗೊಳಿಸಬೇಕು ಹಾಗೂ ಆ ಭಾಗದಲ್ಲಿ ಕೈಗೊಳ್ಳಲಿರುವ ಹೊಸ ಯೋಜನೆಗಳ ಸಂಬಂಧ ಟೆಂಡರ್ ಪ್ರಕ್ರಿಯೆ ಸೇರಿದಂತೆ ವಿವಿಧ ಚಟುವಟಿಕೆಗಳನ್ನು ನೀತಿಸಂಹಿತೆಯಿಂದ ಹೊರಗಿಡುವಂತೆ ಚುನಾವಣಾ ಆಯೋಗಕ್ಕೆ ಪತ್ರ ಬರೆಯುವುದಾಗಿ ತಿಳಿಸಿದರು.
ತುರ್ತು ಕ್ರಮಕ್ಕೆ ಸೂಚನೆ: ನಕ್ಸಲ್ ಪೀಡಿತ ಪ್ರದೇಶಗಳಲ್ಲಿನ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ಈ ವರೆಗಿನ ಕಾಮಗಾರಿಗಳು ಅಷ್ಟಾಗಿ ತೃಪ್ತಿದಾಯಕವಾಗಿಲ್ಲ.
ಈ ಹಿನ್ನೆಲೆಯಲ್ಲಿ ವಿಶೇಷ ಆದ್ಯತೆ ಮೇರೆಗೆ ಗುಣಮಟ್ಟದ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ನಿಧಾನ ಕಾಮಗಾರಿ ಮಾಡುವ ಗುತ್ತಿಗೆದಾರರ ವಿರುದ್ಧ ಸಂಬಂಧಿಸಿದ ಮುಖ್ಯಸ್ಥರು ತುರ್ತು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.
ಮುಂದಿನ ನಕ್ಸಲ್ ಸಭೆ ವೇಳೆಗೆ ಇಂದಿನ ಸಭೆಯ ಚರ್ಚಿತ ವಿಷಯಗಳು ತೃಪ್ತಿದಾಯಕವಾಗಿರಬೇಕು. ಅಲ್ಲದೆ, ಈಗಾಗಲೇ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಸಂಬಂಧಿಸಿದ ಅನುದಾನ ಬಳಕೆ ದೃಢೀಕರಣ ಹಾಗೂ ಸಂಬಂಧಿಸಿದ ಬಿಲ್ಲುಗಳನ್ನು ಸಲ್ಲಿಸಬೇಕು ಎಂದರು.
ವಾರದೊಳಗೆ ಸಲ್ಲಿಸಿ: ಈಗಾಗಲೇ ಮಂಜೂರಾಗಿರುವ ಯೋಜನೆಗಳ ಹೊರತಾಗಿ ಹೊಸ ಯೋಜನೆಗಳ ಸಂಬಂಧ ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ, ಸಂಬಂಧಿಸಿದ ನೀಲಿ ನಕ್ಷೆಯನ್ನು ವಾರದೊಳಗಾಗಿ ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಬೇಕು ಎಂದು ಅವರು ತಿಳಿಸಿದರು.
ಅರಣ್ಯ ಹಕ್ಕು ಕಾಯ್ದೆ ಪ್ರಕಾರ ತೀರ್ಥಹಳ್ಳಿ ಹಾಗೂ ಹೊಸನಗರ ತಾಲೂಕಿನ ನಕ್ಸಲ್ ಪೀಡಿತ ಪ್ರದೇಶಗಳ ಗಿರಿಜನರು ನಿಯಮಾನುಸಾರ ತಮ್ಮ ಹಕ್ಕುಗಳನ್ನು ಪಡೆಯುವಂತೆ ಸಮಾಜ ಕಲ್ಯಾಣ ಇಲಾಖೆ ಆ ಭಾಗದಲ್ಲಿ ಜನಗಣತಿ ಮಾಡಿ ಕ್ರಮ ಕೈಗೊಳ್ಳಬೇಕು ಎಂದರು.
ನಕ್ಸಲ್ ಪೀಡಿತ ಪ್ರದೇಶಗಳಲ್ಲಿನ ಕಾಮಗಾರಿಗಳನ್ನು ಪ್ರಥಮ ಆದ್ಯತೆ ಮೇರೆಗೆ ತೆಗೆದುಕೊಳ್ಳಬೇಕು ಹಾಗೂ ಈ ಹಿಂದೆ ಬಳಸಲಾಗುತ್ತಿರುವ ಸಾಧಾರಣ ಪದ್ಧತಿಯ ಬದಲಾಗಿ ಗುಣಮಟ್ಟ ಹಾಗೂ ತೀವ್ರಗತಿಯ ಯೋಜನೆಗಳನ್ನು ಕೈಗೊಳ್ಳುವ ಮೂಲಕ ಆ ಭಾಗದ ಜನರಲ್ಲಿ ಆತ್ಮ ವಿಶ್ವಾಸ ಮೂಡಿಸಬೇಕೆಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೌಶಲೇಂದ್ರ ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಸಿಕಾಂತ್ ಸೆಂಥಿಲ್, ಅಪರ ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

