ಕಲ್ಲು ಗಣಿಗಾರಿಕೆ ನಿಲ್ಲಿಸಲು ಗ್ರಾಮಸ್ಥರ ಆಗ್ರಹ
ಶಿವಮೊಗ್ಗ: ಕಲ್ಲು ಗಣಿಗಾರಿಕೆ ಮಾಡುವ ಮಾಲೀಕರು ನಮಗೆ ಜೀವ ಬೆದರಿಕೆ ಹಾಕುತ್ತಿದ್ದು, ನಮಗೆ ಸೂಕ್ತ ರಕ್ಷಣೆ ಒದಗಿಸುವಂತೆ ಒತ್ತಾಯಿಸಿ ಸೊರಬ ತಾಲೂಕಿನ ಕೆಲ ಗ್ರಾಮಗಳ ಗ್ರಾಮಸ್ಥರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾ ರಕ್ಷಣಾಧಿಕಾರಿ ಕೌಶಲೇಂದ್ರ ಕುಮಾರ್ ಅವರಿಗೆ ಮನವಿ ಮಾಡಿದರು.
ತಾಲೂಕಿನ ಬೆಲವಂತನಕೊಪ್ಪ, ಕುಣೇತಪ್ಪ, ತೆಪ್ಪ, ಕಮನವಳ್ಳಿ, ಎಣ್ಣೆಕೊಪ್ಪ ಗ್ರಾಮಸ್ಥರು ಇಲ್ಲಿನ ಸರ್ವೇ ನಂ. 128, 100, 101, 103ರ ಗೋಮಾಳದಲ್ಲಿ ಹಲವು ವರ್ಷಗಳಿಂದ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಹಗಲು- ರಾತ್ರಿ ಎನ್ನದೇ ಕಲ್ಲುಗಳನ್ನು ಸ್ಪೋಟಿಸಲಾಗುತ್ತಿದೆ. ಇದರಿಂದ ಸ್ಥಳೀಯ ಗ್ರಾಮಸ್ಥರಿಗೆ ತೊಂದರೆಯಾಗುತ್ತಿದೆ ಎಂದು ಗ್ರಾಮಸ್ಥರು ದೂರಿದರು.
ಸರ್ವೇ ನಂ. 129 ರಲ್ಲಿ ಆಶ್ರಯ ನಿವೇಶನಕ್ಕೆ ಮಂಜೂರಾಗಿದೆ. ಆದರೆ, ಗಣಿಗಾರಿಕೆಯಿಂದ ಮನೆ ನಿರ್ಮಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕಲ್ಲು ಗಣಿಗಾರಿಕೆಯಿಂದ ಸುತ್ತಮುತ್ತಲಿನ ಕೃಷಿ ಭೂಮಿಯಲ್ಲಿ ಬೆಳೆ ಬೆಳೆಯಲು ಸಾಧ್ಯವಾಗುತ್ತಿಲ್ಲ. ಅಕ್ರಮ ಗಣಿಗಾರಿಕೆ ತಡೆಯುವಂತೆ ಒತ್ತಾಯಿಸಿ ಈಗಾಗಲೇ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಆದರೆ, ಯಾವುದೇ ಕ್ರಮ ಕೈಗೊಂಡಿಲ್ಲ. ಸಂಪೂರ್ಣ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದರು.
ಕಲ್ಲು ಗಣಿಗಾರಿಕೆ ಸ್ಫೋಟದಿಂದ ಹಲವು ಗ್ರಾಮಸ್ಥರು ಗಾಯಗೊಂಡಿದ್ದಾರೆ. ಈ ಗ್ರಾಮಗಳ ವ್ಯಾಪ್ತಿಯಲ್ಲಿ ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಸುರಕ್ಷಾವಲಯ ಸ್ಥಾಪಿಸಲು ಯತ್ನಿಸಲಾಗುತ್ತಿದೆ. ಇದರಿಂದ ಗ್ರಾಮಸ್ಥರು ಜೀವನ ನಡೆಸುವುದೇ ಅಸಾಧ್ಯವಾಗಲಿದೆ ಎಂದು ಪ್ರತಿಭಟನಾಕಾರರು ಆಪಾದಿಸಿದರು.
ಮನವಿ ಸ್ಪೀಕರಿಸಿ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಕೌಶಲೇಂದ್ರ ಕುಮಾರ್, ಅಕ್ರಮ ಗಣಿಗಾರಿಕೆ ನಡೆಸುವವರ ವಿರುದ್ದ ಕಾನೂನು ರೀತಿ ಕ್ರಮಕೈಗೊಳ್ಳಲಾಗುವುದು. ಈ ಕುರಿತಂತೆ ಆನವಟ್ಟಿ ಪೊಲೀಸ್ ಠಾಣೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಅಗತ್ಯ ಕ್ರಮಕೈಗೊಳ್ಳಲಾಗುವುದು. ಸೂಕ್ತ ರಕ್ಷಣೆ ನೀಡುತ್ತೇವೆ ಎಂದು ಭರವಸೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

