ಶಿವಮೊಗ್ಗ

ಶಾಸಕರ ಆರೋಪ ಸತ್ಯಕ್ಕೆ ದೂರವಾದದು

Published On :

ಕ.ಪ್ರ.ವಾರ್ತೆ ಟಿ ಶಿವಮೊಗ್ಗ  ಟಿ  ಮೇ 21
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂಬ ಹಾಲಿ ಶಾಸಕ ದೂರು ಸತ್ಯಕ್ಕೆ ದೂರವಾದದು ಎಂದು ಮಾಜಿ ಶಾಸಕ ಕೆ.ಜಿ. ಕುಮಾರಸ್ವಾಮಿ ಹೇಳಿದ್ದಾರೆ.
ಅದೇ ರೀತಿ ತುಂಗಾ ಏತ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದಾ ಪೂರ್‌ರ್ಯಾನಾಯ್ಕ್ ಸಾರ್ವಜನಿಕರಿಗೆ ಸುಳ್ಳು ಮಾಹಿತಿ ನೀಡುತ್ತಿದ್ದಾರೆ ಕೆ.ಜಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಶಾಸಕರಾಗಿದ್ದ ಅವಧಿಯಲ್ಲಿ ತುಂಗಾ ಏತಾ ನೀರಾವರಿ ಯೋಜನೆಗೆ ಅನುಮೋದನೆ ಪಡೆಯದೆ ಶಂಕುಸ್ಥಾಪನೆ ಮಾಡಲಾಗಿದೆ ಎಂಬ ಶಾರದಾ ಪೂರ್ಯಾನಾಯ್ಕ್‌ರವರ ಹೇಳಿಕೆ ಸತ್ಯಕ್ಕೆ ದೂರವಾದುದು. ಅವರಿಗೆ ಸರಿಯಾದ ಮಾಹಿತಿ ಇಲ್ಲವಾಗಿದೆ. ತಾಂತ್ರಿಕ ಹಾಗೂ ಹಣಕಾಸು ಇಲಾಖೆ ಮಂಜೂರಾತಿ ಪಡೆದ ನಂತರವೇ ನಾಲಾ ಮಾರ್ಗ ಬದಲಾಯಿಸಿ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದು ತಿಳಿಸಿದರು.
ಸ್ಥಾನಮಾನಕ್ಕೆ ತಕ್ಕಂತೆ ಹೇಳಿಕೆ ನೀಡಲಿ: ನೂತನ ಶಾಸಕರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಿಂದ ಇನ್ನೂ ಹೊರ ಬಂದಂತಿಲ್ಲ. ತಮ್ಮ ಸ್ಥಾನಮಾನಕ್ಕೆ ತಕ್ಕಂತೆ ಹೇಳಿಕೆ ನೀಡಬೇಕು. ಸರಿಯಾದ ಮಾಹಿತಿ ಪಡೆದು ಕೆಲಸ ಮಾಡಬೇಕು ಎಂದು ಅವರು ಸಲಹೆ ನೀಡಿದರು.
ಹರಕೆರೆಯಿಂದ ಬಾರೆಹಳ್ಳ ಗೌಡನಕೆರೆಗೆ ನೀರು ಹರಿಸಿ ಅಲ್ಲಿಂದ ಸೌಳಂಗ ಕೆರೆಗೆ ನೀರು ಹರಿಸುವ ಯೋಜನೆ ಇದಾಗಿದೆ.
ನೂತನ ಶಾಸಕರು ಕುಂಸಿ ಭಾಗಕ್ಕೂ ನೀರು ಹರಿಸುವ ಯೋಜನೆ ಕೈಗೊಳ್ಳುವುದಾಗಿ ಹೇಳಿದ್ದಾರೆ. ಆದರೆ ಈ ಕಾರ್ಯ ಸಾಧುವಲ್ಲ ಎಂಬ ವರದಿಯನ್ನು ಅಧಿಕಾರಿಗಳು ನೀಡಿದ್ದಾರೆ ಎಂದು ಮಾಹಿತಿ ನೀಡಿದರು.
24 ಕೋಟಿ ಬಿಡುಗಡೆ: ಹೊಳಲೂರು ಬಳಿ ತುಂಗಾನದಿಗೆ ಸೇತುವೆ ನಿರ್ಮಾಣಕ್ಕೆ 34 ಕೋಟಿ  ಮಂಜೂರಾಗಿದ್ದು, ಈಗಾಗಲೇ 24 ಕೋಟಿ ಹಣ ಬಿಡುಗಡೆಯಾಗಿದೆ. ಕಳೆದ ಐದು ವರ್ಷದಲ್ಲಿ ಗ್ರಾಮಾಂತರ ಕ್ಷೇತ್ರದಲ್ಲಿ ಸುಮಾರು 200 ಕಿಲೋಮೀಟರ್‌ನಷ್ಟು ರಸ್ತೆ ಡಾಂಬರೀಕರಣವಾಗಿದ್ದು, ಕುಡಿಯುವ ನೀರು ಶಿಕ್ಷಣಕ್ಕೆ ಆದ್ಯತೆ ಸೇರಿದಂತೆ ತಮ್ಮ ಅವಧಿಯಲ್ಲಿ ಅನೇಕ ಯೋಜನೆ ಜಾರಿಗೊಳಿಸಲಾಗಿ ಎಂದು ತಿಳಿಸಿದರು.  
ಕಳೆದ ಚುನಾವಣೆಯಲ್ಲಿ ಸೋಲಿನ ಬಗ್ಗೆ ಬೇಸರವಿಲ್ಲ. ಜನರ ತೀರ್ಪಿಗೆ ತಲೆ ಬಾಗುತ್ತೇನೆ. ಮುಂದಿನ 5 ವರ್ಷ ಕ್ಷೇತ್ರದ ಸಮಸ್ಯೆಗಳನ್ನು ಹೋರಾಟದ ಮೂಲಕ ಬಗೆಹರಿಸುತ್ತೇನೆ.
ಚುನಾವಣೆಯಲ್ಲಿ ಕಾರ್ಯಕರ್ತರು ಪ್ರಾಮಾಣಿಕವಾಗಿ ಕೆಲಸ ಮಾಡಿ ಸಹಕಾರ ನೀಡಿದ್ದಾರೆ. ಆದರೆ, ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮತದಾರರಿಗೆ ತಿಳಿಹೇಳುವಲ್ಲಿ ವಿಫಲರಾಗಿದ್ದೇವೆ. ಮುಂದಿನ ಚುನಾವಣೆಯಲ್ಲಿ ಮತ್ತೆ ಗೆಲ್ಲುವ ವಿಶ್ವಾಸವಿದೆ ಎಂದರು.

