120 ಕ್ಷೇತ್ರಗಳಿಗೆ ಅಭ್ಯರ್ಥಿ ಸಿದ್ಧ: ಉಪ ಮುಖ್ಯಮಂತ್ರಿ ಈಶ್ವರಪ್ಪ
ಕ.ಪ್ರ.ವಾರ್ತೆಶಿವಮೊಗ್ಗ ಮಾ.28
120 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಯಾರೆಂದು ತೀರ್ಮಾನವಾಗಿದೆ. ಇನ್ನುಳಿದ ಕ್ಷೇತ್ರಗಳಲ್ಲಿ 2- 3 ಆಕಾಂಕ್ಷಿಗಳಿದ್ದು, ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದು, ಕ್ರಿಮಿನಲ್ಗಳಿಗೆ ಯಾವ ಕಾರಣಕ್ಕೂ ಪಕ್ಷದ ಟಿಕೆಟ್ ಕೊಡುವುದಿಲ್ಲ ಎಂದರು.
ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೋಪ ಎದುರಿಸುತ್ತಿರುವವರಿಗಲ್ಲ, ಶಿಕ್ಷಿತ ಆರೋಪಿಗಳಿಗೆ ಟಿಕೆಟ್ ಇಲ್ಲ ಎಂದು ಸ್ಪಷ್ಟಪಡಿಸಿದರು. ಏಪ್ರಿಲ್ ಮೊದಲ ವಾರದಲ್ಲಿ 224 ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದರು.
ಚುನಾವಣಾ ಪ್ರಚಾರದಲ್ಲಿ ಪಕ್ಷದ ರಾಷ್ಟ್ರೀಯ ಮುಖಂಡರಾದ ಲಾಲಕೃಷ್ಣ ಅಡ್ವಾಣಿ, ನರೇಂದ್ರ ಮೋದಿ, ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ ಸೇರಿದಂತೆ ಹಲವು ಮುಖಂಡರು ಭಾಗವಹಿಸಲಿದ್ದಾರೆ ಎಂದರು.
ಬಿಜೆಪಿ ಬಗ್ಗೆ ಭ್ರಷ್ಟಾಚಾರ ಆರೋಪ ಮಾಡುತ್ತಿರುವ ಕಾಂಗ್ರೆಸ್ ಮೊದಲು ವೀರಪ್ಪ ಮೊಯ್ಲಿ, ಎಸ್.ಎಂ. ಕೃಷ್ಣ ಹಾಗೂ ರೆಹಮಾನ್ ಖಾನ್ ಅವರ ವಿರುದ್ಧ ಇರುವ ಭ್ರಷ್ಟಾಚಾರ ಆರೋಪಗಳಿಗೆ ಉತ್ತರಿಸಲಿ ಎಂದು ಟೀಕಿಸಿದರು.
ಬಿ.ಎಸ್. ಯಡಿಯೂರಪ್ಪ ಅವರ ಕುರಿತು ಪಕ್ಷ ಯಾವುದೇ ರೀತಿಯ ಟೀಕೆ ಮಾಡಲು ಹೋಗುವುದಿಲ್ಲ. ಆದರೆ, ಅವರು ಅನಾವಶ್ಯಕವಾಗಿ ಮುಖ್ಯಮಂತ್ರಿ ಶೆಟ್ಟರ್ ಹಾಗೂ ಮುಖಂಡರ ವಿರುದ್ಧ ಟೀಕೆ ಮಾಡುತ್ತಿರುವುದು ನೋವು ತಂದಿದೆ ಎಂದರು. ಚುನಾವಣೆಯಲ್ಲಿ ನಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷವೇ ಹೊರತು ಕೆಜೆಪಿ ಅಲ್ಲ ಎಂದರು.
ಶಿವಮೊಗ್ಗ ಕ್ಷೇತ್ರದಿಂದ ತಮ್ಮ ಗೆಲವು ನಿಶ್ಚಿತ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ರೇಣುಕಾಚಾರ್ಯ ಇನ್ನೂ ಬಚ್ಚಾ
ರೇಣುಕಾಚಾರ್ಯ ಇನ್ನೂ ಬಚ್ಚಾ. ಅವರು ಆಡಿದ ಮಾತುಗಳಿಗೆಲ್ಲಾ ಪ್ರತಿಕ್ರಿಯಿಸುವ ಅಗತ್ಯ ಇಲ್ಲ ಎಂದು ಹರಿಹಾಯ್ದ ಈಶ್ವರಪ್ಪ, ಹಿಂದಿನಿಂದಲೂ ನಾನು ರೇಣುಕಾಚಾರ್ಯರನ್ನು ನೋಡಿದ್ದೇನೆ. ಈ ವ್ಯಕ್ತಿಯ ಮಾತುಗಳನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯ ಇಲ್ಲ ಎಂದರು.
ಈ ಹಿಂದೆಯೂ ಸಹ ರೇಣುಕಾಚಾರ್ಯ ಅವರು ಯಡಿಯೂರಪ್ಪರನ್ನು ಟೀಕಿಸಿದ್ದರು. ಈಗ ಅವರ ಹಿಂದೆಯೇ ಹೋಗುತ್ತಿದ್ದಾರೆ. ಇವರ ಮಾತುಗಳನ್ನು ಜನರು ನಂಬಬಾರದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

