ಉಚಿತ ರಸಗೊಬ್ಬರಕ್ಕೆ ಆಗ್ರಹ
ಕ.ಪ್ರ.ವಾರ್ತೆ ಟಿ ಸಾಗರ ಟಿ ಮೇ 21
ತಾಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಬರಪೀಡಿತ ಆನಂದಪುರಂ ಹೋಬಳಿ ವ್ಯಾಪ್ತಿಯ ರೈತರಿಗೆ ಉಚಿತವಾಗಿ ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವ ನಿರ್ಣಯ ಕೈಗೊಳ್ಳಲಾಯಿತು.
ವಿಷಯ ಕುರಿತು ಮಾತನಾಡಿದ ಸದಸ್ಯೆ ಜ್ಯೋತಿ ಮುರಳೀಧರ, ಆನಂದಪುರಂ ಹೋಬಳಿಗೆ ಕಳೆದ ವರ್ಷ ಭೇಟಿ ನೀಡಿದ ಅಧ್ಯಯನ ತಂಡ ಪರಿಶೀಲನೆ ನಡೆಸಿ ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಿದೆ. ಆದರೆ ಈ ಸಂಬಂಧ ಸರ್ಕಾರದಿಂದ ಯಾವುದೇ ಸೌಲಭ್ಯವಾಗಲೀ, ಅನುದಾನವಾಗಲಿ ದೊರಕಿಲ್ಲ.
ಕಳೆದ ಅವಧಿಯಲ್ಲಿ ಮಳೆ ಕೈಕೊಟ್ಟಿದ್ದರಿಂದ ರೈತರು ನಷ್ಟದಲ್ಲಿದ್ದು, ಈ ಬಾರಿ ಬಿತ್ತನೆಬೀಜ, ರಸಗೊಬ್ಬರ ಖರೀದಿಸುವುದು ಕಷ್ಟಸಾಧ್ಯವಾಗಿರುವುದರಿಂದ ಉಚಿತವಾಗಿ ಸರಬರಾಜು ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಬೇಕು ಎಂದು ಒತ್ತಾಯಿಸಿದರು.
ರೈತರು ನಷ್ಟದಲ್ಲಿ; ಸದಸ್ಯೆ ಸುಮಿತ್ರ ಮಹಾಬಲೇಶ್ವರ, ತಾಳಗುಪ್ಪ ಹೋಬಳಿಯಲ್ಲಿ ಮಳೆಯ ಕೊರತೆಯಿಂದಾಗಿ ರೈತರು ಈತನಕ ಬಿತ್ತನೆ ಕಾರ್ಯ ಕೈಗೊಂಡಿಲ್ಲ. ಹಿಂದಿನ ವರ್ಷ ಮಳೆ ಸರಿಯಾದ ಪ್ರಮಾಣದಲ್ಲಿ ಆಗದೆ ಇರುವುದರಿಂದ ರೈತರು ನಷ್ಟ ಅನುಭವಿಸಿದ್ದಾರೆ.
ತಾಳಗುಪ್ಪ ಹೋಬಳಿಗೂ ಉಚಿತ ಬಿತ್ತನೆಬೀಜ ಹಾಗೂ ರಸಗೊಬ್ಬರ ಪೂರೈಕೆ ಮಾಡುವ ನಿಟ್ಟಿನಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಒತ್ತಾಯಿಸಿದರು.
ಅಧ್ಯಕ್ಷ ಮಹಾಬಲೇಶ್ವರ ಕುಗ್ವೆ, ಅಗತ್ಯವಿರುವ ಸಣ್ಣ ಹಾಗೂ ಅತಿಸಣ್ಣ ರೈತರಿಗೆ ಹಿಡುವಳಿಗೆ ಅನುಸಾರವಾಗಿ ಉಚಿತವಾಗಿ ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದರು.
ಗೊಬ್ಬರ ಸಂಗ್ರಹ: ತಾಲೂಕಿನಲ್ಲಿ ಮುಂಗಾರು ಪ್ರವೇಶದ ಹಿನ್ನೆಲೆಯಲ್ಲಿ ಬಿತ್ತನಬೀಜ ಹಾಗೂ ರಸಗೊಬ್ಬರ ದಾಸ್ತಾನು ಮಾಡಿಕೊಳ್ಳಲಾಗಿದೆ. ಎಲ್ಲಾ ಹೋಬಳಿಯ ರೈತ ಸಂಪರ್ಕ ಕೇಂದ್ರ ಹಾಗೂ ಸಹಕಾರಿ ಸಂಘಗಳಲ್ಲಿ ಬೇಡಿಕೆ ಇರುವ ಬತ್ತದ ಬೀಜ, ಮೆಕ್ಕೆಜೋಳ ಬೀಜ ಹಾಗೂ ಅಗತ್ಯ ಇರುವ ಗೊಬ್ಬರ ಸಂಗ್ರಹ ಮಾಡಲಾಗಿದೆ. ಕೇಂದ್ರ ಸರ್ಕಾರ ಗೊಬ್ಬರದ ಬೆಲೆಯನ್ನು ಕ್ವಿಂಟಲ್ಗೆ ರು. 100 ಕಡಿತ ಮಾಡಿರುವುದು ರೈತರಿಗೆ ಸಹಾಯವಾಗಲಿದೆ ಎಂದು ಸಹಾಯಕ ಕೃಷಿ ಅಧಿಕಾರಿ ಶಿವಕುಮಾರ್ ಮಾಹಿತಿ ನೀಡಿದರು.
ಗುಣಮಟ್ಟದ ಆಹಾರ: ಸದಸ್ಯರಾದ ಷಣ್ಮುಖಪ್ಪ, ಶ್ಯಾಮಲ ದೇವರಾಜ್, ಪಾರ್ವತಿ, ಪ್ರೇಮಾ ಮತ್ತಿತರರು ಅಂಗನವಾಡಿಗಳಲ್ಲಿ ಗುಣಮಟ್ಟದ ಆಹಾರ ನೀಡುವಲ್ಲಿ ಗಮನ ಹರಿಸುತ್ತಿಲ್ಲ. ಅಂಗನವಾಡಿಯನ್ನು ಬೆಳಗ್ಗೆಯಿಂದ ಸಂಜೆ 4ರವರೆಗೆ ನಡೆಸುತ್ತಿರುವುದು ಮಕ್ಕಳಿಗೆ ತೊಂದರೆಯಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಪ್ರತಿಕ್ರಿಯಿಸಿದ ಅಧ್ಯಕ್ಷರು, ಮಕ್ಕಳಿಗೆ ಉತ್ತಮವಾದ ಆಹಾರ ನೀಡುವ ಸಂಬಂಧ ಅಧಿಕಾರಿಗಳು ನಿಗಾವಹಿಸಬೇಕು. ಮಧ್ಯಾಹ್ನ ಹಾಲು ಕುಡಿಯಲು ಕೊಡುವುದು ಸೇರಿದಂತೆ ಪೌಷ್ಟಿಕ ಆಹಾರ ಸರಬರಾಜಿಗೆ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಉಪಾಧ್ಯಕ್ಷೆ ಗೌರಮ್ಮ, ಕಾರ್ಯನಿರ್ವಹಣಾಧಿಕಾರಿ ಡಾ. ಸದಾಶಿವ, ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