ಪಕ್ಷದ ತೀರ್ಮಾನಕ್ಕೆ ಬದ್ಧ


ಬಿ.ಎಸ್. ಯಡಿಯೂರಪ್ಪ ಮತ್ತೆ ಬಿಜೆಪಿಗೆ ಸೇರುವ ಬಗ್ಗೆ ಪುಕ್ಷದ ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ಕೈಗೊಳ್ಳುವ ತೀರ್ಮಾನಕ್ಕೆ ಪಕ್ಷದ ಜಿಲ್ಲಾ ಸಮಿತಿ ಬದ್ಧವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದರಾಮಣ್ಣ ತಿಳಿಸಿದರು.
ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಬಿಎಸ್‌ವೈ ಕುರಿತು ರಾಷ್ಟ್ರೀಯ ನಾಯಕರು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದರು.
ರಾಜ್ಯದಲ್ಲಿ ಈ ಹಿಂದೆ ಎಂದೂ ಆಗದಷ್ಟು ಅಭಿವೃದ್ಧಿ ಕಾರ್ಯಗಳು ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿದ್ದರೂ ಪಕ್ಷದಲ್ಲಿನ ಆಂತರಿಕಗೊಂದಲದಿಂದ ಚುನಾವಣೆಯಲ್ಲಿ ಬಿಜೆಪಿ ನಿರೀಕ್ಷಿತ ಯಶಸ್ಸು ಸಾಧಿಸಲಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.