ಶಿವಮೊಗ್ಗ

ಬಡವರ ನಿರ್ಲಕ್ಷ್ಯ ಮಾಡುವ ಅಧಿಕಾರಿಗಳ ಘೇರಾವ್ ಮಾಡಿ

Published On :

ಶಿವಮೊಗ್ಗ: ಬಡವರನ್ನು ನಿರ್ಲಕ್ಷ್ಯದಿಂದ ಕಾಣುವ ಅಧಿಕಾರಿಗಳನ್ನು ಘೇರಾವ್ ಮಾಡಿ ಕೆಲಸ ಮಾಡಿಸಿಕೊಳ್ಳಬೇಕಿದೆ. ಇಲ್ಲದಿದ್ದರೆ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂದು ಮಾಜಿ ಶಾಸಕ  ಕರಿಯಣ್ಣ ಹೇಳಿದ್ದಾರೆ.
 ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಶಿವಮೊಗ್ಗ ಗ್ರಾಮಾಂತರ ವಿಧಾನ ಸಭಾ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಬೂತ್, ಗ್ರಾಮ, ಜಿಪಂ ವ್ಯಾಪ್ತಿಯಲ್ಲಿ ನಿಷ್ಟೆಯಿಂದ ಕಾರ್ಯನಿರ್ವಹಿಸಬೇಕಿದ್ದು, ಪಕ್ಷದ ಸಂಘಟನೆಗೆ ಶ್ರಮಿಸಬೇಕಿದೆ ಎಂದು ಯಾವುದೇ ಪಕ್ಷ ಸದೃಢವಾಗಿ ಬೆಳೆಯಲು ಕಾರ್ಯಕರ್ತರ ಶ್ರಮವೇ ಮುಖ್ಯ. ಅವರು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ಪಕ್ಷದ ಅಭ್ಯರ್ಥಿ ಜಯಗಳಿಸಲು ಸಾಧ್ಯ ಎಂದರು.
ಸಂಘಟನೆಗೆ ಹೆಚ್ಚಿನ ಒತ್ತು ನೀಡಿ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಸೋಲಿಗೆ ಕಾರಣವೇನು ಎಂಬುದನ್ನು ಈ ವೇಳೆ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಕಾರ್ಯಕರ್ತರು ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತನ್ನು ನೀಡಿದರೆ ಮಾತ್ರ ಲೋಕಸಭಾ ಚುನಾವಣೆ ಎದುರಿಸಲು ಸಾಧ್ಯ. ಜಿಲ್ಲೆಯ ಕೆಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಗಳಿಸಲು ಸಾಧ್ಯವಾಗಿಲ್ಲ. ಈ ಸೋಲಿಗೆ ಕಾರಣ ಹುಡುಕುವ ಆತ್ಮಾವಲೋಕನ ಸಭೆ ನಡೆಸಬೇಕಾಗಿದೆ ಎಂದು ತಿಳಿಸಿದರು.
ಮನ ಪರಿವರ್ತನೆ: ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಮತದಾರನ ಮನ ಪರಿವರ್ತನೆ ಮಾಡುವಲ್ಲಿ ವಿಫಲರಾಗಿದ್ದಾರೆ. ಅಲ್ಲದೇ ಗ್ರಾಮಾಂತರ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಗ್ರಾಮ ಮತ್ತು ಜಿಪಂ ಚುನಾವಣೆಯಲ್ಲಿಯೂ ಪಕ್ಷ ಸೋಲು ಕಂಡಿರುವುದು ವಿಪಾರ್ಯಸ. ಆದ್ದರಿಂದ ಮುಂದಿನ ದಿನಗಳು ಗ್ರಾಮಾಂತರ ಪ್ರದೇಶದಲ್ಲಿ ಕಠಿಣವಾಗುವ ಸಾಧ್ಯತೆಗಳಿವೆ ಎಂದರು.
 ಜಿಲ್ಲೆಯ ಜನರ ಮೂಲ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಸಜ್ಜುಗೊಳ್ಳಬೇಕಾಗಿದೆ. ಇಂದು ನಿವೇಶನಗಳ ಹಂಚಿಕೆ, ಬಗರ್‌ಹುಕುಂ ಸಾಗುವಳಿ ಮುಂತಾದ ಸಮಸ್ಯೆಗಳು ಸಮಸ್ಯೆಗಳಾಗಿಯೇ ಉಳಿದಿವೆ ಎಂದ ಅವರು, ಬಿಜೆಪಿ ಸರ್ಕಾರ ಅಸ್ಥಿತ್ವದಲ್ಲಿದ್ದ ವೇಳೆ ಕೆಲ ಮುಸ್ಲಿಂ ಬಡಾವಣೆಗಳಲ್ಲಿನ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ಮಾಡಿಲ್ಲ. ಈ ಬಾರಿ ಈ ರೀತಿ ಆಗಾಗಬಾರದು ಪ್ರತಿಯೊಬ್ಬರಿಗೂ ಹಕ್ಕುಪತ್ರ ವಿತರಣೆ ಮಾಡುವಂತೆ ಬೂತ್‌ಮಟ್ಟದ ಕಾರ್ಯಕರ್ತರು ನೋಡಿಕೊಳ್ಳಬೇಕು ಎಂದರು.
 ಸಮಾಜದ ಸಮಸ್ಯೆಗಳ ವಿರುದ್ಧ ಹೋರಾಡಲು ಕಾರ್ಯಕರ್ತರು ಸಿದ್ಧರಾಗಬೇಕು. ಈಗಲೇ ಸಮಸ್ಯೆಗಳನ್ನು ಪರಿಹರಿಸದಿದ್ದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಕ್ಕ ಬೆಲೆ ತೆರಬೇಕಾಗುತ್ತದೆ. ಬೂತ್ ಮಟ್ಟದ ಕಾರ್ಯಕರ್ತರು ಇಂದಿನಿಂದಲೇ ನಿರಂತರ ಸಭೆ ನಡೆಸುವ ಮೂಲಕ ಪಕ್ಷದ ಬಲವರ್ಧನೆಗೆ ಮುಂದಾಗಬೇಕು ಎಂದು ತಿಳಿಸಿದರು.
 ಕಾಗೋಡು ತಿಮ್ಮಪ್ಪ ಮತ್ತು ಕಿಮ್ಮನೆ ರತ್ನಾಕರ್ ಅವರಿಗೆ ಬಗರ್ ಹುಕುಂ ಸಾಗುವಳಿ ರೈತರ ಸಮಸ್ಯೆಗಳ ಬಗ್ಗೆ ಅರಿವಿದೆ. ಅವರ ಮುಂದಾಳತ್ವದಲ್ಲಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳೊಣ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.