ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ಕ.ಪ್ರ.ವಾರ್ತೆ, ಶಿವಮೊಗ್ಗ, ಮೇ 28 ಕರ್ನಾಟಕ ಅರಣ್ಯ ಮೂಲ ಬುಡಕಟ್ಟುಗಳ ಒಕ್ಕೂಟ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಮನವಿ ಅರ್ಪಿಸಿತು.
ಚಾಮರಾಜನಗರ, ಮೈಸೂರು ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳನ್ನು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಪ್ರದೇಶವಾಗಿ ಘೋಷಿಸಲಾಗಿದೆ. ಅದರಂತೆ ಶಿವಮೊಗ್ಗ ಜಿಲ್ಲೆಯ ಪಶ್ಚಿಮಘಟ್ಟ ವ್ಯಾಪ್ತಿಯ ಗುಡ್ಡಗಾಡು ಪ್ರದೇಶವನ್ನು ಘೋಷಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಸಾಮಾಜಿಕ ನ್ಯಾಯ: ಜಿಲ್ಲೆಯ ಹಸಲರು ಹಾಗೂ ಗೊಂಡ ಬುಡಕಟ್ಟು ವರ್ಗದವರಿಗೆ ಮನೆ ಕಟ್ಟಿಕೊಳ್ಳಲು 60 ಸಾವಿರ ನೀಡಲಾಗುತ್ತಿದ್ದು, ಇದನ್ನು 1.25 ಲಕ್ಷಕ್ಕೆ ಏರಿಕೆ ಮಾಡಬೇಕು. ಒಳ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಪರಿಪಾಲನೆ ಮಾಡಬೇಕು. ಬುಡಕಟ್ಟು ಮಕ್ಕಳಿಗೆ ನಡೆಸುತ್ತಿರುವ ವಿಶೇಷ ಶಾಲೆಗಳನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಶಿಕ್ಷಣ ಇಲಾಖೆಗೆ ವರ್ಗಾಯಿಸಿ ಆದಿವಾಸಿ ಭಾಷೆಯಲ್ಲಿಯೇ ಬೋಧನೆ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಹಕ್ಕುಗಳ ಉಲ್ಲಂಘನೆ: ಬುಡಕಟ್ಟು ಜನಾಂಗದವರ ಮೇಲೆ ನಡೆಯುತ್ತಿರುವ ನಿರಂತರ ದಾಳಿ, ನಾಗರಿಕ ಸೌಲಭ್ಯಗಳ ಕಡೆಗಣನೆ, ದೈನೇಸಿ ಜೀವನ, ಹಕ್ಕುಗಳ ಉಲ್ಲಂಘನೆಯೂ ನಾಗರಿಕ ಸಮಾಜ ತಲೆ ತಗ್ಗಿಸುವಂತದ್ದಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಶ್ಚಿಮಘಟ್ಟ ವ್ಯಾಪ್ತಿಯ ಗುಡ್ಡಗಾಡು ಪ್ರದೇಶದಲ್ಲಿ ಜೇನು ಕುರುಬ, ಎರವ, ಬೆಟ್ಟ ಕುರುಬ, ಸೋಲಿಗ, ಮಲೆಕುಡಿಯ, ಸಿದ್ದಿ, ಕೊರಗ ಸೇರಿದಂತೆ ಹಲವು ಅರಣ್ಯ ಮೂಲ ಬುಡಕಟ್ಟು ಸಮುದಾಯಗಳಿವೆ. ಈ ಸಮುದಾಯಗಳಿಗೆ ವರ್ಷದ 6 ತಿಂಗಳ ಕಾಲ ಉಚಿತ ಪೌಷ್ಠಿಕ ಆಹಾರ ಯೋಜನೆ ಜಾರಿ ಮಾಡಲಾಗಿದೆ. ತಲಾ ಕುಟುಂಬಕ್ಕೆ 15 ಕೆಜಿಯಷ್ಟು ಆಹಾರ ಧಾನ್ಯಗಳನ್ನು ಉಚಿತವಾಗಿ ನೀಡಲಾಗುತ್ತಿದೆ. ಆದರೆ ಈ ಯೋಜನೆಯೂ ಸಮರ್ಪಕವಾಗಿ ಅನುಷ್ಠಾನವಾಗುತ್ತಿಲ್ಲ ಎಂದು ಆರೋಪಿಸಿದರು.
ಪೌಷ್ಠಿಕ ಆಹಾರ ಯೋಜನೆಗಾಗಿ 2012-13ನೇ ಸಾಲಿನಲ್ಲಿ 20 ಕೋಟಿ ಖರ್ಚು ಮಾಡಲಾಗಿದೆ. ಆದರೆ ಇಲ್ಲಿಯವರೆಗೂ ಶಿವಮೊಗ್ಗ ಜಿಲ್ಲೆಯಲ್ಲಿರುವ ಹಸಲರು ಹಾಗೂ ಗೊಂಡ ಸಮುದಾಯಗಳಿಗೆ ಯೋಜನೆ ಸೌಲಭ್ಯ ಸಿಗುತ್ತಿಲ್ಲ. ಪೌಷ್ಠಿಕಾಂಶದ ಕೊರತೆಯಿಂದ ಬುಡಕಟ್ಟು ಜನರು ಹಲವು ರೋಗಗಳಿಗೆ ತುತ್ತಾಗುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಅರಣ್ಯ ಹಕ್ಕು ಬುಡಕಟ್ಟು ಕಾಯ್ದೆಯನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನ ಮಾಡಲಾಗಿಲ್ಲ. ಇದರಿಂದ ಬುಡಕಟ್ಟು ಸಮುದಾಯದವರಿಗೆ ಅನ್ಯಾಯವಾಗಿದ್ದು, ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

