ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ
ಕ.ಪ್ರ. ವಾರ್ತೆ,ಶಿವಮೊಗ್ಗ,ಮಾ.20
ರೈತರ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ನಗರದ ಗೋಪಿ ವೃತ್ತದಿಂದ ಹೊರಟ ಪ್ರತಿಭಟನಾ ಮೆರವಣಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿತು. ನಂತರ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದ ರೈತರು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ರೈತರ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಭಾರತದ ಎಲ್ಲಾ ರಾಜ್ಯಗಳ ಕೃಷಿ ಸಂಘಟನೆಗಳ ಆಶ್ರಯದಲ್ಲಿ ದೆಹಲಿಯ ಜಂತರ್- ಮಂತರ್ನಲ್ಲಿ ಬೃಹತ್ ಮಟ್ಟದ ರಾಷ್ಟ್ರೀಯ ರೈತರ ಮತ್ತು ಕೃಷಿ ಕಾರ್ಮಿಕರ ಸಮಾವೇಶ ಹಮ್ಮಿಕೊಂಡಿದ್ದು. ಇದನ್ನು ಗಮನಿಸದ ಕೇಂದ್ರ ಸರ್ಕಾರದ ಕ್ರಮ ಖಂಡನೀಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಸಹಾಯಧನ ನೀಡಿ: ರಾಜ್ಯದ ವಿವಿಧೆಡೆ ಅಭಿವೃದ್ಧಿ ಹೆಸರಿನಲ್ಲಿ ಬಗರ್ ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸಲಾಗಿರುವ ರೈತ ಕುಟುಂಬಗಳಿಗೆ ಸಂಪೂರ್ಣ ಸಹಾಯಧನ ನೀಡಬೇಕು. ಅಲ್ಲದೇ, ರೈತರ ಬೆಳೆಗೆ ಸರ್ಕಾರ ವೈಜ್ಞಾನಿಕ ಬೆಲೆ ನಿಗದಿ ಮಾಡಿ, ಪ್ರಸ್ತುತ ರೈತರು ಕೃಷಿ ಚಟುವಟಿಕೆಗಳಿಗೆ ಪ್ರಾದೇಶಿಕ ಮತ್ತು ವಾಣಿಜ್ಯ ಬ್ಯಾಂಕ್ಗಳಲ್ಲಿ ಮಾಡಿರುವ ಎಲ್ಲಾ ರೀತಿಯ ಸಾಲವನ್ನು ಮನ್ನಾ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಕಳಪೆ ಬಿತ್ತನೆ ಬೀಜ: ಮಾರುಕಟ್ಟೆ ಅಭದ್ರತೆ, ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದಾಗುವ ಹಾನಿ, ಕಳಪೆ ಬಿತ್ತನೆ ಬೀಜ ಮತ್ತಿತರ ಕಾರಣಗಳಿಂದ ರೈತರು ಆತ್ಮಹತ್ಯೆಯ ದಾರಿ ಹಿಡಿಯುತ್ತಿದ್ದಾರೆ. ಆದ್ದರಿಂದ ರೈತರಿಗೂ ಕೂಡ ಕಾರ್ಮಿಕರಿಗೆ ನೀಡುವ ಎಲ್ಲಾ ರೀತಿಯ ಸೌಲಭ್ಯ ನೀಡಬೇಕು. ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು ಎಂದು ತಿಳಿಸಿದರು.
ಕೃಷಿ ಕ್ಷೇತ್ರಕ್ಕೆ ಪ್ರತ್ಯೇಕ ಕೇಂದ್ರ ಬಜೆಟ್ ಮಾಡಬೇಕು, ಕನಿಷ್ಠ ಬೆಂಬಲ ಬೆಲೆ ನೀತಿ ಕೈಬಿಡಬೇಕು, ಕೃಷಿ ಖರ್ಚು ಮಾಡಿದ ವೆಚ್ಚದ ಆಧಾರದ ಮೇಲೆ ವೈಜ್ಞಾನಿಕ ಬೆಲೆ ನೀತಿ ಜಾರಿಗೊಳಿಸಬೇಕು, ವಿದೇಶಿ ನೇರ ಬಂಡವಾಳವನ್ನು ರದ್ದುಮಾಡಬೇಕು, ಅರಣ್ಯ ಇಂಡೀಕರಣವನ್ನು ಸ್ಥಗಿತ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ರೈತ ಸಂಘದ ಕಾರ್ಯಾಧ್ಯಕ್ಷ ಯಶವಂತ್ ರಾವ್ ಘೋರ್ಪಡೆ, ಪ್ರಧಾನ ಕಾರ್ಯದರ್ಶಿ ಡಿ.ವಿ. ವೀರೇಶ್, ಜಿ. ಉಮಾಪತಿಯಪ್ಪ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

