ಶಿವಮೊಗ್ಗ

ಕಾರು ವಿತರಣೆಯಲ್ಲಿ ಭ್ರಷ್ಟಾಚಾರ: ಡಿಸಿಗೆ ಮನವಿ

Published On :

ಶಿವಮೊಗ್ಗ: ಪ್ರವಾಸೋದ್ಯಮ ಇಲಾಖೆಯಿಂದ ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಸೇರಿದ ನಿರುದ್ಯೋಗಿ ಯುವಕರಿಗೆ ನೀಡಲಾಗುವ ಇಂಡಿಕಾ ಪ್ರವಾಸಿ ಕಾರು ವಿತರಣೆಯಲ್ಲಿ ಭ್ರಷ್ಟಾಚಾರ ನಡೆದಿದ್ದು, ಕೂಡಲೇ ತನಿಖೆ ನಡೆಸುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗವು ಜಿಲ್ಲಾಧಿಕಾರಿ ವಿಪುಲ್ ಬನ್ಸಲ್‌ಗೆ ಮನವಿ ಅರ್ಪಿಸಿತು.
ಕಾರು ಖರೀದಿಗೆ 3.60 ಲಕ್ಷ ವೆಚ್ಚ ತಗುಲಲಿದ್ದು, ಇದರಲ್ಲಿ ಶೇ.50ರಷ್ಟು ಅನುದಾನವನ್ನು ಪ್ರವಾಸೋದ್ಯಮ ಇಲಾಖೆ ಭರಿಸಲಿದೆ. ಶೇ.5ರಷ್ಟು ಹಣವನ್ನು ಫಲಾನುಭವಿ ನೀಡಬೇಕು. ಉಳಿದ ಶೇ.45ರಷ್ಟು ಹಣವನ್ನು ರಾಷ್ಟ್ರೀಕೃತ ಬ್ಯಾಂಕ್‌ಗಳ ಮೂಲಕ ಸಾಲ ಸೌಲಭ್ಯ ದೊರಕಲಿದೆ. 2012-13ನೇ ಸಾಲಿನಲ್ಲಿ ಜಿಲ್ಲೆಗೆ ಒಟ್ಟಾರೆ 28 ಪ್ರವಾಸಿ ಇಂಡಿಕಾ ಕಾರು ಮಂಜೂರಾಗಿದೆ. ಸೌಲಭ್ಯ ಪಡೆಯಲು ನೂರಾರು ಎಸ್ಸಿ-ಎಸ್ಟಿ ವರ್ಗಕ್ಕೆ ಸೇರಿದ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಿದ್ದಾರೆ. ಆದರೆ ಫಲಾನುಭವಿಗಳ ಆಯ್ಕೆಯಲ್ಲಿ ಸರ್ಕಾರದ ನಿಯಮಾವಳಿ ಪಾಲನೆ ಮಾಡಲಾಗಿಲ್ಲ ಎಂದು ಮನವಿಯಲ್ಲಿ ವಿವರಿಸಲಾಗಿದೆ.
ಸಂದರ್ಶನ ನಡೆದಿಲ್ಲ: ಸರ್ಕಾರದ ನಿಯಮದ ಪ್ರಕಾರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು. ಈ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸಂದರ್ಶನಕ್ಕೆ ಆಹ್ವಾನ ಪತ್ರ ಬರುತ್ತದೆ ಎಂದು ಕಾದು ಕುಳಿತಿದ್ದರು. ಆದರೆ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಸಂದರ್ಶನಕ್ಕೆ ಆಹ್ವಾನ ನೀಡದೆ ಮಾರ್ಚ್- ಏಪ್ರಿಲ್ ಮಾಹೆಯಲ್ಲಿ ಫಲಾನುಭವಿಗಳ ಆಯ್ಕೆ ಮಾಡಿದ್ದಾರೆ ಎಂದು ದೂರಿದರು.
ಫಲಾನುಭವಿಗಳ ಆಯ್ಕೆಯಲ್ಲಿ ಭ್ರಷ್ಟಾಚಾರ ನಡೆದಿರುವ ಶಂಕೆ ವ್ಯಕ್ತವಾಗುತ್ತಿದೆ. ಅನರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಇದರಲ್ಲಿ ವ್ಯಾಪಕ ಗೋಲ್‌ಮಾಲ್ ನಡೆದಿದೆ ಎಂದು ಮನವಿಯಲ್ಲಿ ಆರೋಪಿಸಿದ್ದಾರೆ.
ಈ ಕೂಡಲೇ ಜಿಲ್ಲಾಧಿಕಾರಿಯವರು ಹಾಲಿ ಆಯ್ಕೆ ಮಾಡಲಾಗಿರುವ ಫಲಾನುಭವಿಗಳ ಪಟ್ಟಿಯನ್ನು ರದ್ದುಪಡಿಸಬೇಕು. ಅರ್ಹ ಫಲಾನುಭವಿಗಳ ಆಯ್ಕೆ ಮಾಡಲು ಸೂಕ್ತ ಕ್ರಮಕೈಗೊಳ್ಳಬೇಕು. ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.